ಸುರತ್ಕಲ್: ಜಲೀಲ್ ಹತ್ಯೆ ಪ್ರಕರಣದ ಮೂವರು ಆರೋಪಿಗಳ ಬಂಧನ
ಮಂಗಳೂರು, ಡಿಸೆಂಬರ್ 26: ಮಂಗಳೂರು ನಗರದ ಕೃಷ್ಣಾಪುರ ನಿವಾಸಿ ಜಲೀಲ್ ಹತ್ಯೆ ಪ್ರಕರಣದಲ್ಲಿ ಕಾರ್ಯಾಚರಣೆ ನಡೆಸಿರುವ ಮಂಗಳೂರು ಪೊಲೀಸರು ಘಟನೆ ನಡೆದ 24 ಗಂಟೆಗಳೊಳಗೆ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತರಲ್ಲಿ ಇಬ್ಬರು ಜಲೀಲ್ ಅವರ ಫ್ಯಾನ್ಸಿ ಅಂಗಡಿಗೆ ನುಗ್ಗಿ ಚೂರಿಯಿಂದ ಇರಿದು ಕೊಲೆಗೈದವರು. ಮತ್ತೋರ್ವನು ಕೊಲೆ ಆರೋಪಿಗಳನ್ನು ಬೈಕ್‌ನಲ್ಲಿ ಪರಾರಿ ಮಾಡಿಸಲು ಸಹಕರಿಸಿದವನು ಎನ್ನಲಾಗಿದೆ.
ಪೊಲೀಸ್ ತನಿಖಾ ತಂಡ ತ್ವರಿತವಾಗಿ ಕಾರ್ಯಾಚರಣೆ ನಡೆಸಿ ಮೂವರು ಆರೋಪಿಗಳನ್ನು ವಶಕ್ಕೆ ತೆಗೆದುಕೊಂಡು ದಸ್ತಗಿರಿ ಮಾಡಿದೆ. ಆರೋಪಿಗಳನ್ನು ಸೋಮವಾರ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುತ್ತದೆ. ಆ ಬಳಿಕ ಮುಂದಿನ ತನಿಖೆಗೆ 14 ದಿನಗಳ ಕಾಲ ಪೊಲೀಸ್ ವಶಕ್ಕೆ ತೆಗೆದುಕೊಳ್ಳಲಾಗುತ್ತದೆ ಎಂದು ಪೊಲೀಸ್ ಕಮಿಷನರ್ ಶಶಿಕುಮಾರ್ ಎನ್. ತಿಳಿಸಿದ್ದಾರೆ.

ಕೃಷ್ಣಾಪುರ ನೈತಂಗಡಿ ನಿವಾಸಿ ಶೈಲೇಶ್ ಅಲಿಯಾಸ್ ಶೈಲೇಶ್ ಪೂಜಾರಿ(21), ಉಡುಪಿಯ ಹೆಜಮಾಡಿ ನಿವಾಸಿ ಸವಿನ್ ಕಾಂಚನ್ ಅಲಿಯಾಸ್ ಮುನ್ನ (24) ಹೆಜಮಾಡಿ ಉಡುಪಿ, ಕೃಷ್ಣಾಪುರ 3ನೇ ಬ್ಲಾಕ್ ನಿವಾಸಿ ಪವನ್ ಅಲಿಯಾಸ್ ಪಚ್ಚು (23) ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ.
ಈ ಮೂವರು ಆರೋಪಿಗಳನ್ನು ಭಾನುವಾರ ರಾತ್ರಿ ಕಾಪುವಿನ ಲಾಡ್ಜ್‌ನಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಪ್ರಕರಣದಲ್ಲಿ ಪ್ರತ್ಯಕ್ಷವಾಗಿ, ಪರೋಕ್ಷವಾಗಿ ಭಾಗಿಯಾಗಿರುವ ಇನ್ನು ಕೆಲವರು ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುತ್ತದೆ. ಆರೋಪಿಗಳಲ್ಲಿ ಇಬ್ಬರು ಈ ಹಿಂದೆ ವಿವಿಧ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದವರು. ಆರೋಪಿಗಳಲ್ಲಿ ಓರ್ವನು 2021ರಲ್ಲಿ ನಡೆದ ಕೊಲೆ ಪ್ರಕರಣವೊಂದರಲ್ಲಿಯೂ ಭಾಗಿಯಾಗಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.

ಶನಿವಾರ ರಾತ್ರಿ ಸುರತ್ಕಲ್‌ನ ಕೃಷ್ಣಾಪುರ ನಾಲ್ಕನೇ ಬ್ಲಾಕ್‌ನ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳಿಬ್ಬರು ಅಂಗಡಿ ಮಾಲೀಖ ಜಲೀಲ್ ಎಂಬಾತನನ್ನು ಚೂರಿಯಿಂದ ಇರಿದು ಹತ್ಯೆ ಮಾಡಿದ್ದರು. ಕೊಲೆ ಹಿನ್ನೆಲೆಯಲ್ಲಿ ಭಾನುವಾರ ರಾತ್ರಿ ಬೆಳಗ್ಗೆ 6ರಿಂದ ಡಿಸೆಂಬರ್ 27ರ ಬೆಳಿಗ್ಗೆ 6 ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು.












Click it and Unblock the Notifications