School Holiday: ರಾಜ್ಯದ ಈ ಜಿಲ್ಲೆಯ ಎಲ್ಲಾ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ಶುಕ್ರವಾರ ರಜೆ ಘೋಷಣೆ
School Holiday: ರಾಜ್ಯದಲ್ಲಿ ಬಹುತೇಕ ಭಾಗಗಳಲ್ಲಿ ಮುಂಗಾರು ಕೈಕೊಟ್ಟಿದ್ದು, ಕೆಲವೇ ಕೆಲವೆಡೆ ಮಾತ್ರ ಭಾರಿ ಮಳೆ ಮುಂದುವರೆದಿದೆ. ಇನ್ನು ಶುಕ್ರವಾರ (ಜುಲೈ 03) ವರುಣನ ಆರ್ಭಟದ ಮುನ್ಸೂಚನೆ ಇರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಈ ಜಿಲ್ಲೆಯ ಎಲ್ಲಾ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಕಟ್ಟಿನಿಟ್ಟಿನ ಆದೇಶ ಹೊರಡಿಸಿದ್ದಾರೆ. ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಮುಂದುವರೆಯುವ ಮುನ್ಸೂಚನೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಶುಕ್ರವಾರ (ಜುಲೈ 3) ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಅಲ್ಲದೆ, ಮಕ್ಕಳ ಹಿತದೃಷ್ಟಿಯಿಂದ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯಲ್ಲಿ ಎಲ್ಲಾ ಅಂಗನವಾಡಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಈಗಾಗಲೇ ಭಾರಿ ಮಳೆ ಹಿನ್ನೆಲೆ ಜುಲೈ 2ರಂದು ಜಿಲ್ಲೆಯಲ್ಲಿ ರಜೆ ಘೋಷಣೆ ಮಾಡಲಾಗಿತ್ತು.

ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ಅಂಗನವಾಡಿಯಿಂದ ದ್ವಿತೀಯ ಪಿಯುಸಿವರೆಗಿನ ವಿದ್ಯಾರ್ಥಿಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲೆಯ ಎಲ್ಲಾ ಸರ್ಕಾರಿ, ಖಾಸಗಿ ಅನುದಾನಿತ ಶಾಲಾ-ಕಾಲೇಜುಗಳಿಗೆ ಶುಕ್ರವಾರ ರಜೆ ಘೋಷಿಸಿ ದಕ್ಷಿಣ ಕನ್ನಡದ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಅವರು ಆದೇಶ ಹೊರಡಿಸಿದ್ದಾರೆ. ಒಂದು ವೇಳೆ ಜಿಲ್ಲಾಡಳಿತದ ಈ ಆದೇಶವನ್ನು ಮೀರಿ ತರಗತಿಗಳನ್ನು ನಡೆಸುವುದು ಕಂಡುಬಂದರೆ ವಿಪತ್ತು ನಿರ್ವಹಣಾ ಕಾಯ್ದೆ 2005ರ ಅಡಿಯಲ್ಲಿ ಕಾನೂನು ಕ್ರಮವನ್ನು ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಕಾರವಾರ ತಾಲೂಕಿನಲ್ಲೂ ಶಾಲೆಗಳಿಗೆ ರಜೆ ಘೋಷಣೆ
ಮತ್ತೊಂದೆಡೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನಲ್ಲಿ ಭಾರಿ ಮಳೆ ಮುಂದುವರೆದಿದೆ. ಈ ಹಿನ್ನೆಲೆ ಕಾರವಾರ ತಹಶೀಲ್ದಾರ್ ನಿಚ್ಚಲ್ ನರೋನಾ ಅವರು ಮಕ್ಕಳ ಹಿತದೃಷ್ಟಿಯಿಂದ ತಾಲೂಕಿನ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಶುಕ್ರವಾರ (ಜುಲೈ 03) ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.
ಉತ್ತರ ಕನ್ನಡದ ಕರಾವಳಿ ಭಾಗದಲ್ಲಿ ಸಮುದ್ರದ ಅಲೆಗಳ ಅಬ್ಬರ ಹೆಚ್ಚಾಗಿದ್ದು, ಮುಂದಿನ ಹಲವು ದಿನಗಳವರೆಗೆ ಈ ಭಾಗದಲ್ಲಿ ಇದೇ ರೀತಿಯ ಮಳೆ ಮುಂದುವರೆಯುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಭಾಗಗಳ ಜನರು ಎಚ್ಚರಿಕೆಯಿಂದ ಇರುಬೇಕು. ಅದರಲ್ಲೂ ಮಳೆ ವೇಳೆ ನದಿ ತೀರ, ಜಲಪಾತ, ಸಮುದ್ರದ ತೀರದ ಪ್ರದೇಶಗಳಿಗೆ ಹೋಗಬಾರದೆಂದು ಮುಂಜಾಗ್ರತಾ ಕ್ರಮವಾಗಿ ಎಚ್ಚರಿಕೆ ಸಂದೇಶವನ್ನು ರವಾನಿಸಲಾಗಿದೆ.
ಹೀಗೆ ಭಾರಿ ಮಳೆ ಮುಂದುವರೆದರೆ ಪರಿಸ್ಥಿತಿ ನೋಡಿಕೊಂಡು ಅಪಾಯದ ಮುನ್ಸೂಚನೆ ಇದ್ದರೆ ಆಯಾ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳು ಅಥವಾ ತಾಲ್ಲೂಕುಗಳಲ್ಲಿ ತಹಶೀಲ್ದಾರರು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡುವ ನಿರ್ಧಾರವನ್ನು ತೆಗೆದುಕೊಳ್ಳಬಹುದು. ಈಗ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ನಿರ್ಮಾಣವಾಗುತ್ತಿದ್ದು, ಹಲವೆಡೆ ಸಾಧಾರಣ ಮಳೆಯಾಗುತ್ತಿದೆ. ಇನ್ನೂ ಕೆಲವೇ ಕಡೆಗಳಲ್ಲಿ ಮಾತ್ರ ಭಾರಿ ಮಳೆ ಮುಂದುವರೆದಿದೆ. ಒಟ್ಟಿನಲ್ಲಿ ಇದೀಗ ನಿಧಾನವಾಗಿ ಮುಂಗಾರು ಚುರುಕು ಪಡೆಯುತ್ತಿರುವ ಮುನ್ಸೂಚನೆ ಕಂಡುಬರುತ್ತಿದೆ.












Click it and Unblock the Notifications