ಲೋಕಸಭಾ ಚುನಾವಣೆ :ದ.ಕ.ಕಾಂಗ್ರೆಸ್ ನಿಂದ ಮಿಥುನ್ ರೈಗೆ ಟಿಕೆಟ್ ?
ಮಂಗಳೂರು, ಜನವರಿ 14: ಮುಂಬರುವ ಲೋಕಸಭಾ ಚುನಾವಣೆಗೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದೆ. ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ರಾಜಕೀಯ ಆರಂಭವಾಗಿದೆ. ಚುನಾವಣೆಗೆ ಸ್ಪರ್ಧಿಸಲು ಕಾಂಗ್ರೆಸ್ ನ ಸಂಭಾವ್ಯ ಅಭ್ಯರ್ಥಿಗಳ ಬಗ್ಗೆ ಗೆಲುವಿನ ಲೆಕ್ಕಾಚಾರ ಆರಂಭವಾಗಿದೆ.
ಈ ನಡುವೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಯುವ ಮುಖಂಡ ಮಿಥುನ್ ರೈಗೆ ಟಿಕೆಟ್ ನೀಡುವಂತೆ ಯುವ ಕಾಂಗ್ರೆಸ್ ಮುಖಂಡರು ಒತ್ತಾಯಿಸಿದ್ದಾರೆ.
ನಿನ್ನೆ ಭಾನುವಾರ (ಜನವರಿ 13) ದಂದು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಯುವ ಕಾಂಗ್ರೆಸ್ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಕಾರ್ಯಕಾರಿಣಿ ಸಭೆ ನಡೆಯಿತು. ಈ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧ್ಯಕ್ಷ ಮಿಥುನ್ ರೈ ವಹಿಸಿದ್ದರು. ಸಭೆಯಲ್ಲಿ ಚುನಾವಣೆಗಳಲ್ಲಿ ಪಕ್ಷಕ್ಕಾಗಿ ದುಡಿಯುತ್ತಿರುವ ಯುವಕರಿಗೆ ಸ್ಥಾನಮಾನ ನೀಡುವಂತೆ ಒತ್ತಾಯಿಸಲಾಯಿತು.

ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಮಿಥುನ್ ರೈ ಗೆ ಮುಂದಿನ ದಿನಗಳಲ್ಲಿ ಅವಕಾಶ ಕೊಡುವುದಾಗಿ ಭರವಸೆ ನೀಡಲಾಗಿತ್ತು. ಈ ಸಲವೂ ಅವಕಾಶ ವಂಚಿತರಾದರೆ ಮುಂದಿನ ದಿನಗಳಲ್ಲಿ ಪಕ್ಷಕ್ಕೆ ದುಡಿಯುವ ಯುವಕರ ಕೊರತೆಯಾಗಬಹುದು ಎಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತಪಡಿಸಲಾಗಿದೆ.
ಅದಲ್ಲದೇ 'ಮನೆ ಮನೆಗೆ ಯುವ ಕಾಂಗ್ರೆಸ್' ಮತ್ತು ಜನವರಿ 30 ರಂದು ದೆಹಲಿಯಲ್ಲಿ ನಡೆಯುವ ಯುವಕ್ರಾಂತಿ ಯಾತ್ರೆಯನ್ನು ಯಶಸ್ವಿಗೊಳಿಸಲು ಬೇಕಾದ ಸಿದ್ಧತೆ ಹಾಗೂ ಮುಂಬರುವ ಲೋಕಸಭೆ ಚುನಾವಣೆಗೆ ಪೂರ್ವ ತಯಾರಿ ಕುರಿತು ಚರ್ಚಿಸಲಾಯಿತು.
ಇನ್ನೊಂದೆಡೆ ಲೋಕಸಭಾ ಚುನಾವಣೆಗೆ ಟಕೆಟ್ ಗಿಟ್ಟಿಸಿ ಹೊಸ ಇನ್ನಿಂಗ್ಸ್ ಆರಂಭಿಸಲು ಮಾಜಿ ಸಚಿವ ರಮಾನಾಥ್ ರೈ ತುದಿಗಾಲಲ್ಲಿ ನಿಂತಿದ್ದಾರೆ. ಇತ್ತೀಚೆಗೆ ಹಿರಿಯ ಮುಖಂಡ ಹಾಗೂ ಮಾಜಿ ಕೇಂದ್ರ ಸಚಿವ ಬಿ ಜನಾರ್ಧನ ಪೂಜಾರಿ ಟಿಕೆಟ್ ಗಾಗಿ ದೆಹಲಿ ಮಟ್ಟದಲ್ಲಿ ಪ್ರಯತ್ನಿಸುವ ಹೇಳಿಕೆ ನೀಡಿ ಎಲ್ಲರನ್ನೂ ಚಕಿತಗೊಳಿಸಿದ್ದರು.
ಅದಲ್ಲದೇ ಅಲ್ಪಸಂಖ್ಯಾತರ ಟ್ರಂಪ್ ಕಾರ್ಡ್ ಬಳಸಿ ಮಾಜಿ ಶಾಸಕ ಜೆ ಆರ್ ಲೋಬೊ ಹಾಗೂ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಲಾಭಿ ಆರಂಭಿಸಿದ್ದಾರೆ.












Click it and Unblock the Notifications