ನಂಜನಗೂಡಲ್ಲಿ ಕಬ್ಬು ಬೆಳೆಗಾರರಿಂದ ರಸ್ತೆ ತಡೆ ಪ್ರತಿಭಟನೆ

By: ಮೈಸೂರು ಪ್ರತಿನಿಧಿ
Subscribe to Oneindia Kannada

ನಂಜನಗೂಡು, ಫೆಬ್ರವರಿ 8: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ಕಬ್ಬು ಬೆಳೆಗಾರರ ಸಂಘ ಮತ್ತು ರೈತ ಸಂಘಟನೆ ಒಕ್ಕೂಟದ ಕಾರ್ಯಕರ್ತರು ಮಂಗಳವಾರ ನಗರದ ಹುಲ್ಲಹಳ್ಳಿ ವೃತ್ತದಲ್ಲಿ ಹೆದ್ದಾರಿ ತಡೆದು, ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿದರು.

ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ನಗರದ ಹುಲ್ಲಹಳ್ಳಿ ವೃತ್ತದಲ್ಲಿ ಜಮಾವಣೆಗೊಂಡ ಪ್ರತಿಭಟನಾಕಾರರು, ಹೆದ್ದಾರಿ 212ರ ಮೈಸೂರು-ಊಟಿ ರಸ್ತೆಯಲ್ಲಿ ಮಾನವ ಸರಪಳಿ ನಿರ್ಮಿಸಿ ರಾಜ್ಯ ಸರಕಾರ, ಮುಖ್ಯಮಂತ್ರಿ, ಸಂಸದರ ವಿರುದ್ದ ಘೋಷಣೆಗಳನ್ನು ಕೂಗಿದರು.[ಕೆಆರ್ ನಗರದಲ್ಲಿ ತಾತ್ಕಾಲಿಕವಾಗಿ ಉಪವಾಸ ಸತ್ಯಾಗ್ರಹ ಕೈಬಿಟ್ಟ ರೈತರು]

ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಮಾತನಾಡಿ, ಬಡ್ಡಿರಹಿತ ಸಾಲ ನೀಡುವುದಾಗಿ ಘೋಷಿಸಿ, ಅಸಲು ಕಟ್ಟಿದರೆ ಬಡ್ಡಿ ಮನ್ನಾ ಮಾಡುವುದಾಗಿ ಮುಖ್ಯಮಂತ್ರಿಗಳು ಹೇಳಿಕೆ ನೀಡುತ್ತಾರೆ. ಇದು ಸರಕಾರದ ಗೋಸುಂಬೆ ಬಣ್ಣವನ್ನು ಬಯಲು ಮಾಡುತ್ತದೆ ಎಂದರು.

Farmers protest

ಬಡ್ಡಿ ರಹಿತ ಸಾಲ ನೀಡಿದ ಮೇಲೆ ಇನ್ನೆಲ್ಲಿಂದ ಬಡ್ಡಿ ಬರುತ್ತದೆ ಎಂದು ಪ್ರಶ್ನಿಸಿದರು. ಬರದ ಬೇಗೆಯಿಂದ ಸಂಕಷ್ಟಕ್ಕೊಳಗಾದ ರೈತರಿಗೆ ರಾಜ್ಯ ಹಾಗೂ ಕೇಂದ್ರ ಸರಕಾರ ಯಾವುದೇ ನೆರವನ್ನು ನೀಡುತ್ತಿಲ್ಲ. ಇದರಿಂದಾಗಿ ಗ್ರಾಮೀಣ ಪ್ರದೇಶದಲ್ಲಿ ರೈತರ ಬದುಕು ಅಸಹನೀಯವಾಗಿದೆ. ಮಳೆ ಅಭಾವ ಹಾಗೂ ನೀರಿನ ಕೊರತೆಯಿಂದಾಗಿ ಬೆಳೆಗಳು ನಾಶಗೊಂಡಿದ್ದರೆ, ಜಾನುವಾರುಗಳು ಮೇವು ಹಾಗೂ ಕುಡಿಯುವ ನೀರಿಗಾಗಿ ಪರಿತಪಿಸುತ್ತಿವೆ ಎಂದರು.[ಸಮಗ್ರ ಸಾವಯವ ಕೃಷಿಗೆ ಹೆಚ್ಚಿನ ಒತ್ತು: ಕೃಷಿ ಸಚಿವ ಕೃಷ್ಣ ಭೈರೇಗೌಡ]

ರಾಜ್ಯ ಸರಕಾರ ತಕ್ಷಣ ರೈತರ ನೆರವಿಗೆ ಧಾವಿಸಬೇಕಿದೆ. ಕಬಿನಿ ಅಚ್ಚುಕಟ್ಟು ಪ್ರದೇಶದ ರೈತರ ಭತ್ತದ ಬೆಳೆ ನಷ್ಟಕ್ಕೆ ಎಕರೆಗೆ 25 ಸಾವಿರ ಪರಿಹಾರ ನೀಡಬೇಕು, ಬಣ್ಣಾರಿ ಅಮ್ಮನ್ ಸಕ್ಕರೆ ಕಾರ್ಖಾನೆಗೆ ಪ್ರಸಕ್ತ ಸಾಲಿನಲ್ಲಿ ರೈತರು ಪೂರೈಸಿರುವ ಕಬ್ಬಿಗೆ ಪ್ರತಿ ಟನ್ ಗೆ 3 ಸಾವಿರ ದರ ನಿಗದಿಪಡಿಸಬೇಕು,

ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ ರೈತರ ಸಾಲ ಮನ್ನಾ ಮಾಡಬೇಕು ಹಾಗೂ ಕೃಷಿ ಪಂಪ್ ಸೆಟ್ ಗಳಿಗೆ ಸತತ 10 ಗಂಟೆ ವಿದ್ಯುತ್ ಪೂರೈಕೆಗೆ ಕ್ರಮ ಕೈಗೊಳ್ಳಬೇಕು ರೈತರಿಗೆ ನ್ಯಾಯಯುತ ದರ ನಿಗದಿ ಮಾಡಿ ಹಣ ಕೊಡಿಸಲು ಸರಕಾರ, ಕ್ಷೇತ್ರದ ಶಾಸಕ ಹಾಗೂ ಮುಖ್ಯಮಂತ್ರಿ, ಜಿಲ್ಲಾ ಉಸ್ತುವಾರಿ ಸಚಿವರು ನಿರ್ಲಕ್ಷ್ಯ ತೋರಿದ್ದಾರೆ ಎಂದು ಆರೋಪಿಸಿದರು.[ನೆಲಕಚ್ಚಿದ ತರಕಾರಿ ಬೆಲೆ: ಕಂಗಾಲಾದ ರೈತಾಪಿ ವರ್ಗ]

ನಮ್ಮೆಲ್ಲ ಬೇಡಿಕೆಗಳನ್ನು ಈಡೇರಿಸಲು ಜಿಲ್ಲಾಡಳಿತ ಕ್ರಮ ಕೈಗೊಳ್ಳದಿದ್ದರೆ ಇದೇ ತಿಂಗಳ 14ರಂದು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಸಿದರು. ತಹಸೀಲ್ದಾರ್ ದಯಾನಂದ್ ಅವರಿಗೆ ಮನವಿ ಒಳಗೊಂಡ ಪತ್ರವನ್ನು ಸಲ್ಲಿಸಲಾಯಿತು. 30 ನಿಮಿಷಗಳ ಕಾಲ ನಡೆದ ಈ ರಸ್ತೆ ತಡೆಯಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿತ್ತು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Sugercane farmers urges to fulfill the various demands, protested in Nanjangud, Mysuru district. Farmers stopped the vehicular movement in national highway 212.
Please Wait while comments are loading...