ಹಿಂದೂ ನಾಯಕರಿಗೆ ಸೂಕ್ತ ಭದ್ರತೆ ಕಲ್ಪಿಸಿ: ನಳಿನ್ ಕುಮಾರ್ ಕಟೀಲ್
ಮಂಗಳೂರು, ಜನವರಿ 13: ಕರಾವಳಿಯ ಹಿಂದೂ ನಾಯಕರ ಹತ್ಯೆಗೆ ದುಷ್ಕರ್ಮಿಗಳು ಸಂಚು ರೂಪಿಸಿದ್ದಾರೆ ಎನ್ನುವ ಮಾಹಿತಿ ಬಹಿರಂಗಗೊಳ್ಳುತ್ತಿದ್ದಂತೆ ಕರಾವಳಿಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಕೇಂದ್ರ ಗುಪ್ತಚರ ಇಲಾಖೆ ಮಾಹಿತಿ ಅನ್ವಯ ಕರಾವಳಿಯ ಹಿಂದೂ ನಾಯಕರ ಭದ್ರತೆ ಹೆಚ್ಚಿಸಲಾಗಿದೆ. ಅದರಲ್ಲೂ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಅವರಿಗೆ ಹೆಚ್ಚಿನ ಭದ್ರತೆ ನೀಡಲಾಗಿದೆ.
ಕರಾವಳಿಯ ಹಿಂದೂ ಮುಖಂಡ ಹತ್ಯೆಗೆ ಸಂಚು ರೂಪಿಸಿರುವ ವಿಚಾರದ ಕುರಿತು ಸಂಸದ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯಿಸಿ ಈ ಪ್ರಕರಣವನ್ನು ರಾಜ್ಯ ಸರಕಾರ ಗಂಭೀರವಾಗಿ ಪರಿಗಣಿಸಬೇಕು. ಹಿಂದೂ ನಾಯಕರಿಗೆ ಸೂಕ್ತ ಭದ್ರತೆ ಕಲ್ಪಿಸಬೇಕೆಂದು ಆಗ್ರಹಿಸಿದ್ದಾರೆ.
ಈ ಹಿಂದೆ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಕಾಂಗ್ರೆಸ್ ಸರಕಾರದ ತುಷ್ಟೀಕರಣ ನೀತಿಯಿಂದಾಗಿ ಕರಾವಳಿಯಲ್ಲಿ ಅಮಾಯಕ ಹಿಂದೂ ಯುವಕರ ಹತ್ಯೆ ನಡೆದಿದೆ. ಈ ಹಿನ್ನೆಲೆಯಲ್ಲಿ ದುರಂತ ನಡೆಯುವ ಮೊದಲೇ ರಾಜ್ಯ ಸರಕಾರ ತಕ್ಷಣ ಎಚ್ಚೆತ್ತುಕೊಳ್ಳಬೇಕು. ರಾಷ್ಟ್ರ ವಿರೋಧಿ ಮತೀಯವಾದಿ ಶಕ್ತಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಆರ್ ಎಸ್ ಎಸ್ ಮುಖಂಡರಾದ ಕಲ್ಲಡ್ಕ ಡಾ. ಪ್ರಭಾಕರ ಭಟ್ , ವಿಶ್ವ ಹಿಂದೂ ಪರಿಷತ್‌ನ ಮುಖಂಡರಾದ ಜಗದೀಶ ಶೇಣವ ಮತ್ತು ಶರಣ್ ಪಂಪ್ ವೆಲ್ ಹತ್ಯೆಗೆ ಮತೀಯ ಶಕ್ತಿಗಳು ಸಂಚು ನಡೆಸಿವೆ ಎನ್ನುವ ಮಾಹಿತಿಯಿಂದ ಕರಾವಳಿಯಲ್ಲಿ ಆತಂಕದ ಸ್ಥಿತಿ ನಿರ್ಮಾಣವಾಗಿದೆ ಈ ಆತಂಕ ನಿವಾರಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ಕ್ರಮ ಕೈಗೊಳ್ಳಬೇಕು ಎಂದು ನಳಿನ್ ಕುಮಾರ್ ಕಟೀಲ್ ಆಗ್ರಹಿಸಿದರು.












Click it and Unblock the Notifications