ಮಂಗಳೂರು : ಫೋಟೋ ವಿವಾದ ವಿದ್ಯಾರ್ಥಿಗಳ ಅಮಾನತು
ಮಂಗಳೂರು, ಫೆ. 24 : ಸುರತ್ಕಲ್‌ನ ಖಾಸಗಿ ಕಾಲೇಜಿನಲ್ಲಿನ ಫೋಟೋ ವಿವಾದಕ್ಕೆ ಕಾರಣವಾಗಿದ್ದ ಐವರು ವಿದ್ಯಾರ್ಥಿಗಳನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಅಮಾನತು ಮಾಡಲಾಗಿದೆ. ಘಟನೆ ಬಗ್ಗೆ ತನಿಖೆ ನಡೆಸಲು ಕಾಲೇಜಿನ ಆಡಳಿತ ಮಂಡಳಿ ತೀರ್ಮಾನ ಕೈಗೊಂಡಿದೆ.
ಗೋವಿಂದದಾಸ ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ತೊಡೆಮೇಲೆ ಓರ್ವ ವಿದ್ಯಾರ್ಥಿ ಮಲಗಿದ್ದ ಫೋಟೋ ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡಿ ಸಾಕಷ್ಟು ವಿವಾದ ಹುಟ್ಟಿಸಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿ ಮೇಲೆ ಹಲ್ಲೆಯೂ ನಡೆದಿತ್ತು. [ಫೋಟೋ ವಿವಾದ ವಿದ್ಯಾರ್ಥಿಗೆ ಥಳಿತ]

ಸೋಮವಾರ ವಿದ್ಯಾರ್ಥಿಗಳು ಮತ್ತು ಪೋಷಕರ ಜೊತೆ ಕಾಲೇಜಿನ ಆಡಳಿತ ಮಂಡಳಿ ವಿದ್ಯಾರ್ಥಿ ಸಂಘಟನೆ ಪ್ರತಿನಿಧಿಗಳ ಸಮ್ಮುಖದಲ್ಲಿ ಮಾತುಕತೆ ನಡೆಸಿ, ಘಟನೆ ಬಗ್ಗೆ ವಿವರಣೆ ಪಡೆದರು. ನಂತರ ಐವರು ವಿದ್ಯಾರ್ಥಿಗಳನ್ನು ತಕ್ಷಣದಿಂದಲೇ ಅಮಾನತುಗೊಳಿಸುವ ನಿರ್ಧಾರವನ್ನು ಕೈಗೊಳ್ಳಲಾಗಿದೆ.
ಶಿಸ್ತು ಸಮಿತಿ ರಚನೆ : ಕಾಲೇಜಿನಲ್ಲಿ ನಡೆದ ಘಟನೆ ಬಗ್ಗೆ ತನಿಖೆ ನಡೆಸಲು ಕಾಲೇಜಿನ ಆಡಳಿತ ಮಂಡಳಿ ನಿರ್ಧರಿದೆ. ಇದಕ್ಕಾಗಿ ಕಾಲೇಜಿನ ಪ್ರಾಂಶುಪಾಲರು ಮಂಗಳೂರು ವಿಶ್ವವಿದ್ಯಾನಿಯಲದ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಅಧಿಕಾರಿಗೆ ಪತ್ರ ಬರೆದು ಪ್ರತ್ಯೇಕ ಶಿಸ್ತು ಸಮಿತಿ ರಚನೆ ಮಾಡಿ ತನಿಖೆ ನಡೆಸುವಂತೆ ಮನವಿ ಮಾಡಿದ್ದಾರೆ.
ಈ ತನಿಖಾ ಸಮಿತಿಗೆ ಮಂಗಳೂರು ವಿಶ್ವವಿದ್ಯಾನಿಲಯದ ವತಿಯಿಂದ ಓರ್ವ ಸದಸ್ಯರನ್ನು ನಾಮಕರಣ ಮಾಡುವಂತೆ ಪತ್ರದಲ್ಲಿ ಮನವಿ ಮಾಡಿದ್ದಾರೆ. ಹಾಗೆಯೇ ಈ ಪ್ರಕರಣದಲ್ಲಿ ಭಾಗಿಯಾಗಿರುವವರು ಕಾಲೇಜಿನ ಅಂತಿಮ ವರ್ಷದ ಬಿಸಿಎ ವಿದ್ಯಾರ್ಥಿಗಳು ಎಂಬ ಮಾಹಿತಿ ಲಭ್ಯವಾಗಿದೆ.












Click it and Unblock the Notifications