ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ವಿಡಿಯೋ ವೈರಲ್; ಸು ಮೋಟೊ ಪ್ರಕರಣ
ಮಂಗಳೂರು, ಜುಲೈ 3: ಅಮಲು ಬರುವಂತೆ ಮಾಡಿ ವಿದ್ಯಾರ್ಥಿನಿಯೊಬ್ಬಳ ಮೇಲೆ ವಿದ್ಯಾರ್ಥಿಗಳು ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಈ ಕುರಿತ ವಿಡಿಯೋ ತುಣುಕು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಖಾಸಗಿ ಕಾಲೇಜಿನ ನಾಲ್ವರು ವಿದ್ಯಾರ್ಥಿಗಳು ತಮ್ಮದೇ ಕಾಲೇಜಿನ ಸಹಪಾಠಿ ವಿದ್ಯಾರ್ಥಿನಿಯನ್ನು ಕಾರಿನಲ್ಲಿ ಅಜ್ಞಾತ ಸ್ಥಳಕ್ಕೆ ಕರೆದೊಯ್ದು, ಅಮಲು ಬರುವಂತೆ ಮಾಡಿ ಅತ್ಯಾಚಾರ ನಡೆಸಿರುವುದಲ್ಲದೆ, ಈ ಘಟನೆಯನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲೂ ಹರಿಬಿಟ್ಟಿದ್ದಾರೆ ಎನ್ನಲಾಗಿದೆ. ಈ ವಿಚಾರ ಇದೀಗ ಕಾಲೇಜು ಆಡಳಿತ ಮಂಡಳಿಯ ಗಮನಕ್ಕೂ ಬಂದಿದ್ದು, ಯಾವ ಕ್ರಮ ಕೈಗೊಳ್ಳಲಾಗುತ್ತದೆ ಕಾದು ನೋಡಬೇಕಿದೆ.
ಬಾಲಕಿ ಮೇಲೆ ಪೊಲೀಸ್ ದೌರ್ಜನ್ಯದ ವಿರುದ್ಧ ಠಾಣೆ ಎದುರು ಪ್ರತಿಭಟನೆ
ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಪೊಲೀಸ್ ಇಲಾಖೆ ಅಲರ್ಟ್ ಆಗಿದೆ. ಈ ಕುರಿತು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಂ. ಲಕ್ಷ್ಮಿ ಪ್ರಸಾದ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಓರ್ವ ಹುಡುಗಿ ಮೇಲೆ ಮೂರ್ನಾಲ್ಕು ಯುವಕರು ಅತ್ಯಾಚಾರ ನಡೆಸಿದ್ದು, ಈ ವಿಡಿಯೋ ವಾಟ್ಸಾಪ್ ನಲ್ಲಿ ಹರಿದಾಡುತ್ತಿರುವುದು ಗಮನಕ್ಕೆ ಬಂದಿದೆ. ಸು-ಮೋಟೊ ಪ್ರಕರಣವನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಕೆಲವು ನಿರ್ಬಂಧಿತ ವಿಡಿಯೋಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡುವುದು ಐಪಿಸಿಯ 354 ಸಿ ಮತ್ತು 66 ಇ, ಐಟಿ ಕಾಯ್ದೆಯ 66 ಎ ಅಡಿಯಲ್ಲಿ ಅಪರಾಧವಾಗಿದದ್ದು, ಪ್ರಸಾರ ಮಾಡಿದವರನ್ನೂ ಆರೋಪಿ ಮಾಡಲಾಗುವುದು ಎಂದು ಎಚ್ಚರಿಸಿದ್ದಾರೆ.