ಪರಿಶಿಷ್ಟ ಜಾತಿ, ಪಂಗಡದ ಅಭಿವೃದ್ಧಿಗಾಗಿ ವಿವಿಧ ಯೋಜನೆ

Posted By: Prithviraj
Subscribe to Oneindia Kannada

ಮೈಸೂರು, ಅಕ್ಟೋಬರ್, 18: ರಾಷ್ಟ್ರೀಯ ಪರಿಶಿಷ್ಟ ಜಾತಿ ಹಣಕಾಸು ಅಭಿವೃದ್ಧಿ ನಿಗಮವು ಪಾಲಿಹೌಸ್, ಇ-ರಿಕ್ಷಾ, ಸೋಲಾರ್ ಉಪಕರಣಗಳ ತಯಾರಿಕೆಗೆ 27.18ಕೋಟಿ ರೂ. ಅನುದಾನ ಮಂಜೂರು ಮಾಡಿದೆ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ಸಚಿವ ತಾವರ್ ಚಂದ್ ಗೆಹ್ಲೋಟ್ ತಿಳಿಸಿದರು.

ಇಲ್ಲಿನ ಲಲಿತ್ ಮಹಲ್ ನಲ್ಲಿ ಸೋಮವಾರ ಆಯೋಜಿಸಿದ್ದ ಸಂಸತ್ ಸಮಾಲೋಚನಾ ಸಮಿತಿ ಸಭೆಯಲ್ಲಿ ಮಾಧ್ಯಮಗಳೊಂದಿಗೆ ಅವರು ಮತನಾಡಿದರು. "ಈ ಸಂಬಂಧ ನಿಗಮವು ವಿವಿಧ ಯೋಜನೆಗಳನ್ನು ರೂಪಿಸಿದ್ದು, ಕಳೆದ ಎರಡು ವರ್ಷಗಳಲ್ಲಿ 14.25ಕೋಟಿ ರೂ ಬಿಡುಗಡೆ ಮಾಡಿದೆ ಎಂದು ತಿಳಿಸಿದರು.

Polyhouses E-rickshaws eligible for funding:Gehlot

ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ ವಿವಿಧ ಯೋಜನೆಗಳನ್ನು ರೂಪಿಸಿದ್ದು, ಇದರ ಸದುಪಯೋಗ ಪಡಿಸಿಕೊಳ್ಳುವಂತೆ ಅವರು ಸೂಚಿಸಿದರು.

"ರಾಷ್ಟ್ರೀಯ ಪರಿಶಿಷ್ಟ ಜಾತಿ ಹಣಕಾಸು ಅಭಿವೃದ್ಧಿ ನಿಗಮವು ಪರಿಶಿಷ್ಟ ಜಾತಿ ಅವರಿಗೆ ಸ್ವಉದ್ಯೋಗ ಕೈಗೊಳ್ಳಲು 11 ವಿವಿಧ ಸಾಲ ಯೋಜನೆಗಳನ್ನು ರೂಪಿಸಿದೆ. ಈ ಸಾಲ ಯೋಜನೆಗಳಡಿ ಸ್ವಉದ್ಯೋಗ ಕೈಗೊಳ್ಳಲು ರೂ 50,000/- ದಿಂದ ರೂ 30 ಲಕ್ಷದವರೆಗೆ ಸಾಲ ನೀಡಲಾಗುವುದು" ಎಂದರು.

ಇಲಾಖೆಯಿಂದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳ ವಿದ್ಯಾರ್ಥಿವೇತನಕ್ಕಾಗಿ ಕರ್ನಾಟಕ ರಾಜ್ಯಕ್ಕೆ 2014-15ರಲ್ಲಿ 62 ಕೋಟಿ ರೂ. 2015-16ರಲ್ಲಿ 38.74 ಕೋಟಿ ರೂ. ಹಾಗೂ 2016-17ರಲ್ಲಿ 33 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಹಿಂದುಳಿದ ವರ್ಗಗಳ ವಿದ್ಯಾರ್ಥಿವೇತನಕ್ಕಾಗಿ ಕಳೆದ ಎರಡು ವರ್ಷಗಳಿಂದ 2150 ಕೋಟಿ ರೂ. ವೆಚ್ಚ ಮಾಡಲಾಗಿದೆ ಎಂದರು.

ರಾಷ್ಟ್ರೀಯ ಹಿಂದುಳಿದ ವರ್ಗಗಳ ಹಣಕಾಸು ಅಭಿವೃದ್ಧಿ ನಿಗಮದಿಂದ ಕರ್ನಾಟಕ ರಾಜ್ಯದ 2,14,332 ಫಲಾನುಭವಿಗಳಿಗೆ 344 ಕೋಟಿ ರೂ. ನೀಡಲಾಗಿದೆ. 740 ಫಲಾನುಭವಿಗಳಿಗೆ ಕೌಶಲ್ಯಾಭಿವೃದ್ಧಿ ತರಬೇತಿ ನೀಡಲಾಗಿದೆ ಎಂದರು.

ರಾಷ್ಟ್ರೀಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದಿಂದ ಸಫಾಯಿ ಕರ್ಮಚಾರಿಗಳ ಸಾಮಾಜಿಕ- ಆರ್ಥಿಕ ಅಭಿವೃದ್ದಿಗಾಗಿ 3,10,270 ಫಲಾನುಭವಿಗಳಿಗೆ ರೂ. 1297.65 ಕೋಟಿ ರೂ. ಬಿಡುಗಡೆ ಮಾಡಿದೆ ಎಂದು ಹೇಳಿದರು.

ಸಮಾಜ ಕಲ್ಯಾಣ ಸಚಿವ ಎಚ್. ಆಂಜನೇಯ, ಸಂಸದರಾದ ಕೆ.ಎಚ್.ಮುನಿಯಪ್ಪ, ಪ್ರತಾಪ ಸಿಂಹ ಮತ್ತಿತರರು ಸುದ್ದಿಗೋಷ್ಟಿಯಲ್ಲಿ ಭಾಗವಹಿಸಿದ್ದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
For construction of poly houses and purchase of e-rickshaws, solar energy gadgets, government has released Rs.27.18 crore fund, says union minister Thawar Chand Gehlot.
Please Wait while comments are loading...