ಮುಷ್ಕರ ಮುಂದುವರೆಸಿದರೆ ಕಾನೂನು ಕ್ರಮ ಅನಿವಾರ್ಯ- ಸಂದೀಪ್ ಪಾಟೀಲ್
ಮಂಗಳೂರು, ಜುಲೈ 11: ಶಾಲಾ ಮಕ್ಕಳ ವಾಹನ ಚಾಲಕರ ಸಂಘವು ಇಂದು ಆರಂಭಿಸಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಈ ನಡುವೆಯೂ ಮುಷ್ಕರವನ್ನು ಮುಂದುವರೆಸಲಾಗಿದೆ.
ಈ ಕುರಿತು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಮಂಗಳೂರು ಪೊಲೀಸ್ ಕಮಿಷನರ್ ಸಂದೀಪ್ ಪಾಟೀಲ್, ಶಾಲಾ ವಾಹನ ಚಾಲಕರು ಮುಷ್ಕರ ಆರಂಭಿಸಿರುವುದು ನನ್ನ ಗಮನಕ್ಕೆ ಬಂದಿದೆ. ಒಂದು ವೇಳೆ ಸಂಘಟನೆ ಮುಷ್ಕರ ನಡೆಸಿದ್ದೇ ಆದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.
ರಾಜ್ಯದ ಉಚ್ಚ ನ್ಯಾಯಾಲಯವು ಶಾಲಾ ಮಕ್ಕಳನ್ನು ಸಾಗಿಸುವ ವಾಹನಗಳಲ್ಲಿ ಮಿತಿಗಿಂತ ಜಾಸ್ತಿ ಮಕ್ಕಳನ್ನು ಹಾಕದಂತೆ ನಿಗಾವಹಿಸಬೇಕೆಂದು ಆದೇಶ ಹೊರಡಿಸಿದೆ. ನ್ಯಾಯಾಲಯದ ಆದೇಶ ಮೀರಿ ಮುಷ್ಕರ ನಡೆಸುವಂತಿಲ್ಲ ಎಂದು ಅವರು ಹೇಳಿದ್ದಾರೆ. ನ್ಯಾಯಾಲಯದ ಸೂಚನೆಗೂ ಜಗ್ಗದೇ ಮುಷ್ಕರಕ್ಕೆ ಮುಂದಾದರೆ ಕಾನೂನು ಕ್ರಮ ಕೈಗೊಳ್ಳುವುದು ಅನಿವಾರ್ಯವಾಗಲಿದೆ ಎಂದು ಅವರು ತಿಳಿಸಿದ್ದಾರೆ.

ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ಲಕ್ಷ್ಮೀ ಗಣೇಶ್ ಹಾಗೂ ಸಂಚಾರ ವಿಭಾಗದ ಎಸಿಪಿ ಮಂಜುನಾಥ ಶೆಟ್ಟಿ ಅಧ್ಯಕ್ಷತೆಯಲ್ಲಿ ಕಳೆದ ಬುಧವಾರ ಜಿಲ್ಲಾ ಶಾಲಾ ಮಕ್ಕಳ ವಾಹನ ಚಾಲಕರ ಸಂಘದ ಸಭೆ ಕರೆಯಲಾಗಿತ್ತು. ಸಭೆಯಲ್ಲಿ ಉಚ್ಚ ನ್ಯಾಯಾಲಯದ ಆದೇಶದ ಮಾಹಿತಿಯನ್ನು ವಾಹನ ಸಂಘದ ಪ್ರಮುಖರಿಗೆ ನೀಡಲಾಗಿದೆ. ಜತೆಗೆ ನೋಟಿಸ್ ಕೂಡ ನೀಡಲಾಗಿತ್ತು ಎಂದು ಅವರು ಸ್ಪಷ್ಟಪಡಿಸಿದರು.
ಸಂಘಟಕರು ಉಚ್ಚ ನ್ಯಾಯಾಲಯದ ಕಾನೂನು ಮತ್ತು ನಿರ್ದೇಶನಗಳನ್ನು ಅನುಸರಿಸಬೇಕು. ಜತೆಗೆ, ಶಾಲಾ ಮಕ್ಕಳ ಸುರಕ್ಷತೆಗೆ ಆದ್ಯತೆ ನೀಡಬೇಕು. ಮುಷ್ಕರದಿಂದ ಶಾಲಾ ಮಕ್ಕಳಿಗೆ ತೊಂದರೆಯಾಗಲಿದೆ ಆದ್ದರಿಂದ ಕೂಡಲೇ ಮುಷ್ಕರ ವಾಪಸ್ ಪಡೆಯಬೇಕು ಎಂದು ಸಂದೀಪ್ ಪಾಟೀಲ್ ಖಡಕ್ ಸೂಚನೆ ನೀಡಿದ್ದಾರೆ.












Click it and Unblock the Notifications