ಚಾಮುಂಡಿ ಬೆಟ್ಟ ಪ್ರಾಧಿಕಾರ: ಮೈಸೂರು ರಾಜಮನೆತನಕ್ಕೆ ಹಿನ್ನಡೆ
ಮೈಸೂರು ರಾಜಮನೆತನ ಹಾಗೂ ಸರ್ಕಾರದ ನಡುವೆ ಚಾಮುಂಡಿಬೆಟ್ಟದ ಪ್ರಾಧಿಕಾರ ರಚನೆಗೆ ಸಂಬಂಧಿಸಿದಂತೆ ಇದ್ದ ತಿಕ್ಕಾಟದಲ್ಲಿ ಇದೀಗ ರಾಜಮನೆತನಕ್ಕೆ ಹಿನ್ನಡೆಯಾಗಿದೆ. ಸರ್ಕಾರ ಪ್ರಾಧಿಕಾರ ರಚನೆ ಮಾಡಿದ್ದಕ್ಕೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ತಡೆಯಾಜ್ಞೆ ತಂದಿದ್ದರು, ಇದೀಗ ನ್ಯಾಯಾಲಯ ತಡೆಯಾಜ್ಞೆಯನ್ನು ತೆರವು ಮಾಡಿದೆ. ಇದರಿಂದ ನ್ಯಾಯಾಲಯದಲ್ಲಿ ಮೈಸೂರು ರಾಜಮನೆತನಕ್ಕೆ ಹಿನ್ನಡೆಯಾಗಿದೆ.
ಈ ಸಂಬಂಧ ಮೈಸೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್, "ನ್ಯಾಯಾಲಯ ತಡೆಯಾಜ್ಞೆ ತೆರವುಗೊಳಿಸಿರುವುದರಿಂದ ಸೆಪ್ಟೆಂಬರ್ 3ರಂದು ಚಾಮುಂಡಿಬೆಟ್ಟದ ದಾಸೋಹ ಭವನದಲ್ಲಿ ಚಾಮುಂಡಿಬೆಟ್ಟ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಿದ್ದರಾಮಯ್ಯ ನೇತೃತ್ವದಲ್ಲಿ ಮೊದಲ ಸಭೆ ಆಯೋಜನೆ ಮಾಡಲಾಗಿದೆ. ಚಾಮುಂಡೇಶ್ವರಿ ದೇವಸ್ಥಾನ, ಚಾಮುಂಡಿ ಬೆಟ್ಟದ ಅಭಿವೃದ್ಧಿಗೆ ನಾವೆಲ್ಲರೂ ಮುಂದಾಗೋಣ" ಎಂದು ಕರೆ ನೀಡಿದರು.

ಸರ್ಕಾರ ಜುಲೈ 1ರಂದು ಪ್ರಾಧಿಕಾರ ರಚನೆಗೆ ಸರಕಾರ ಆದೇಶ ಹೊರಡಿಸಿತ್ತು. ಆದರೆ ಜುಲೈ 26ರಂದು ಚಾಮುಂಡಿ ಬೆಟ್ಟ ನಮ್ಮ ಖಾಸಗಿ ಆಸ್ತಿ ಎಂದು ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್ ಸರ್ಕಾರದ ಆದೇಶಕ್ಕೆ ನ್ಯಾಯಾಲಯದ ಮೂಲಕ ತಡೆ ತಂದಿದ್ದರು. ಆದರೆ, ಈ ಹಿಂದಿನಿಂದಲೂ ರಾಜ್ಯ ಸರ್ಕಾರವೇ ಚಾಮುಂಡಿ ಬೆಟ್ಟ ನಿರ್ವಹಣೆ ಮಾಡುತ್ತಿದೆ. ಈಗ ಪ್ರಮೋದಾ ದೇವಿ ಒಡೆಯರ್ ತಂದಿದ್ದ ತಡೆಯಾಜ್ಞೆಯನ್ನು ನ್ಯಾಯಾಲಯ ತೆರವುಗೊಳಿಸಿದೆ ಎಂದು ಹೇಳಿದರು.
ರಾಜ್ಯಪಾಲರ ವಿರುದ್ಧ ಅಸಮಾಧಾನ
ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದಕ್ಕೆ ಎಂ ಲಕ್ಷ್ಮಣ್ ಅಸಮಾಧಾನ ವ್ಯಕ್ತಪಡಿಸಿದರು. ರಾಜ್ಯಪಾಲು ಬಿಜೆಪಿ ಆದೇಶದಂತೆ ಕೆಲಸ ಮಾಡುತ್ತಿದ್ದಾರೆ ಎಂದು ದೂರಿದ ಅವರು, ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಡುವಂತೆ ಲೋಕಾಯುಕ್ತ ಅಧಿಕಾರಿಗಳು ರಾಜ್ಯಪಾಲರಿಗೆ ಪತ್ರ ಬರೆದರೂ, ರಾಜ್ಯಪಾಲರು ಮಾತ್ರ ಯಾವುದೇ ಪತ್ರ ಬಂದಿಲ್ಲ ಎನ್ನುತ್ತಿದ್ದಾರೆ. ಛಲವಾದಿ ನಾರಾಯಣಸ್ವಾಮಿ ಸಿಎಂ ಸಿದ್ದರಾಮಯ್ಯ ವಿರುದ್ಧ ಬೆಳಗ್ಗೆ ಪತ್ರ ಬರೆದರೆ ಸಂಜೆಯೇ ಕ್ರಮಕ್ಕೆ ಮುಂದಾಗಿದ್ದಾರೆ, ರಾಜಭವನ ಬಿಜೆಪಿ ಕಚೇರಿಯಾಗಿದೆ ಎನಿಸುತ್ತಿದೆ ಎಂದರು.
ಛಲವಾದಿ ನಾರಾಯಣಸ್ವಾಮಿ ರಾಜ್ಯಪಾಲರಿಗೆ ದೂರು ಕೊಟ್ಟ ಬಳಿಕ, ರಾಜ್ಯಪಾಲು ಸರ್ಕಾರದ ಕಾರ್ಯದರ್ಶಿಗಳಿಗೆ ಮಾಹಿತಿ ನೀಡುವಂತೆ ಪತ್ರ ಬರೆದರು. ಸಿಎಂ ಸಿದ್ದರಾಮಯ್ಯ ವಿಚಾರದಲ್ಲಿ ರಾಜ್ಯಪಾಲರು ಆಸಕ್ತಿ ವಹಿಸಿ ತುರ್ತಾಗಿ ನಿರ್ಧಾರ ಮಾಡುತ್ತಿರುವುದು ಏಕೆ? ಇದೇ ರಾಜ್ಯಪಾಲರು ಮುರುಗೇಶ್ ನಿರಾಣಿ, ಶಶಿಕಲಾ ಜೊಲ್ಲೆ, ಎಚ್.ಡಿ.ಕುಮಾರಸ್ವಾಮಿ ವಿರುದ್ಧದ ದೂರುಗಳ ಬಗ್ಗೆ ಆಸಕ್ತಿ ವಹಿಸದೆ ಮೌನವಾಗಿರುವುದೇಕೆ ಎಂದು ಪ್ರಶ್ನೆ ಮಾಡಿದ್ದಾರೆ.












Click it and Unblock the Notifications