Heavy Rain: ಮುಂದುವರಿದ ಭಾರೀ ಮಳೆ: ಇಂದು ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ಮಂಗಳೂರು, ಜುಲೈ 06: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಆರೆಂಜ್ ಅಲಟ್೯ ಘೋಷಣೆಯಾಗಿದೆ.
ಈ ಹಿನ್ನಲೆಯಲ್ಲಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಜುಲೈ6ರ ಗುರುವಾರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿ ಆಗಿರುವ ಮುಲ್ಲೈ ಮುಗಿಲನ್ ರಜೆ ಘೋಷಿಸಿದ್ದಾರೆ.

ಮುಂಜಾಗ್ರತಾ ಕ್ರಮವಾಗಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಕೈಗೊಂಡಿರುವ ತುರ್ತು ಕ್ರಮಗಳನ್ನು ಕೈಗೊಂಡಿದೆ. ನೀರು ಇರುವ ತಗ್ಗು ಪ್ರದೇಶ ಕೆರೆ, ನದಿ, ಸಮುದ್ರ ತೀರಕ್ಕೆ ಮಕ್ಕಳು ತೆರಳದಂತೆ ಪಾಲಕರು ಜಾಗ್ರತೆ ವಹಿಸಲು ಸೂಚಿಸಲಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.
ಜಿಲ್ಲಾ ಮಟ್ಟದ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು, ವಿಪತ್ತು ನಿರ್ವಹಣಾ ಕಾರ್ಯ ಕೈಗೊಳ್ಳಬೇಕು, ಜಿಲ್ಲಾಡಳಿತದಿಂದ ವಿವಿಧ ಪ್ರದೇಶಗಳಿಗೆ ನೇಮಿಸಲಾಗಿರುವ ನೋಡಲ್ ಅಧಿಕಾರಿಗಳು ಸದಾ ಜಾಗೃತರಾಗಿದ್ದು ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸಬೇಕು. ಮತ್ತು ಜಿಲ್ಲಾಧಿಕಾರಿ ಕಚೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರಬೇಕೆಂದು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಪ್ರವಾಸಿಗರು, ಸಾರ್ವಜನಿಕರು ನದಿ, ಸಮುದ್ರ ತೀರಕ್ಕೆ ತೆರಳದಂತೆ ಸೂಚಿಸಲಾಗಿದ್ದು, ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಪ್ರತಿ ತಾಲೂಕುಗಳಲ್ಲಿ ಕಾಳಜಿ ಕೇಂದ್ರವನ್ನು ತೆರೆದು ಸನ್ನದ್ಧ ಸ್ಥಿತಿಯಲ್ಲಿ ಇರಬೇಕು. ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ಕಂಟ್ರೋಲ್ ರೂಂ 1 0 7 7 ಹಾಗೂ ದೂರವಾಣಿ: 0824 - 2 4 4 2 5 9 0 ಸಂಪರ್ಕಿಸುವಂತೆ ಜಿಲ್ಲಾಡಳಿತ ಕೋರಿದೆ.

ಉಡುಪಿ ಜಿಲ್ಲೆ
ಉಡುಪಿ ಜಿಲ್ಲೆಯಾದ್ಯಂತ ಕಳೆದ ಮೂರು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು ರೆಡ್ ಅಲರ್ಟ್ ಘೋಷಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಉಡುಪಿ ಜಿಲ್ಲೆಯ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಜುಲೈ6ರ ಗುರುವಾರ ರಜೆ ನೀಡಿ ಉಡುಪಿ ಡಿಸಿ ಕೂರ್ಮಾರಾವ್ ಆದೇಶಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆ
ಇನ್ನು ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ಭಾರೀ ಮಳೆ ಹಿನ್ನೆಲೆ ಉತ್ತರ ಕನ್ನಡ ಜಿಲ್ಲೆಯ 5 ತಾಲೂಕುಗಳಲ್ಲಿ ರಜೆ ಘೋಷಣೆ ಮಾಡಿ ಉತ್ತರ ಕನ್ನಡ ಡಿಸಿ ಪ್ರಭುಲಿಂಗ್ ಕವಲಿಕಟ್ಟಿ ಆದೇಶ ಹೊರಡಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದ ಕಾರವಾರ, ಭಟ್ಕಳ, ಹೊನ್ನಾವರ, ಕುಮಟಾ, ಅಂಕೋಲ ತಾಲೂಕುಗಳಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.












Click it and Unblock the Notifications