ದ್ವೇಷ ಸಾಧನೆಗೆ ರಾಜಕೀಯ ಕುಟುಂಬದ ಹೆಣ್ಣುಮಕ್ಕಳನ್ನು ಎಳೆದುತರಬೇಡಿ; ಸಿದ್ದರಾಮಯ್ಯ ಪತ್ನಿ ಭಾವುಕ ಪತ್ರ
ಮುಡಾ ಹಗರಣ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಈ ನಡುವೆ ಮುಖ್ಯಮಂತ್ರಿ ಅವರ ಪತ್ನಿ ಪಾರ್ವತಿ ಅವರು ಮುಡಾಗೆ ಸೈಟ್ಗಳನ್ನು ಹಿಂದಿರುಗಿಸುವುದಾಗಿ ಮುಡಾ ಆಯುಕ್ತರಿಗೆ ಪತ್ರ ಬರೆದಿದ್ದು, ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಸಿದ್ದರಾಮಯ್ಯ ವಿರುದ್ಧ ಇಡಿ ಪ್ರಕರಣ ದಾಖಲಿಸಿಕೊಂಡ ದಿನವೇ ಅವರ ಪತ್ನಿ ನಿವೇಶ ವಾಪಸ್ ಮಾಡುವುದಾಗಿ ಪತ್ರ ಬರೆದಿದ್ದಾರೆ.
ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಸಿದ್ದರಾಮಯ್ಯನವರಿಗೆ ರಾಜಜಕೀಯವಾಗಿ ಆಗುತ್ತಿರುವ ಸಂಕಷ್ಟವನ್ನು ನೋಡಲಾಗದೇ ಈ ನಿರ್ಧಾರಕ್ಕೆ ಬಂದಿದ್ದೇನೆ ಎಂದು ಹೇಳಿದ್ದಾರೆ. ಮುಡಾಗೆ ಬರೆದ ಪತ್ರದಲ್ಲಿ ಈ ಬಗ್ಗೆ ಸ್ಪಷ್ಟವಾಗಿ ಉಲ್ಲೇಖಿಸಿದ್ದಾರೆ. ಮುಡಾಗೆ ಪತ್ರ ಬರೆಯುವ ಜೊತೆಗೆ ಭಾವನಾತ್ಮಕ ಸಂದೇಶವನ್ನು ಹಂಚಿಕೊಂಡಿದ್ದು, ರಾಜಕೀಯ ದ್ವೇಷಕ್ಕೆ ಕುಟುಂಬದವರ ಹೆಣ್ಣು ಮಕ್ಕಳನ್ನು ವಿವಾದಕ್ಕೆ ಎಳೆದು ತರಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ.

ಸಿದ್ದರಾಮಯ್ಯ ಪತ್ನಿ ಬರೆದ ಭಾವನಾತ್ಮಕ ಪತ್ರ ಹೀಗಿದೆ
ನನ್ನ ಪತಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ 40 ವರ್ಷದ ಸುದೀರ್ಘ ರಾಜಕಾರಣದಲ್ಲಿ ಯಾವುದೇ ಸಣ್ಣ ಕಳಂಕವೂ ಅಂಟಿಕೊಳ್ಳದಂತಹ ನೈತಿಕತೆಯನ್ನು ವ್ರತದಂತೆ ಪಾಲಿಸಿಕೊಂಡು ಬಂದವರು. ರಾಜಕೀಯವೂ ಸೇರಿದಂತೆ ಸಾರ್ವಜನಿಕ ಜೀವನದಲ್ಲಿ ಕಾಣಿಸಿಕೊಂಡು ಅವರಿಗೆ ಮುಜುಗರ ಉಂಟು ಮಾಡಬಾರದು ಎಂಬ ನಿರ್ಧಾರಕ್ಕೆ ಬದ್ಧಳಾಗಿ ಬದುಕಿದವಳು.
ನಾನೆಂದೂ ಮನೆ, ಆಸ್ತಿ, ಚಿನ್ನ, ಸಂಪತ್ತನ್ನು ಬಯಸಿದವಳಲ್ಲ. ಯಾವುದೇ ಕಾರಣಕ್ಕೂ ನನ್ನಿಂದ ಅವರ ರಾಜಕೀಯ ಜೀವನಕ್ಕೆ ಒಂದು ಸಣ್ಣ ಹನಿಯಷ್ಟೂ ಕಳಂಕ ತಟ್ಟಬಾರದೆಂದು ಎಚ್ಚರಿಕೆಯಿಂದ ನಡೆದುಕೊಂಡವಳು. ನನ್ನ ಪತಿಗೆ ರಾಜ್ಯದ ಜನತೆ ಹರಸುತ್ತಾ ಬಂದ ಪ್ರೀತಿ ಅಭಿಮಾನಗಳನ್ನು ದೂರದಿಂದಲೇ ಕಂಡು ಸಂತೋಷ ಮತ್ತು ಹೆಮ್ಮೆ ಪಟ್ಟವಳು.
ಹೀಗಿದ್ದರೂ ಮೈಸೂರಿನ ಮುಡಾ ನಿವೇಶನಕ್ಕೆ ಸಂಬಂಧಿಸಿದಂತೆ ಕೇಳಿಬಂದ ಆರೋಪಗಳಿಂದ ನಾನು ಘಾಸಿಗೊಂಡಿದ್ದೇನೆ. ನನ್ನ ಸ್ವಂತ ಸೋದರ ಅರಿಶಿನ - ಕುಂಕುಮದ ಭಾಗವಾಗಿ ಕೊಟ್ಟ ಜಮೀನಿನ ಬದಲು ಪಡೆದ ನಿವೇಶನಗಳಿಂದ ಇಷ್ಟೊಂದು ರಾದ್ಧಾಂತವಾಗುತ್ತದೆ. ಇದರಿಂದ ನನ್ನ ಪತಿಯವರು ಅನ್ಯಾಯವಾಗಿ ಆರೋಪಗಳನ್ನು ಎದುರಿಸುವಂತಾಗಬಹುದು ಎನ್ನುವುದನ್ನು ನಾನು ಊಹಿಸಿದವಳೂ ಅಲ್ಲ.
ನನಗೆ ಈ ನಿವೇಶನ, ಮನೆ, ಆಸ್ತಿ, ಸಂಪತ್ತು ಯಾವುದೂ ಕೂಡ ನನ್ನ ಪತಿಯ ಗೌರವ, ಘನತೆ, ಮರ್ಯಾದೆ ಮತ್ತು ಅವರ ನೆಮ್ಮದಿಗಿಂತ ದೊಡ್ಡದಲ್ಲ. ಇಷ್ಟು ವರ್ಷಗಳ ಕಾಲ ಅಧಿಕಾರದಲ್ಲಿದ್ದ ಅವರಿಂದ ಏನನ್ನೂ ನನಗಾಗಲೀ, ನನ್ನ ಕುಟುಂಬಕ್ಕಾಗಲೀ ಬಯಸದೇ ಇದ್ದ ನನಗೆ ಈ ನಿವೇಶನಗಳು ತೃಣಕ್ಕೆ ಸಮ.
ಈ ಹಿನ್ನೆಲೆಯಲ್ಲಿ ವಿವಾದಕ್ಕೆ ಕಾರಣವಾಗಿರುವ ಮುಡಾದ 14 ನಿವೇಶನಗಳನ್ನು ವಾಪಸ್ ಮಾಡಲು ನಿರ್ಧರಿಸಿದ್ದೇನೆ. ಈ ಬಗ್ಗೆ ನನ್ನ ಪತಿಯವರ ಅಭಿಪ್ರಾಯ ಏನಿದೆ ಎನ್ನುವುದು ನನಗೆ ತಿಳಿದಿಲ್ಲ. ನನ್ನ ಮಗನ ಬಳಿಯಾಗಲಿ, ನನ್ನ ಕುಟುಂಬದ ಇತರ ಸದಸ್ಯರ ಬಳಿಯಾಗಲಿ ಇದರ ಬಗ್ಗೆ ನಾನು ಚರ್ಚಿಸಿಲ್ಲ. ಇದು ನಾನು ನನ್ನ ಆತ್ಮ ಸಾಕ್ಷಿಯ ಕರೆಗೆ ಓಗೊಟ್ಟು ಪ್ರಜ್ಞಾಪೂರ್ವಕವಾಗಿ ಕೈಗೊಂಡಿರುವ ತೀರ್ಮಾನ.
ಈ ಹಂತದಲ್ಲಿ ಇಂತಹ ನಿರ್ಧಾರಕ್ಕೆ ಏಕೆ ಬಂದಿರಿ? ಎಂದು ಯಾರಾದರೂ ಕೇಳಬಹುದು. ಆರೋಪ ಕೇಳಿ ಬಂದ ದಿನವೇ ನಾನು ಈ ನಿರ್ಧಾರ ಮಾಡಿದ್ದೆ. ಆದರೆ, ಈ ಮುಡಾ ನಿವೇಶನ ಹಂಚಿಕೆಯ ಆರೋಪವನ್ನು ರಾಜಕೀಯ ದುರುದ್ದೇಶದಿಂದ ಮಾಡಲಾಗಿದ್ದು, ಈ ಅನ್ಯಾಯದ ವಿರುದ್ಧ ಹೋರಾಡಬೇಕು. ಅವರ ಸಂಚಿಗೆ ನಾವು ಬಲಿಯಾಗಬಾರದು ಎಂದು ಕೆಲವು ಹಿತೈಷಿಗಳು ಹೇಳಿದ ಕಾರಣಕ್ಕೆ ನಿವೇಶನ ವಾಪಸು ಮಾಡಬೇಕೆಂಬ ನಿರ್ಧಾರವನ್ನು ಕೈ ಬಿಟ್ಟಿದ್ದೆ.
ನನ್ನ ಈ ನಿರ್ಧಾರ ಅಚಲವಾಗಿದ್ದು, ಈ ನಿವೇಶನಗಳನ್ನು ವಾಪಸು ನೀಡುವುದರ ಜೊತೆಗೆ ಮುಡಾಕ್ಕೆ ಸಂಬಂಧಿಸಿದ ಎಲ್ಲಾ ಆರೋಪಗಳ ಬಗ್ಗೆ ಸಮಗ್ರ ತನಿಖೆ ಮಾಡಬೇಕೆಂದು ಆಗ್ರಹಿಸುತ್ತೇನೆ.
ಕೊನೆಯದಾಗಿ, ಎಲ್ಲಾ ರಾಜಕೀಯ ಪಕ್ಷದ ನಾಯಕರು ಮತ್ತು ಮಾಧ್ಯಮ ಕ್ಷೇತ್ರದ ಬಂಧುಗಳಲ್ಲಿ ನನ್ನ ವಿನಮ್ರ ವಿನಂತಿ. ದಯವಿಟ್ಟು ರಾಜಕೀಯ ಕ್ಷೇತ್ರದಿಂದ ದೂರವಿದ್ದು, ತಮ್ಮ ಪಾಡಿಗೆ ತಾವಿರುವ ರಾಜಕೀಯ ಕುಟುಂಬದ ಹೆಣ್ಣು ಮಕ್ಕಳನ್ನು ರಾಜಕೀಯ ದ್ವೇಷ ಸಾಧನೆಗಾಗಿ ವಿವಾದದ ಕಣಕ್ಕೆ ಎಳೆದು ತಂದು ಅವರ ಘನತೆ, ಗೌರವಗಳಿಗೆ ಹಾನಿ ಮಾಡಬೇಡಿ, ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.












Click it and Unblock the Notifications