MUDA Case: 14 ಮುಡಾ ನಿವೇಶನಗಳನ್ನು ವಾಪಸ್ ಮಾಡಲು ನಿರ್ಧರಿಸಿದ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ
ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾರ್ವತಿ ವಿರುದ್ಧ ಎಫ್‌ಐಆರ್ ದಾಖಲಾದ ಬೆನ್ನಲ್ಲೇ ಮಹತ್ವದ ಬೆಳವಣಿಗೆಯಲ್ಲಿ ಸಿದ್ದರಾಮಯ್ಯ ಪತ್ನಿ ಮುಡಾಗೆ ನಿವೇಶನಗಳನ್ನು ವಾಪಸ್ ಮಾಡಲು ನಿರ್ಧರಿಸಿದ್ದಾರೆ. ತಮಗೆ ಮಂಜೂರಾಗಿದ್ದ 14 ನಿವೇಶನಗಳನ್ನು ಹಿಂದಿರುಗುಸುತ್ತೇನೆ ಎಂದು ಮುಡಾಗೆ ಪತ್ರ ಬರೆದಿದ್ದಾರೆ. ತಾನು ನಿವೇಶನಗಳನ್ನು ವಾಪಸ್ ಮಾಡಲು ಸಿದ್ಧವಿದ್ದು, ಈ ಕುರಿತು ಅಗತ್ಯ ಕ್ರಮ ತೆಗೆದುಕೊಳ್ಳುವಂತೆ ಮನವಿ ಮಾಡಿದ್ದಾರೆ.
ಪಾರ್ವತಿ W/o ಸಿದ್ದರಾಮಯ್ಯ ಹೆಸರಿನಲ್ಲಿ ಪತ್ರ ಬರೆಯಲಾಗಿದ್ದು, ಮೈಸೂರು ತಾಲೂಕಿನ ಕೆಸರೆ ಗ್ರಾಮದ ಸರ್ವೆ ನಂ 464ರಲ್ಲಿ 3 ಎಕರೆ 16 ಗುಂಟೆ ಜಮೀನನ್ನು ಪ್ರಾಧಿಕಾರವು ಭೂಸ್ವಾಧೀನವಿಲ್ಲದೆ ಉಪಯೋಗಿಸಿಕೊಂಡಿದ್ದಕ್ಕಾಗಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವು ಪರಿಹಾರವಾಗಿ ವಿಜಯನಗರ 3 ಮತ್ತು 4ನೇ ಹಂತದಲ್ಲಿ ವಿವಿಧ ಅಳತೆಯ 14 ನಿವೇಶನಗಳನ್ನು ಮಂಜೂರು ಮಾಡಿತ್ತು.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ನೀಡಿರುವ 14 ನಿವೇಶನಗಳ ಕ್ರಯಪತ್ರಗಳನ್ನು ರದ್ದುಗೊಳಿಸುವ ಮೂಲಕ ನಾನು ಪರಿಹಾರದ ನಿವೇಶನಗಳನ್ನು ಒಪ್ಪಿಸಲು ಮತ್ತು ಹಿಂತಿರುಗಿಸಲು ಬಯಸುತ್ತೇನೆ. ನಿವೇಶನಗಳ ಸ್ವಾಧೀನವನ್ನು ಸಹ ಮುಡಾಗೆ ಮರಳಿ ಹಸ್ತಾಂತರಿಸುತ್ತೇನೆ. ಈ ನಿಟ್ಟಿನಲ್ಲಿ ಆದಷ್ಟು ಬೇಗ ಕ್ರಮ ತೆಗೆದುಕೊಳ್ಳಿ ಎಂದು ಮನವಿ ಮಾಡಿದ್ದಾರೆ.
ಮಹತ್ವದ ಬೆಳವಣಿಗೆ
ಮುಡಾ ಹಂಚಿಕೆ ಪ್ರಕರಣದಲ್ಲಿ ನಾನು ತಪ್ಪು ಮಾಡಿಲ್ಲ ಇದು ರಾಜಕೀಯ ಷಡ್ಯಂತ್ರ ಎಂದು ಸಿಎಂ ಸಿದ್ದರಾಮಯ್ ಹೇಳಿದ್ದರು. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಿಎಂ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾರ್ವತಿ ವಿರುದ್ಧ ಪ್ರಕರಣ ದಾಖಲಿಸಲು ಸೂಚನೆ ಕೊಟ್ಟ ಬೆನ್ನಲ್ಲೇ, ಲೋಕಾಯುಕ್ತ ಪೊಲೀಸರು ಎಫ್‌ಐಆರ್ ದಾಖಲಿಸಿದ್ದರು. ತನಿಖೆಗೆ ಸಹಕರಿಸುವುದಾಗಿ ಕೂಡ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಬೆನ್ನಲ್ಲೇ ಅವರ ಪತ್ನಿ 14 ನಿವೇಶಗಳನ್ನು ಮುಡಾಗೆ ವಾಪಸ್ ಮಾಡಲು ಪತ್ರ ಬರೆದಿರುವುದು ಕುತೂಹಲ ಮೂಡಿಸಿದೆ. ಇಷ್ಟು ವರ್ಷಗಳ ರಾಜಕೀಯ ವೃತ್ತಿ ಜೀವನದಲ್ಲಿ ಭ್ರಷ್ಟಾಚಾರ ಆರೋಪಗಳಿಂದ ದೂರ ಉಳಿದಿದ್ದ ನನ್ನ ವಿರುದ್ಧ ಮೊದಲ ಬಾರಿಗೆ ರಾಜಕೀಯ ಪ್ರೇರಿತ ಭ್ರಷ್ಟಾಚಾರ ಪ್ರಕರಣವೊಂದು ದಾಖಲಾಗಿದೆ ಎಂದು ಅವರು ಹೇಳಿದ್ದರು.
ಪ್ರಕರಣದಲ್ಲಿ ಎಫ್‌ಐಆರ್ ದಾಖಲಾಗುತ್ತಿದ್ದಂತೆ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ನಾಯಕರು ಒತ್ತಾಯ ಮಾಡಿದ್ದರು. ಆದರೆ ನಾನು ಯಾವುದೇ ಕಾರಣಕ್ಕೂ ರಾಜಿನಾಮೆ ಕೊಡುವುದಿಲ್ಲ, ಕಾನೂನಾತ್ಮಕವಾಗಿ ಹೋರಾಟ ಮಾಡುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.












Click it and Unblock the Notifications