ಪುತ್ತೂರಿನಲ್ಲಿ ಕಟೀಲ್, ಸದಾನಂದ ಗೌಡ ಫೋಟೋಗಳಿಗೆ ಚಪ್ಪಲಿ ಹಾರ, ಫೋಟೋ ವೈರಲ್
ಮಂಗಳೂರು, ಮೇ, 15: ರಾಜ್ಯದ ವಿಧಾನಸಭೆ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಪುತ್ತೂರು ಸೇರಿದಂತೆ ರಾಜ್ಯದೆಲ್ಲೆಡೆ ಬಿಜೆಪಿ ಹೀನಾಯ ಸೋಲನುಭವಿಸುವ ಮೂಲಕ ತೀವ್ರ ಮುಖಭಂಗಕ್ಕೆ ಒಳಗಾಗಿದೆ. ಇದರಿಂದ ಬೇಸತ್ತ ಕಾರ್ಯಕರ್ತರು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಡಿ.ವಿ.ಸದಾನಂದ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ಪುತ್ತೂರಿನ ಬಸ್ ನಿಲ್ದಾಣದ ಬಳಿ ನಡೆದಿದೆ.
ಈಗಾಗಲೇ ರಾಜ್ಯದಲ್ಲೆಡೆ ಬಿಜೆಪಿ ಸೋಲುಂಡಿದ್ದು, ಇದು ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ. ಅಲ್ಲದೆ ಪ್ರಮುಖವಾಗಿ ಘಟಾನುಘಟಿ ಬಿಜೆಪಿ ನಾಯಕರೇ ಸೋಲುಂಡಿರುವುದು ಆಶ್ಚರ್ಯ ಮೂಡಿಸಿದೆ. ಇದನ್ನೆಲ್ಲ ಗಮನಿಸಿದರೆ ಬಿಜೆಪಿ ಕಾರ್ಯಕರ್ತರೇ ಪುತ್ತೂರಿನಲ್ಲಿ ಬಿಜೆಪಿ ನಾಯಕರ ಭಾವಪೂರ್ಣ ಶ್ರದ್ಧಾಂಜಲಿ ಬ್ಯಾನರ್ ಮಾಡಿಸಿದ್ದು, ಅದರಲ್ಲಿರುವ ಫೋಟೋಗಳಿಗೆ ಚಪ್ಪಲಿ ಹಾರ ಹಾಕಿ ಆಕ್ರೋಶ ಹೊರಹಾಕಿದ್ದಾರೆ.

ಅಷ್ಟೇ ಅಲ್ಲದೆ "ಬಿಜೆಪಿ ಹೀನಾಯವಾಗಿ ಸೋಲಲು ಕಾರಣರಾದ ನಿಮಗೆ ಭಾವಪೂರ್ಣ ಶ್ರದ್ಧಾಂಜಲಿ" ಅಂತಾ ಬ್ಯಾನರ್‌ನಲ್ಲಿ ಬರೆಸುವ ಮೂಲಕ ತಮ್ಮ ಆಕ್ರೋಶದ ಜ್ವಾಲೆಯನ್ನು ಹೊರಹಾಕಿದ್ದಾರೆ. ಈ ಬ್ಯಾನರ್ ಅನ್ನು ನೊಂದ ಹಿಂದೂ ಕಾರ್ಯಕರ್ತರ ಹೆಸರಿನಲ್ಲಿ ಅಳವಡಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಪುತ್ತೂರಿನಲ್ಲಿ ಬಿಜೆಪಿ ಟಿಕೆಟ್ ಸಿಗದ ಹಿನ್ನೆಲೆ ಹಿಂದೂ ಮುಖಂಡ ಅರುಣ್ ಪುತ್ತಿಲ ಪಕ್ಷೇತರರಾಗಿ ಸ್ಪರ್ಧೆ ಮಾಡಿದ್ದು, ಅವರು ಕಾಂಗ್ರೆಸ್ ವಿರುದ್ದ 4 ಸಾವಿರ ಮತಗಳ ಅಂತರದಲ್ಲಿ ಸೋಲುಂಡಿದ್ದರು. ಮತ್ತೊಂದೆಡೆ ಇದೇ ಕ್ಷೇತ್ರದಲ್ಲಿ ಬಿಜೆಪಿಯು ಕೂಡ ಕಡಿಮೆ ಮತಗಳನ್ನು ಪಡೆದು ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟಿತ್ತು.
ಇದರಿಂದ ರೊಚ್ಚಿಗೆದ್ದ ಕಾರ್ಯಕರ್ತರು ಬಿಜೆಪಿ ಸೋಲಿಗೆ ನಳಿನ್ ಕುಮಾರ್ ಕಟೀಲ್ ಮತ್ತು ಸದಾನಂದಗೌಡ ಅವರೇ ಕಾರಣ ಅಂತಾ ಕಿಡಿಕಾರುತ್ತಿದ್ದಾರೆ.












Click it and Unblock the Notifications