Belthangady: ಪಟಾಕಿ ಸಿಡಿಸಿದ್ದಕ್ಕೆ ಬಿಜೆಪಿ ಕಾರ್ಯಕರ್ತನ ಮೇಲೆ ಗಂಭೀರ ಹಲ್ಲೆ
ಮಂಗಳೂರು, ಜೂನ್ 05: ಬಿಜೆಪಿಯ ಭದ್ರಕೋಟೆಯಾಗಿರುವ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಬರೋಬ್ಬರಿ ಒಂದು ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಕ್ಷೇತ್ರದಲ್ಲಿ ಪಕ್ಷಕ್ಕೆ ದೊಡ್ಡ ಮಟ್ಟದ ಗೆಲುವು ಸಿಗುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ಸಂಭ್ರಮಿಸಿದ್ದಾರೆ. ಈ ವೇಳೆ ಬಿಜೆಪಿ ಕಾರ್ಯಕರ್ತನ ಮೇಲೆ ಕಾಂಗ್ರೆಸ್ ಕಾರ್ಯಕರ್ತ ಗಂಭೀರವಾಗಿ ಹಲ್ಲೆ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಕಾರ್ಯತಡ್ಕದ ಪೇಟೆಯಲ್ಲಿ ನಡೆದಿದೆ.

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಗೆಲುವು ಸಾಧಿಸುತ್ತಿದ್ದಂತೆ ಜಿಲ್ಲಾದ್ಯಂತ ಬಿಜೆಪಿ ಕಾರ್ಯಕರ್ತರ ಸಂಭ್ರಮ ಮುಗಿಲು ಮುಟ್ಟಿತ್ತು. ಈ ವೇಳೆ ಬಿಜೆಪಿ ಕಾರ್ಯಕರ್ತ ರಾಜೇಶ್ ಎಮ್.ಕೆ (33) ಎನ್ನುವವರು ಹಾಗೂ ಸ್ಥಳೀಯ ಬಿಜೆಪಿ ಕಾರ್ಯಕರ್ತರು ಕಳೆಂಜದ ಕುಶಲಪ್ಪ ಗೌಡ ಕಜೆ ಎನ್ನುವವರ ಮನೆ ಮುಂದೆ ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ.
ಮನೆ ಮುಂದೆ ಪಟಾಕಿ ಸಿಡಿಸಿದ್ದಕ್ಕೆ ಸಿಟ್ಟಿಗೆದ್ದ ಕುಶಲಪ್ಪ ತಲವಾರ್‌ನಿಂದ ಬಿಜೆಪಿ ಕಾರ್ಯಕರ್ತ ರಾಜೇಶ್ ಎಮ್.ಕೆ ಮೇಲೆ ಏಕಾಏಕಿ ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಘಟನೆಯಲ್ಲಿ ರಾಜೇಶ್ ಗಂಭೀರ ಗಾಯಗೊಂಡಿದ್ದು, ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ.












Click it and Unblock the Notifications