ಭ್ರೂಣ ಹತ್ಯೆ ಬಗ್ಗೆ ಸುಳಿವು ನೀಡಿದರೆ 50 ಸಾವಿರ ನಗದು ಬಹುಮಾನ ಘೋಷಿಸಿದ ಡಿಎಚ್‌ಒ
ಮೈಸೂರು, ಡಿಸೆಂಬರ್ 6: ರಾಜ್ಯಾದ್ಯಂತ ಹೆಣ್ಣು ಭ್ರೂಣ ಹತ್ಯೆ ಸದ್ದು ಮಾಡಿತ್ತುಘಿ. ಇದೀಗ ಭ್ರೂಣ ಪತ್ತೆ, ಹತ್ಯೆ ಬಗ್ಗೆ ಮಾಹಿತಿ ನೀಡಿದರೆ 50 ಸಾವಿರ ನಗದು ಬಹುಮಾನ ನೀಡಲಾಗುತ್ತದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಕುಮಾರಸ್ವಾಮಿ ಘೋಷಿಸಿದ್ದಾರೆ.
ಭ್ರೂಣ ಹತ್ಯೆ ಪ್ರಕರಣವನ್ನು ಸರ್ಕಾರ ಸಿಐಡಿಗೆ ವಹಿಸಿದೆ. ವೈದ್ಯರು ಹಾಗೂ ನರ್ಸ್‌ಗಳನ್ನು ಸಿಐಡಿ ಪೊಲೀಸರು ವಿಚಾರಣೆ ಮಾಡುತ್ತಿದ್ದಾರೆ. ಭ್ರೂಣ ಪತ್ತೆ ಹಾಗೂ ಹತ್ಯೆ ಪ್ರಕರಣ ಸಂಬಂಧ ಮೈಸೂರು ಜಿಲ್ಲೆಯಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳು ಅಲರ್ಟ್ ಆಗಿದ್ದಾರೆ.

ಭ್ರೂಣ ಪತ್ತೆ, ಹತ್ಯೆ ಬಗ್ಗೆ ಮಾಹಿತಿ ನೀಡಿದರೆ ಬಹುಮಾನ ನೀಡಲಾಗುವುದು. ಮಾಹಿತಿ ನೀಡಿದವರ ಬಗ್ಗೆ ಗೌಪ್ಯತೆ ಕಾಪಾಡಲಾಗುವುದು. ದೊಡ್ಡಮಟ್ಟದ ಕಾರ್ಯಾಗಾರ ಮೂಲಕ ಜಾಗೃತಿ ಮೂಡಿಸಲಾಗುವುದು ಎಂದು ಡಿಎಚ್‌ಒ ಡಾ. ಕುಮಾರಸ್ವಾಮಿ ತಿಳಿಸಿದ್ದಾರೆ.
''ಹೆಣ್ಣು ಭ್ರೂಣ ಹತ್ಯೆ ತಡೆಗಟ್ಟಲು ಸಾಲುಸಾಲು ಜಾಗೃತಿ ಕಾರ‌್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಮೈಸೂರು ಜಿಲ್ಲೆಯಲ್ಲಿರುವ 1800 ಆಶಾ ಕಾರ‌್ಯಕರ್ತೆಯರು ಹಾಗೂ 1600 ಆರೋಗ್ಯ ಇಲಾಖೆಯ ಸಿಬ್ಬಂದಿಗೆ ದೊಡ್ಡ ಕಾರ್ಯಾಗಾರ ಏರ್ಪಡಿಸಲಾಗಿದೆ. ಭ್ರೂಣ ಹತ್ಯೆ ತಡೆಗಟ್ಟುವ ನಿಟ್ಟಿನಲ್ಲಿ ಏನೇನು ಕ್ರಮ ಕೈಗೊಳ್ಳಬೇಕು ಎಂಬುದನ್ನು ಮನವರಿಕೆ ಮಾಡಿಕೊಡಲಾಗುವುದು,'' ಎಂದು ಡಿಎಚ್‌ಒ ಡಾ.ಕುಮಾರಸ್ವಾಮಿ ತಿಳಿಸಿದ್ದಾರೆ.
ನಗರ ಸೇರಿದಂತೆ ಜಿಲ್ಲೆಯಲ್ಲಿರುವ ಎಲ್ಲಾ ಸ್ಕ್ಯಾನಿಂಗ್ ಸೆಂಟರ್‌ಗಳ ಮೇಲೆ ನಿಗಾ ಇರಿಸಲು ಮುಂದಾಗಿರುವ ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ನೇತೃತ್ವದಲ್ಲಿ ಟಾಸ್ಕ್ ಪೋರ್ಸ್ ರಚಿಸಲಾಗಿದ್ದು, ಈಗಾಗಲೇ ಮೈಸೂರು ನಗರ ಹಾಗೂ ಜಿಲ್ಲೆಯ 139 ಸ್ಕ್ಯಾನಿಂಗ್ ಸೆಂಟರ್‌ಗಳಿಗೆ ದಿಢೀರ್ ಭೇಟಿ ನೀಡಿ ತಪಾಸಣಾ ಕಾರ್ಯ ನಡೆಸಲಾಗಿದೆ. ಉಳಿದಂತೆ ಎಲ್ಲಾ ಸೆಂಟರ್‌ಗಳಿಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲನಾ ಕಾರ್ಯದಲ್ಲಿ ತೊಡಗಿದ್ದಾರೆ.
ನಕಲಿ ವೈದ್ಯರ ಪತ್ತೆಗೂ ಕಾರ್ಯಾಚರಣೆ: ಇದೇ ವೇಳೆ ನಕಲಿ ವೈದ್ಯರ ಪತ್ತೆ ಕಾರ್ಯಾಚರಣೆಯನ್ನು ಎರಡು ತಿಂಗಳಲ್ಲಿ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿಗಳು ಆದೇಶ ನೀಡಿದ್ದಾರೆ. ಸ್ಕ್ಯಾನಿಂಗ್ ಸೆಂಟರ್‌ಗಳ ಪರಿಶೀಲನೆ ಮುಗಿಯುತ್ತಿದ್ದಂತೆ ನಕಲಿ ವೈದ್ಯರ ಪತ್ತೆ ಮಾಡುವ ಕಾರ್ಯಚರಣೆ ಕೈಗೆತ್ತಿಕೊಳ್ಳಲಾಗುವುದು. ಕೆಲವರಿಗೆ ನೋಟಿಸ್ ನೀಡಲಾಗಿದೆ,'' ಎಂದು ಕುಟುಂಬ ಕಲ್ಯಾಣಾಧಿಕಾರಿ ಡಾ.ಗೋಪಿನಾಥ್ ತಿಳಿಸಿದ್ದಾರೆ.
ಮೈಸೂರಿನಲ್ಲಿ ಹೆಣ್ಣು ಭ್ರೂಣ ಹತ್ಯೆ ಪ್ರಕರಣ ಸಂಬಂಧ ಮೈಸೂರಿನ ಮಾತಾ ಆಸ್ಪತ್ರೆಯಲ್ಲೇ ಆಪರೇಷನ್ ನಡೆಯುತಿತ್ತು ಎಂಬ ವಿಚಾರ ಬೆಳಕಿಗೆ ಬರುತ್ತಿದ್ದಂತೆ ಮೈಸೂರಿನ ತಾಲೂಕು ಆರೋಗ್ಯಾಧಿಕಾರಿ ಡಾ.ರಾಜೇಶ್ವರಿ ಮತ್ತು ಈ ಹಿಂದೆ ಕರ್ತವ್ಯ ನಿರ್ವಹಿಸುತ್ತಿದ್ದ ಜಿಲ್ಲಾ ಕುಟುಂಬ ಕಲ್ಯಾಣಧಿಕಾರಿ ಡಾ.ರವಿ ಅವರನ್ನು ಅಮಾನತು ಮಾಡಲಾಗಿತ್ತು.












Click it and Unblock the Notifications