ಪಕ್ಷ ಒಪ್ಪಿದರೆ ವರುಣಾದಿಂದ ಸ್ಪರ್ಧೆ: ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ
ಮೈಸೂರು, ಡಿ.11: ಪಕ್ಷ ತೀರ್ಮಾನಿಸಿದರೆ ವರುಣಾ ಕ್ಷೇತ್ರದಿಂದ ಸ್ಪರ್ಧಿಸಲು ಸಿದ್ಧ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.
ಕಳೆದ ಬಾರಿ ವಿಧಾನ ಸಭೆ ಚುನಾವಣೆಯಲ್ಲಿ ಬಿ.ವೈ.ವಿಜಯೇಂದ್ರ ಅವರು ವರುಣಾ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂದೇ ಹೇಳಲಾಗಿತ್ತು. ಮಾಜಿ ಸಿಎಂ ಸಿದ್ದರಾಮಯ್ಯ ಅವರು ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯ ವರುಣಾ ಕೇತ್ರದಿಂದಲೇ ಸ್ಪರ್ಧಿಸಿದ್ದರು. ಹೀಗಾಗಿ ವಿಜಯೇಂದ್ರ ಸ್ಪರ್ಧೆ ಬಹಳ ಕುತೂಹಲ ಮೂಡಿಸಿತ್ತು. ಆದರೆ, ಕಡೇ ಕ್ಷಣದಲ್ಲಿ ವಿಜಯೇಂದ್ರ ಸ್ಪರ್ಧೆಯಿಂದ ಹಿಂದೆ ಸರಿದಿದ್ದರು. ಇದೀಗ ಮತ್ತೊಮ್ಮೆ ವರುಣಾ ಕ್ಷೇತ್ರದಿಂದ ಸ್ಪರ್ಧೆಸುವ ಆಸೆಯನ್ನು ವಿಜಯೇಂದ್ರ ಅವರು ಪರೋಕ್ಷವಾಗಿ ವ್ಯಕ್ತಪಡಿಸಿದ್ದಾರೆ.
ಭಾನುವಾರ ಸುತ್ತೂರು ಮಠದಿಂದ ಆಯೋಜಿಸಲಾಗಿದ್ದ 'ರಜತ ಮಹೋತ್ಸವ ಸಮಾರೋಪ ಸಮಾರಂಭದಲ್ಲಿ ಬಿ.ವೈ.ವಿಜಯೇಂದ್ರ ಭಾಗವಹಿಸಿದ್ದರು. ಈ ವೇಳೆ ಸುದ್ದಿಗಾರರರೊಂದಿಗೆ ಮಾತನಾಡಿದ ಅವರು, ವರುಣಾ ಕ್ಷೇತ್ರದಲ್ಲಿ ಸ್ಪರ್ಧೆಗೆ ಸಿದ್ಧನಿದ್ದೇನೆಂದು ನೇರವಾಗಿ ಹೇಳದಿದ್ದರೂ ಪಕ್ಷ ಯಾವುದೇ ತೀರ್ಮಾನ ಮಾಡಿದರೂ ಅದಕ್ಕೆ ಬದ್ಧ ಎಂದು ತಿಳಿಸಿದ್ದಾರೆ.

ಹಳೆಯ ಮೈಸೂರು ಭಾಗದಲ್ಲಿ ಹೆಚ್ಚಿನ ಸ್ಥಾನಗಳನ್ನು ಪಡೆಯಲು ಹೋರಾಟ ಮಾಡುತ್ತಿದ್ದೇವೆ. ನಾನು ವರುಣಾ ಕ್ಷೇತ್ರ ಮಾತ್ರವಲ್ಲ, ಎಲ್ಲಾ ಕ್ಷೇತ್ರಗಳಲ್ಲೂ ಅಭ್ಯರ್ಥಿಗಳ ಗೆಲುವಿಗಾಗಿ ಸಂಘಟನೆ ಮಾಡುತ್ತಿದ್ದೇನೆ. ಕಳೆದ ಬಾರಿಗಿಂತ ಈ ಬಾರಿ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವುದಕ್ಕೆ ಮುಂದಾಗಿದ್ದೇವೆ ಎಂದಿದ್ದಾರೆ.
ಸಿದ್ದರಾಮಯ್ಯ ಅವರು ವರುಣಾ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬ ಮಾಹಿತಿ ಇದೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಪಕ್ಷದ ನಿರ್ಧಾರವೇ ಅಂತಿಮ. ಯಾವುದೇ ಜವಾಬ್ದಾರಿ ಕೊಟ್ಟರು ನಿಭಾಯಿಸುವೆ. ಎಲ್ಲಾ ಸವಾಲುಗಳನ್ನು ಎದುರಿಸುವ ಶಕ್ತಿಯನ್ನು ನಾಡಿನ ಜನರು ಕೊಟ್ಟಿದ್ದಾರೆ ಎಂದು ತಿಳಿಸಿದ್ದಾರೆ.
ಕಾಂಗ್ರೆಸ್ ಪಕ್ಷವೂ ಭ್ರಮೆಯಲ್ಲಿದೆ. ಗುಜರಾತ್ ಫಲಿತಾಂಶದ ಪರಿಣಾಮ ಕರ್ನಾಟಕದಲ್ಲಿ ಆಗುವುದಿಲ್ಲ ಎಂದು ಹೇಳುತ್ತಿರುವ ಕಾಂಗ್ರೆಸ್ ನಾಯಕರು ಭ್ರಮೆಯಲ್ಲಿ ತೇಲುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಎಂಬುದು ಬರೀ ಅಲೆ ಅಲ್ಲ, ಅದೊಂದು ಸುನಾಮಿ. ಕಾಂಗ್ರೆಸ್‌ನವರಿಗೆ ಈ ಸುನಾಮಿಯ ಅಲೆ ಇನ್ನೂ ಅರ್ಥವಾಗಿಲ್ಲ. ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಜೋಡಿಯಾಟ ನಡೆಯಲ್ಲ ಎಂದಿದ್ದಾರೆ.












Click it and Unblock the Notifications