ಮೂಡುಶೆಡ್ಡೆಯಲ್ಲಿ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ಸಂಘರ್ಷ ಪ್ರಕರಣ: ನಾಲ್ವರು ಆರೋಪಿಗಳ ಬಂಧನ
ದಕ್ಷಿಣ ಕನ್ನಡ ಜಿಲ್ಲೆಯ ಮೂಡುಶೆಡ್ಡೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವಿನ ಘರ್ಷಣೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ.
ಬುಧವಾರ (ಮೇ 10) ರಂದು ಮತದಾನದ ಬಳಿಕ ಮೂಡುಶೆಡ್ಡೆಯ ಮತಗಟ್ಟೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಹೊಡೆದಾಡ ನಡೆದಿತ್ತು. ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಕಾರನ್ನು ಜಖಂಗೊಳಿಸಲಾಗಿತ್ತು. ಘಟನೆಯ ನಂತರ 20ಕ್ಕೂ ಹೆಚ್ಚು ಆರೋಪಿಗಳು ತಲೆಮರೆಸಿಕೊಂಡಿದ್ದರು, ಘಟನೆಯಲ್ಲಿ ಪೊಲೀಸ್ ವಾಹನದ ಮೇಲೂ ಕಲ್ಲು ತೂರಾಟ ಮಾಡಲಾಗಿತ್ತು, ಪೊಲೀಸ್ ಸಿಬ್ಬಂದಿ ಕೂಡ ಗಾಯಗೊಂಡಿದ್ದರು.

ಘಟನೆಯ ನಂತರ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿ ಮಾಡಿದ್ದರು, ಮುಂಜಾಗ್ರತಾ ಕ್ರಮವಾಗಿ ಹೆಚ್ಚಿನ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಸ್ಥಕ್ಕೆ ಬಂದಾಗ ಕಾರ್ಯಕರ್ತರು ಜೈಕಾರ ಕೂಗಿದ್ದರಿಂದ ಬಿಜೆಪಿ ಕಾರ್ಯಕರ್ತರು ಸಿಟ್ಟಾಗಿದ್ದರು.
ಘಟನೆಯ ನಂತರ ಮಂಗಳೂರು ನಗರ ಪೊಲೀಸ್ ಆಯುಕ್ತ ಕುಲದೀಪ್ ಜೈನ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಸ್ಥಳದಲ್ಲಿ ಕೆಎಸ್‌ಆರ್ ಪಿ ತುಕಡಿ ನಿಯೋಜನೆ ಮಾಡಲಾಗಿದೆ. ಸದ್ಯ ಪರಿಸ್ಥಿತಿ ಶಾಂತವಾಗಿದೆ ಎಂದು ಹೇಳಲಾಗಿದೆ.
ಮೂಡುಶೆಡ್ಡೆಯಲ್ಲಿ ಚೆಕ್‌ಪೋಸ್ಟ್ ಸ್ಥಾಪನೆ ಮಾಡಿದ್ದು ಹೊರಹೋಗುವ ಮತ್ತು ಒಳಬರುವ ವಾಹನಗಳನ್ನು ತಪಾಸಣೆ ಮಾಡಲಾಗುತ್ತಿದೆ. ಮೇ 13ರಂದು ಮತಎಣಿಕೆ ಇರುವುದರಿಂದ ಮತ್ತೆ ಘರ್ಷಣೆ ನಡೆಯದಂತೆ ಪೊಲೀಸರು ಮುನ್ನೆಚ್ಚರಿಕೆ ವಹಿಸಿದ್ದಾರೆ.












Click it and Unblock the Notifications