ಮಂಗಳೂರಿನಲ್ಲಿ ಮಳೆ ಅಬ್ಬರ: ಮರ ಧರೆಗುರುಳಿ ನಾಲ್ವರಿಗೆ ಗಾಯ
ಮಂಗಳೂರು ಜೂನ್ 08: ಮಂಗಳೂರಿನಲ್ಲಿ ಮಳೆ ಬಿರುಸುಗೊಂಡಿದೆ. ಶುಕ್ರವಾರ ರಾತ್ರಿ ಸುರಿದ ಗಾಳಿ ಸಹಿತ ಮಳೆಗೆ ಬೃಹತ್ ಅಶ್ವತ್ಥ ಮರ ಉರುಳಿದ ಬಿದ್ದ ಪರಿಣಾಮ ನಾಲ್ವರು ಗಾಯಗೊಂಡಿದ್ದಾರೆ.
ನಗರದ ಮಂಗಳಾದೇವಿ ದೇವಸ್ಥಾನದ ಮುಂಭಾಗದಲ್ಲಿರುವ ಬೃಹತ್ ಅಶ್ವತ್ಥ ವೃಕ್ಷ ಏಕಾಏಕಿ ಉರುಳಿಬಿದ್ದಿದೆ. ಈ ಸಂದರ್ಭದಲ್ಲಿ ದೇವಾಲಯದ ಆವರಣದಲ್ಲಿದ್ದ 4 ಮಂದಿ ಗಾಯಗೊಂಡಿದ್ದಾರೆ.
ಗಾಯಗೊಂಡವರನ್ನು ಸುರೇಖ (63), ಪ್ರವೀಣ್ ಸುವರ್ಣ (49), ನವೀನ್ (45), ತೇಜಸ್ವಿನಿ (20) ಎಂದು ಗುರುತಿಸಲಾಗಿದೆ.

ಘಟನೆ ನಡೆದ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ, ಸ್ಥಳೀಯರು ಮತ್ತು ಪೊಲೀಸರು ತೆರವು ಕಾರ್ಯಾಚರಣೆ ನಡೆಸಿದ್ದು, ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ .
ಹೆಚ್ಚಾಯಿತು ಮಳೆಯ ಅಬ್ಬರ
ಕರಾವಳಿಯಲ್ಲಿ ಮಳೆಯ ಅಬ್ಬರ ಹೆಚ್ಚಾಗುತ್ತಿದ್ದು, ಸಮುದ್ರ ಪ್ರಕ್ಷುಬ್ಧಗೊಂಡಿದೆ. ಶನಿವಾರ ಮುಂಜಾನೆಯಿಂದ ಮಂಗಳೂರು ಸೇರಿದಂತೆ ಜಿಲ್ಲೆಯ ಇತರೆಡೆ ಉತ್ತಮ ಮಳೆಯಾಗುತ್ತಿದೆ. ಈ ಪರಿಣಾಮ ಜಿಲ್ಲೆಯಲ್ಲಿ ಜನಜೀವನ ಅಸ್ತವ್ಯಸ್ತ ಗೊಂಡಿದೆ.

ದಕ್ಷಿಣ ಕನ್ನಡ, ಉಡುಪಿ, ಕೇರಳದ ಕಾಸರಗೋಡು ಜಿಲ್ಲೆ ಸೇರಿದಂತೆ ಕರಾವಳಿಯಾದ್ಯಂತ ಭಾರೀ ಮಳೆ ಸುರಿಯುತ್ತಿದೆ. ಮಳೆಯೊಂದಿಗೆ ವೇಗವಾಗಿ ಜೋರಾದ ಗಾಳಿಯೂ ಬೀಸುತ್ತಿರುವುದು ಜನರಲ್ಲಿ ಆತಂಕ ಮೂಡಿಸಿದೆ. ಬಿರುಸಿನ ಮಳೆಯೊಂದಿಗೆ ವೇಗವಾಗಿ ಗಾಳಿ ಬೀಸುತ್ತಿರುವುದರಿಂದ ಜಿಲ್ಲೆಯ ಹಲವೆಡೆ ಮರಗಳು ನೆಲಕ್ಕುರುಳಿವೆ.
ಜಿಲ್ಲೆಯ ಹಲವು ಭಾಗದಲ್ಲಿ ವಿದ್ಯುತ್ ಕೈಕೊಟ್ಟಿದೆ. ಗಾಳಿಯ ರಭಸದಿಂದಾಗಿ ಸಮುದ್ರ ತೀರದಲ್ಲಿ ಅಲೆಗಳ ಅಬ್ಬರವೂ ಹೆಚ್ಚಾಗಿದ್ದು ಕಡಲು ಭೋರ್ಗರೆಯುತ್ತ ದಡಕ್ಕೆ ಅಪ್ಪಳಿಸುತ್ತಿದೆ.

ಕೇಂದ್ರ ಹವಾಮಾನ ಇಲಾಖೆ ಶುಕ್ರವಾರ ರಾಜ್ಯ ಸರಕಾರಕ್ಕೆ ಪತ್ರ ಬರೆದು ಕರಾವಳಿಯಲ್ಲಿ ಜೂನ್ 12 ರವರೆಗೆ ಭಾರಿ ಮಳೆಯಾಗುವ ಎಚ್ಚರಿಕೆ ನೀಡಿದ್ದು, ಕಟ್ಟೆಚ್ಚರ ವಹಿಸಲು ಸೂಚನೆ ನೀಡಿದೆ.

ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಣೆ ಮಾಡಿದೆ. ಪಶ್ಚಿಮ ಘಟ್ಟಗಳ ಪ್ರದೇಶದಲ್ಲಿಯೂ ಭಾರಿ ಮಳೆಯಾಗುತ್ತಿರುವುದರಿಂದ ಜಿಲ್ಲೆಯ ಹೊಳೆ, ನದಿಗಳು ತುಂಬಿ ಅಪಾಯ ಮಟ್ಟದಲ್ಲಿ ಹರಿಯುತ್ತಿವೆ.












Click it and Unblock the Notifications