ಆಹ್ವಾನ ಪತ್ರಿಕೆಯಲ್ಲಿ ಪ್ರಮೋದ್ ಮಧ್ವರಾಜ್ ಹೆಸರು ಕೈ ಬಿಟ್ಟ ಮುಸ್ಲಿಂ ಸೆಂಟ್ರಲ್ ಕಮಿಟಿ
ಮಂಗಳೂರು, ಡಿಸೆಂಬರ್ 26: ಕರಾವಳಿ ಕರ್ನಾಟಕ ಭಾಗದ ಅಲ್ಪಸಂಖ್ಯಾತರ ಧ್ವನಿ ಎಂದೇ ಹೇಳಲಾಗುವ ಮುಸ್ಲಿಂ ಸೆಂಟ್ರಲ್ ಕಮಿಟಿಯು ತನ್ನ 50ನೇ ವರ್ಷಾಚರಣೆಯನ್ನು ಇದೇ ಬರುವ ಡಿಸೆಂಬರ್ 29 ರಂದು ಆಚರಿಸಲು ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ ಡಿಸೆಂಬರ್ 29 ರಂದು ಮಂಗಳೂರಿನ ಪುರಭವನದಲ್ಲಿಮುಸ್ಲಿಂ ಸೆಂಟ್ರಲ್ ಕಮಿಟಿಯ ಸುವರ್ಣ ಮಹೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿದೆ.
ಆದರೆ ಇಲ್ಲಿ ವಿಷಯ ಏನಪ್ಪ ಅಂದರೆ ಈ 'ಸ್ವರ್ಣ ಮಹೋತ್ಸವ' ಕಾರ್ಯಕ್ರಮಕ್ಕೆ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರನ್ನು ಮುಸ್ಲಿಂ ಸೆಂಟ್ರಲ್ ಕಮಿಟಿ ಮುಖ್ಯ ಅತಿಥಿಯಾಗಿ ಆಹ್ವಾನಿಸಿತ್ತು.
ಆದರೆ ಈ ನಡುವೆ ಟಿಪ್ಪು ಸುಲ್ತಾನ್ ವಿರುದ್ಧ ಬ್ರಹ್ಮಾವರದ ಚರ್ಚ್ ಒಂದರ ಕಾರ್ಯಕ್ರಮದಲ್ಲಿ ಪ್ರಮೋದ್ ಮಧ್ವರಾಜ್ ಮಾತನಾಡಿದ್ದಾರೆಂಬ ಆರೋಪಕ್ಕೆ ಗುರಿಯಾಗುತ್ತಿದ್ದಂತೆ ಪ್ರಮೋದ್ ಅವರ ಹೆಸರನ್ನು ಆಮಂತ್ರಣ ಪತ್ರಿಕೆಯಲ್ಲಿ ಕೈಬಿಟ್ಟು ಪರಿಷ್ಕೃತ ಆಹ್ವಾನ ಪತ್ರಿಕೆ ಮುದ್ರಿಸಲಾಗಿದೆ ಎಂದು ಸಮಿತಿ ತಿಳಿಸಿದೆ.

ಉಡುಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಚರ್ಚ್ ಒಂದರಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್, 'ಟಿಪ್ಪು ಸುಲ್ತಾನ್ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸದಂತೆ ಆ ದೇವರೇ ತನ್ನನ್ನು ತಡೆದಿದ್ದಾನೆ' ಎಂದು ಹೇಳಿದ್ದರು. ಇದು ವಿವಾದಕ್ಕೆ ಕಾರಣವಾಗಿತ್ತು.












Click it and Unblock the Notifications