• search
  • Live TV
ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಪೌರತ್ವ ಕಾಯ್ದೆ; ಮಂಗಳೂರಿನಲ್ಲಿ ಭುಗಿಲೆದ್ದ ಪ್ರತಿಭಟನೆ, ಕರ್ಫ್ಯೂ ಜಾರಿ

By ಮಂಗಳೂರು ಪ್ರತಿನಿಧಿ
|

ಮಂಗಳೂರು, ಡಿಸೆಂಬರ್ 19: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ರಾಜ್ಯಾದ್ಯಂತ ಪ್ರತಿಭಟನೆ ಭುಗಿಲೆದ್ದಿದೆ. ಮಂಗಳೂರಿನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ದೆಹಲಿ ಪೊಲೀಸರು ವಿದ್ಯಾರ್ಥಿಗಳ ವಿರುದ್ಧ ತೆಗೆದುಕೊಂಡ ಕ್ರಮವನ್ನು ವಿರೋಧಿಸಿ ಪ್ರತಿಭಟನೆ ಕಾವೇರಿದೆ. ಮಂಗಳೂರಿನ ನೆಲ್ಲಿಕಾಯಿ ರಸ್ತೆಯಲ್ಲಿ ತೀವ್ರ ಸ್ವರೂಪದಲ್ಲಿ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿದೆ.

ಉದ್ರಿಕ್ತಗೊಂಡ ಪ್ರತಿಭಟನಾಕಾರರು ನೆಲ್ಲಿಕಾಯಿ ರಸ್ತೆಯಲ್ಲಿ ಬೆಂಕಿ ಹಚ್ಚಿ ಪ್ರತಿಭಟಿಸಿದ್ದಾರೆ. ಪೊಲೀಸರ ಮೇಲೆ ಕಲ್ಲು ತೂರಾಟ ನಡೆದಿದ್ದು, ಪರಿಸ್ಥಿತಿ ನಿಯಂತ್ರಣಕ್ಕೆ ಬಾರದ್ದರಿಂದ ಗಾಳಿಯಲ್ಲಿ ಗುಂಡು ಸಿಡಿಸಿದ್ದಾರೆ. ಪ್ರತಿಭಟನಾಕಾರರು ಕಟ್ಟಡದಲ್ಲಿ ಸೇರಿಕೊಂಡಿದ್ದು, ಪೊಲೀಸರು ಅಶ್ರುವಾಯು ಪ್ರಯೋಗಿಸಿದ್ದಾರೆ. ಧರಣಿ ವೇಳೆ ನಲವತ್ತಕ್ಕೂ ಹೆಚ್ಚು ಪೊಲೀಸರಿಗೆ ಹಾಗೂ ನೂರಕ್ಕೂ ಹೆಚ್ಚು ಪ್ರತಿಭಟನಾಕಾರರಿಗೆ ಗಾಯಗಳಾಗಿವೆ.

ಜೊತೆಗೆ ಪರಿಸ್ಥಿತಿ ಉದ್ವಿಗ್ನಗೊಂಡಿರುವ ಕಾರಣ ಮಂಗಳೂರಿನಲ್ಲಿ ನಾಳೆ ಮಧ್ಯ ರಾತ್ರಿವರೆಗೂ ಕರ್ಫ್ಯೂ ಜಾರಿ ಮಾಡಿ ಪೊಲೀಸ್ ಆಯುಕ್ತ ಡಾ. ಪಿ.ಎಸ್. ಹರ್ಷ ಆದೇಶಿಸಿದ್ದಾರೆ. ಹಂಪನಕಟ್ಗಟೆ, ಪಾಂಡೇಶ್ವರ ವ್ಯಾಪ್ತಿಯಲ್ಲಿ ಕರ್ಫ್ಯೂ ವಿಧಿಸಲಾಗಿದೆ. ನೂರು ಮಂದಿ ಪ್ರತಿಭಟನಾಕಾರರನ್ನು ಬಂಧಿಸಲಾಗಿದೆ. ಅನುಮಾನಾಸ್ಪದ ವ್ಯಕ್ತಿಗಳನ್ನು ಬಂಧಿಸಲು ಸೂಚಿಸಲಾಗಿದೆ.

ಬೆಂಗಳೂರಿನಲ್ಲಿ ಉರಿಯುವ 'ಪೌರತ್ವ'ದ ಬೆಂಕಿಗೆ 'ನಿಷೇಧಾಜ್ಞೆ'ಯ ತುಪ್ಪ

ಮೈಸೂರಿನಲ್ಲಿ ಪೊಲೀಸ್ ಆಯುಕ್ತರ ಕಚೇರಿ ಮುತ್ತಿಗೆಗೆ ಯತ್ನ: ಇತ್ತ ಮೈಸೂರಿನ ಅಶೋಕ ರಸ್ತೆಯಲ್ಲಿರುವ ಮಿಲಾದ್ ಪಾರ್ಕ್ ಬಳಿಯೂ ಪ್ರತಿಭಟನೆ ನಡೆದಿದೆ. ಪ್ರತಿಭಟನೆ ನಡೆಸದಂತೆ ಪೊಲೀಸರು ಎಚ್ಚರಿಕೆ ನೀಡಿದ್ದರೂ ಪ್ರತಿಭಟನಾಕಾರರು ಕೇಂದ್ರ ಸರ್ಕಾರ ಹಾಗೂ ಬಿಜೆಪಿ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಮಿಲಾದ್ ಪಾರ್ಕ್ ಆವರಣದಲ್ಲಿ ಸಾವಿರಾರು ಮಂದಿ ಜಮಾವಣೆಗೊಂಡಿದ್ದರು. ಇದೇ ವೇಳೆ ಪ್ರಗತಿಪರರು ಎಸ್.ಆರ್.ಹಿರೇಮಠ್ ನೇತೃತ್ವದಲ್ಲಿ ಪೊಲೀಸ್ ಆಯುಕ್ತರ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ನಡೆದಿದೆ.

ಹುಬ್ಬಳ್ಳಿಯಲ್ಲೂ ಪ್ರತಿಭಟನೆ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಹುಬ್ಬಳ್ಳಿಯಲ್ಲೂ ವಿವಿಧ ಸಂಘಟನೆಗಳು ನಿಷೇಧಾಜ್ಞೆ ಉಲ್ಲಂಘಿಸಿ, ಪ್ರತಿಭಟನೆಗೆ ಮುಂದಾಗಿವೆ. ಹೀಗೆ ಪ್ರತಿಭಟನೆಗೆ ಮುಂದಾದವರನ್ನು ಪೊಲೀಸರು ‌ಬಂಧಿಸಿದ್ದಾರೆ. ನಗರದ ಅಂಬೇಡ್ಕರ್ ಸರ್ಕಲ್ ನಲ್ಲಿ ಕಾಂಗ್ರೆಸ್, ಸಿಪಿಐ, ಸಿಪಿಎಂ, ದಲಿತ ಪರ ಸಂಘಟನೆ ಸೇರಿದಂತೆ ಸಮಾನ ಮನಸ್ಕರ ವೇದಿಕೆ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕೂಡಲೇ ಎಚ್ಚೆತ್ತುಕೊಂಡ ಪೊಲೀಸರು 20ಕ್ಕೂ ಹೆಚ್ಚು ಪ್ರತಿಭಟನಾ ನಿರತರನ್ನು ಬಂಧಿಸಿದ್ದಾರೆ.

ಚಿಕ್ಕಮಗಳೂರಿನಲ್ಲಿ ಮುಖಂಡರ ಗೃಹಬಂಧನ: ಚಿಕ್ಕಮಗಳೂರಿನಲ್ಲಿ ಪ್ರತಿಭಟನೆಗೆ ಮುಂದಾಗಿದ್ದ ಎಡಪಕ್ಷದ ಮುಖಂಡರನ್ನು ಇಂದು ಪೊಲೀಸರು ಬಂಧಿಸಿದ್ದಾರೆ. ಸಿಪಿಐ ಕಚೇರಿಯಲ್ಲಿಯೇ, ಪ್ರತಿಭಟನೆಗೆ ಮುಂದಾಗಿದ್ದ ಸಿಪಿಐ ಮುಖಂಡರಾದ ಅಮ್ಜದ್, ರೇಣುಕಾರಾದ್ಯ, ರಾಧಾ ಸುಂದರೇಶ್ ಸೇರಿದಂತೆ 15ಕ್ಕೂ ಹೆಚ್ಚು ಮುಖಂಡರನ್ನು ಪೊಲೀಸರು ಗೃಹ ಬಂಧನದಲ್ಲಿಟ್ಟಿದ್ದಾರೆ.

English summary
Protests have erupted in Statewide opposing to the Citizenship Amendment Act. Protest Raged in Mangaluru also.Police fired in air to controll the protest,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X