BPL Card: ಬಿಪಿಎಲ್ ಕಾರ್ಡ್ ರದ್ದು; ಮಹತ್ವದ ಹೇಳಿಕೆ ಕೊಟ್ಟ ಡಾ. ಪುಷ್ಪ ಅಮರನಾಥ್
ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ವಿಚಾರ ಸಂಚಲನ ಸೃಷ್ಟಿಸಿದೆ. 11 ಲಕ್ಷ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡಿರುವ ಕ್ರಮಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಸರ್ಕಾರ ಈ ಬಗ್ಗೆ ತೇಪೆ ಹಚ್ಚಲು ಪ್ರಯತ್ನ ಮಾಡುತ್ತಿದ್ದರೂ, ವಿಪಕ್ಷಗಳು ಈ ಬಗ್ಗೆ ಹೋರಾಟಕ್ಕೆ ಮುಂದಾಗಿವೆ. ಬಿಪಿಎಲ್ ಕಾರ್ಡ್ ರದ್ದಾದ ಬಳಿಕ ಜನಾಕ್ರೋಶ ವ್ಯಕ್ತವಾದ ಬೆನ್ನಲ್ಲೇ ಸರ್ಕಾರ ಈ ಬಗ್ಗೆ ಸ್ಪಷ್ಟನೆ ಕೊಡಲು ಮುಂದಾಗಿದೆ, ಬಡವರ ಕಾರ್ಡ್ ರದ್ದಾಗಿದ್ದರೆ ಮತ್ತೆ ಅರ್ಜಿ ಸಲ್ಲಿಸಿ ಎಂದು ಹೇಳಿದೆ.
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ಡಾ. ಪುಷ್ಪಾ ಅಮರನಾಥ್ ಮೈಸೂರಿನಲ್ಲಿ ಈ ಬಗ್ಗೆ ಮಾತನಾಡಿದ್ದು, ಅರ್ಹರು ಬಿಪಿಎಲ್ ಪಟ್ಟಿಯಿಂದ ಕೈ ಬಿಡಲಾಗಿದ್ದರೆ ಅಂತಹವರು ಮರು ಅರ್ಜಿ ಸಲ್ಲಿಸಿದರೆ ಪರಿಶೀಲಿಸಿ ಅರ್ಹರಿಗೆ ಮತ್ತೆ ಬಿಪಿಎಲ್ ಕಾರ್ಡ್ ನೀಡಲಾಗುವುದು ಎಂದು ಭರವಸೆ ನೀಡಿದ್ದಾರೆ.

ಮೈಸೂರಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರಕಾರದ ಸೂಚನೆಯಂತೆ ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ಪರಿಷ್ಕರಣೆಯಾಗುತ್ತಿದೆ. ಪರಿಷ್ಕರಣೆ ಮಾಡುವಾಗ ಅರ್ಹರ ಬಿಪಿಎಲ್ ಕಾರ್ಡ್ ರದ್ದಾಗಿದ್ದರೆ ಮತ್ತೆ ಬಿಪಿಎಲ್ ಕಾರ್ಡ್ ಮಾಡಿಕೊಡಲಾಗುವುದು. ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕಾಗಿ ನಮ್ಮ ನಡಿಗೆ ಗ್ಯಾರಂಟಿ ಅನುಷ್ಠಾನದ ಕಡೆಗೆ ಎಂಬ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.
ಸಿಬ್ಬಂದಿಯಿಂದ ಪರಿಶೀಲನೆ
ಒಂದು ವೇಳೆ ಪರಿಷ್ಕರಣೆ ವೇಳೆ ಆದ ಲೋಪದಿಂದ ರದ್ದಾಗಿದ್ದರೆ ಮತ್ತೇ ಅಂತಹ ಕುಟುಂಬವನ್ನು ಬಿಪಿಎಲ್ ಪಟ್ಟಿಗೆ ಸೇರ್ಪಡೆ ಮಾಡಲಾಗುವುದು. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಬಿಪಿಎಲ್ ಕಾರ್ಡ್ ರದ್ದಾಗಿರುವವರ ಮಾಹಿತಿ ಇದ್ದು, ಅವರು ಅರ್ಹರೋ ಅಥವಾ ಅಲ್ಲವೋ ಎಂಬುದರ ಮಾಹಿತಿ ಸ್ಥಳೀಯ ಮಟ್ಟದಲ್ಲಿ ಗ್ರಾಮ ಪಂಚಾಯಿತಿ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಇರುತ್ತದೆ. ಅಂತಹವರ ಮನೆ ಬಾಗಿಲಿಗೆ ಅಭಿಯಾನದಡಿ ಗ್ಯಾರಂಟಿ ಸಮಿತಿ ಸದಸ್ಯರೊಂದಿಗೆ ಅಧಿಕಾರಿಗಳು ಮತ್ತು ಸಿಬ್ಬಂದಿ ತೆರಳಿ ಪರಿಶೀಲನೆ ನಡೆಸಲಿದ್ದಾರೆ ಎಂದರು.
ಮೈಸೂರು ಜಿಲ್ಲೆಯಲ್ಲಿ 6,91,370 ಬಿಪಿಎಲ್ ಕಾರ್ಡ್‌ದಾರರಿದ್ದು, ಇವರಲ್ಲಿ ತೆರಿಗೆದಾರರು ಮತ್ತು ಸರಕಾರಿ ಅಧಿಕಾರಿಗಳ ಕುಟುಂಬದವರ ಪರಿಷ್ಕರಣೆ ಮಾಡಿದಾಗ 4221 ಬಿಪಿಎಲ್ ಕಾರ್ಡ್‌ದಾರರನ್ನು ಎಪಿಎಲ್‌ಗೆ ಸೇರ್ಪಡೆ ಮಾಡಲಾಗಿದೆ. ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲಾಗದೇ ಬಿಪಿಎಲ್ ಕಾರ್ಡ್ ರದ್ದು ಮಾಡಿ ಬಡವರಿಗೆ ವಂಚನೆ ಮಾಡಲಾಗುತ್ತಿದೆ, ಕಾರ್ಡ್ ರದ್ದು ಮಾಡಲಾಗುತ್ತಿದೆ ಎನ್ನುವ ವಿಪಕ್ಷ ನಾಯಕರ ಆರೋಪಗಳು ಸತ್ಯಕ್ಕೆ ದೂರವಾದವು ಎಂದು ಹೇಳಿದ್ದಾರೆ.
ಗ್ಯಾರಂಟಿ ಯೋಜನೆಗಳಿಗಾಗಿ ರಾಜ್ಯ ಸರ್ಕಾರ 52 ಸಾವಿರ ಕೋಟಿ ರೂಪಾಯಿ ಖರ್ಚು ಮಾಡುತ್ತಿದೆ, ಅಂತಹದ್ದರಲ್ಲಿ ಬಡವರ ಹೊಟ್ಟೆ ತುಂಬಿಸುವ ಅನ್ನಭಾಗ್ಯ ಯೋಜನೆಗೆ ಕತ್ತರಿ ಹಾಕುವ ಕೆಟ್ಟ ಆಲೋಚನೆಯನ್ನು ಕಾಂಗ್ರೆಸ್ ಸರ್ಕಾರ ಮಾಡುವುದಿಲ್ಲ ಎಂದು ಹೇಳಿದರು.
ರಾಜಕೀಯ ಲಾಭ ಪಡೆಯಲು ಬಿಪಿಎಲ್ ಕಾರ್ಡ್ ವಿಚಾರದಲ್ಲಿ ಅಪಪ್ರಚಾರ ಮಾಡುವ ಮೂಲಕ ಜನರ ದಿಕ್ಕು ತಪ್ಪಿಸಲಾಗುತ್ತಿದೆ. ಅರ್ಹರು ಯಾವುದೇ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ, ಅರ್ಹರಿಗೆ ಅನ್ಯಾಯವಗಲೂ ರಾಜ್ಯ ಸರ್ಕಾರ ಬಿಡುವುದಿಲ್ಲ ಎಂದು ಹೇಳಿದರು.












Click it and Unblock the Notifications