ಪ್ರಧಾನಿ ಮೋದಿ ಸಮಾವೇಶಕ್ಕೆ ಮಂಗಳೂರಿನ ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ಭರ್ಜರಿ ಸಿದ್ಧತೆ
ಮಂಗಳೂರು, ಸೆಪ್ಟೆಂಬರ್, 01: ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ(ಸೆ.2) ಮಂಗಳೂರಿಗೆ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ನಗರದ ಹೊರವಲಯದ ಕೂಳೂರು ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ಬೃಹತ್ ಸಮಾವೇಶಕ್ಕೆ ಭರದ ಸಿದ್ಧತೆ ನಡೆಯುತ್ತಿದ್ದು, ಸ್ಥಳಕ್ಕೆ ಎಸ್‌ಪಿಜಿ ಅಧಿಕಾರಿಗಳು, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
25 ಎಕರೆ ಪ್ರದೇಶದಲ್ಲಿ ಜರ್ಮನ್ ತಂತ್ರಜ್ಞಾನದಲ್ಲಿ ಬೃಹತ್ ಪೆಂಡಾಲ್ ಅಳವಡಿಕೆ ಕಾರ್ಯ ನಡೆಯುತ್ತಿದ್ದು, ಸಾವಿರಾರು ಮಂದಿ ಕಾರ್ಮಿಕರು ಕೆಲಸದಲ್ಲಿ ನಿರತರಾಗಿದ್ದಾರೆ. ಮೈದಾನದ ಸುತ್ತಲೂ ತಡೆ ಬೇಲಿಯ ಅಳವಡಿಕೆ ಮಾಡಲಾಗಿದೆ. ಸ್ಟೀಲ್ ಶೀಟ್‌ಗಳ ಮೇಲೆ ಬಿಳಿ ಬಟ್ಟೆ ಹಾಕಿ ತಡೆಬೇಲಿ ನಿರ್ಮಾಣ ಮಾಡಲಾಗಿದೆ. ಕಾರ್ಯಕ್ರಮಕ್ಕೆ ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ ಇದೆ. ಪೆಂಡಾಲ್ ಒಳಗಡೆ 80 ಸಾವಿರ ಜನ ಕುಳಿತುಕೊಳ್ಳುವ ವ್ಯವಸ್ಥೆ ಮಾಡಲಾಗಿದೆ. ಮೈದಾನದ ಸುತ್ತಲೂ 15 ಕಡೆಗಳಲ್ಲಿ ವಾನಹಗಳ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ.
ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಈ ಬಗ್ಗೆ ಮಾತನಾಡಿ, ''ಕಾರ್ಯಕ್ರಮದಲ್ಲಿ ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ ಇದೆ. ಆದ್ದರಿಂದ ಪೆಂಡಾಲ್ ಒಳಗೆ 80 ಸಾವಿರ ಜನ ಕುಳಿತುಕೊಳ್ಳುವ ವ್ಯವಸ್ಥೆ ಮಾಡಲಾಗಿದೆ. ಪ್ರಧಾನಿ ಮೋದಿ ಅವರ ಸಮಾವೇಶ ಮಧ್ಯಾಹ್ನ 2:30ರ ಸುಮಾರಿಗೆ ಮುಗಿಯಲಿದೆ. ದೂರದ ಊರುಗಳಿಂದ ಬರುವ ಜನರಿಗೆ ಊಟ, ಉಪಚಾರದ ವ್ಯವಸ್ಥೆಯನ್ನು ಮಾಡಲಾಗಿದೆ. ಭದ್ರತೆಯ ದೃಷ್ಟಿಯಿಂದ ಸ್ಥಳಕ್ಕೆ ಎಸ್‌ಪಿಜಿ ತಂಡ ಆಗಮಿಸಿದ್ದು, ಪರಿಶೀಲನೆ ನಡೆಸಿದೆ. ಮೋದಿ ಅವರು ಪ್ರಧಾನಿ ಆದ ಬಳಿಕ ಇದೇ ಮೊದಲ ಬಾರಿಗೆ ಮಂಗಳೂರಿನ ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ'' ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದರು.

ಈಗಾಗಲೇ ಮಂಗಳೂರು ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಅವರು ಸಂಚಾರ ಮಾರ್ಗಗಳ ಕುರಿತು ಮಾಹಿತಿ ನೀಡಿದ್ದರು. ಪ್ರಯಾಣಿಕರಿಗೆ ತೊಂದರೆ ಆಗಬಾರದು ಎನ್ನುವ ನಿಟ್ಟಿನಲ್ಲಿ ಸಂಚಾರದ ಮಾರ್ಗಗಳ ಬದಲಾವಣೆ ಬಗ್ಗೆಯೂ ಸಂಪೂರ್ಣ ಮಾಹಿತಿಯನ್ನು ನೀಡಿದ್ದರು. ಸೆಪ್ಟೆಂಬರ್ 2ರಂದು ಬೆಳಗ್ಗೆ 6 ರಿಂದ ಸಂಜೆ 6 ರವರೆಗೆ ಕೂಳೂರು ಜಂಕ್ಷನ್‌ನಿಂದ ಕೊಟ್ಟಾರ ಜಂಕ್ಷನ್‌ವರೆಗೆ ಸಾಮಾನ್ಯ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಉಳಿದಂತೆ ಮಂಗಳೂರು ನಗರದ 9 ಕಡೆಗಳಲ್ಲಿ ಸಂಚಾರ ಬದಲಾವಣೆ ಮಾಡಲಾಗಿದೆ ಎಂದು ಸೂಚನೆ ನೀಡಿದ್ದರು.
ಭದ್ರತೆಗೆ 2,000 ಮಂದಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಅಲ್ಲದೆ ಕೆಎಸ್ಆರ್‌ಪಿ, ಎಎನ್ಎಫ್, ಸಿಎಐಆರ್, ಡಿಐಆರ್, ಆರ್ ಎಎಫ್, ಗರುಡ ಪಡೆ ಸೇರಿದಂತೆ ಒಟ್ಟಾರೆ 3,000ದಷ್ಟು ಪೊಲೀಸರನ್ನು ಭದ್ರತೆಗೆ ನಿಯೋಜನೆ ಮಾಡಲಾಗಿದೆ. ಭದ್ರತೆಗೆ ಯಾವ ಲೋಪ ಆಗದಂತೆ ವ್ಯವಸ್ಥೆ ಮಾಡಲಾಗಿದೆ. ಪ್ರಧಾನಿ ಅವರು ಪಕ್ಕದ ರಾಜ್ಯ ಕೇರಳಕ್ಕೆ ಭೇಟಿ ನೀಡಿ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ನಂತರ ಮಂಗಳೂರು ನಗರಕ್ಕೆ ಆಗಮಿಸಲಿದ್ದಾರೆ. ರಾಜ್ಯದಲ್ಲಿ ಮತ್ತೆ ಅಧಿಕಾರ ಹಿಡಿಯುವ ಉದ್ದೇಶದಿಂದ ಮುಂದಿನ ವರ್ಷದ ವಿಧಾನಸಭಾ ಚುನಾವಣೆಗೆ ತಯಾರಿ ನಡೆಸುತ್ತಿದೆ. ಹಾಗಾಗಿ ರಾಜ್ಯದ ಬಿಜೆಪಿ ನಾಯಕರಿಗೆ ಅವರು ಉತ್ತೇಜನ ನೀಡುವ ಸಾಧ್ಯತೆಯಿದೆ.












Click it and Unblock the Notifications