ಬಸ್ ಬೈಕಿಗೆ ಡಿಕ್ಕಿ, ಬಸ್ ಮೇಲೆ ಕಲ್ಲು ತೂರಾಟ;ಕುತ್ತಾರುವಿನಲ್ಲಿ ಬಿಗುವಿನ ವಾತವರಣ
ಮಂಗಳೂರು, ಏಪ್ರಿಲ್ 14:ಮಂಗಳೂರಿನಲ್ಲಿ ಶನಿವಾರ (ಏ.13) ಆಯೋಜಿಸಲಾಗಿದ್ದ ಬಿಜೆಪಿಯ ವಿಜಯ ಸಂಕಲ್ಪ ಬೃಹತ್ ಸಮಾವೇಶದಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದ ಬಿಜೆಪಿ ಕಾರ್ಯಕರ್ತರ ಮೇಲೆ ದುಷ್ಕರ್ಮಿಗಳ ತಂಡ ಕಲ್ಲು ತೂರಾಟ ನಡೆಸಿದ ಘಟನೆ ಮಂಗಳೂರು ಹೊರವಲಯದಲ್ಲಿ ನಡೆದಿದೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿದ್ದ ಸಮಾವೇಶಕ್ಕೆ ಬಂದ ಕಾರ್ಯಕರ್ತರ ಬಸ್ ಗೆ ಮಂಗಳೂರು ಹೊರವಲಯದ ಕುತ್ತಾರ ಎಂಬಲ್ಲಿ ದುಷ್ಕರ್ಮಿಗಳು ಕಲ್ಲು ತೂರಿದ್ದಾರೆ. ಬಿಜೆಪಿ ಕಾರ್ಯಕರ್ತರು ತೆರಳುತ್ತಿದ್ದ ಎರಡು ಬಸ್ ಗಳ ಮೇಲೆ ದುಷ್ಕರ್ಮಿಗಳು ಕಲ್ಲು ತೂರಿದ್ದಾರೆ. ಘಟನೆಯಲ್ಲಿ ನಾಲ್ಕು ಮಂದಿ ಬಿಜೆಪಿ ಕಾರ್ಯಕರ್ತರಿಗೆ ಗಾಯವಾಗಿದೆ.
ಕಲ್ಲೇಟಿನಿಂದ ಕಾರ್ಯಕರ್ತರ ತಲೆಗೆ ಗಾಯವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕುತ್ತಾರು ಪ್ರದೇಶದಲ್ಲಿ ಬಿಗುವಿನ ಪರಿಸ್ಥಿತಿ ನಿರ್ಮಾಣವಾಗಿದೆ.

ಘಟನೆಯ ವಿವರ:
ಮಂಗಳೂರಿನ ಕೇಂದ್ರ ಮೈದಾನದಲ್ಲಿ ನಡೆದ ವಿಜಯ ಸಂಕಲ್ಪ ಸಮಾವೇಶದಲ್ಲಿ ಭಾಗವಹಿಸಿ ಬಿಜೆಪಿ ಕಾರ್ಯಕರ್ತರು ಹಿಂದಿರುಗುತ್ತಿದ್ದಾಗ ಈ ಘಟನೆ ನಡೆದಿದೆ.
ಸಮಾವೇಶದಿಂದ ಹಿಂದಿರುಗುತ್ತಿದ್ದಾಗ ಬಿಜೆಪಿ ಕಾರ್ಯಕರ್ತರಿದ್ದ ಬಸ್ ಬೈಕೊಂದಕ್ಕೆ ಸವರಿಕೊಂಡು ಹೋಗಿದೆ ಎಂದು ಹೇಳಲಾಗಿದೆ. ಈ ಸಂದರ್ಭದಲ್ಲಿ ಬೈಕ್ ಸವಾರರಿಗೂ ಹಾಗೂ ಬಸ್ ಚಾಲಕನ ನಡುವೆ ಮಾತಿನ ಚಕಮಕಿ ನಡೆದಿದೆ.

ಈ ಸಂದರ್ಭದಲ್ಲಿ ಸ್ಥಳದಲ್ಲಿ ಸೇರಿದ ಜನರು ಬಸ್ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂದು ಹೇಳಲಾಗಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ತೆರಳಿ ಪರಿಶೀಲನೆ ನಡೆಸಿದ್ದು, ಹೆಚ್ಚಿನ ಪೊಲೀಸರನ್ನು ಕುತ್ತಾರು ಪರಿಸರದಲ್ಲಿ ನಿಯೋಜಿಸಲಾಗಿದೆ.












Click it and Unblock the Notifications