Breaking: ಮುಡಾ ಕಚೇರಿ ಮೇಲೆ ಜಾರಿ ನಿರ್ದೇಶನಾಲಯ ದಾಳಿ
ಮೈಸೂರು ಅಕ್ಟೋಬರ್ 18: ಇಡೀ ರಾಜ್ಯದಲ್ಲೇ ದೊಡ್ಡ ಸುದ್ದಿಯಾಗಿದ್ದ ಮುಡಾ ಹಗರಣದ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯ (ಇಡಿ)ದ ಅಧಿಕಾರಿಗಳು ಮೈಸೂರು ಮುಡಾ ಕಚೇರಿ ಮೇಲೆ ದಾಳಿ ಮಾಡಿದ್ದಾರೆ. 20 ಇಡಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ನೀಡಿದ ದೂರಿನ ಆಧಾರದ ಮೇರೆಗೆ ಇಡಿ ದೂರು ದಾಖಲಿಸಿಕೊಂಡಿತ್ತು. ಈ ಪ್ರಕರಣದಲ್ಲಿ ನಾಲ್ಕನೇ ಆರೋಪಿ ದೇವರಾಜು ಮನೆ ಮೇಲೂ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಮುಡಾದಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಹೆಸರೂ ಕೇಳಿ ಬಂದಿದ್ದು, ಪ್ರಸ್ತುತ ಮೈಸೂರು ನಗರಾಭಿವೃದ್ಧಿ ಸಂಸ್ಥೆ ಮುಡಾ ಮೇಲೆ ಜಾರಿ ನಿರ್ದೇಶನಾಲಯ ದಾಳಿ ಭಾರೀ ಸದ್ದು ಮಾಡಿದೆ.

20ಕ್ಕೂ ಹೆಚ್ಚು ಇಡಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದು, ಕಚೇರಿ ಒಳಗೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಿದ್ದಾರೆ. ನಗರದ ತಾಲ್ಲೂಕು ಕಚೇರಿಯಲ್ಲೂ ನಾಲ್ವರು ಇಡಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ ಅಕ್ರಮ ಸೈಟು ಹಂಚಿಕೆ ಪ್ರಕರಣ ಇದಾಗಿದೆ. ಈ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರ ಹೆಸರು ಕೇಳಿಬಂದಿದ್ದು ಸಿಎಂ ಖುರ್ಚಿಗೆ ಕುತ್ತು ತಂದಿದೆ. ಅಲ್ಲದೆ ಇಂದು ಇಡಿ ಅಧಿಕಾರಿಗಳು ಮುಡಾ ಕಚೇರಿ ಮೇಲೆ ದಾಳಿ ಮಾಡಿದ್ದು ಸಿದ್ದರಾಮಯ್ಯ ಅವರ ಸಿಎಂ ಸ್ಥಾನದ ಬಗ್ಗೆ ಆತಂಕ ಹೆಚ್ಚಿಸಿದೆ.
ಮುಡಾದಲ್ಲಿ ಅಕ್ರಮ ನಡೆದಿದೆ ಎಂದು ಸಿದ್ದರಾಮಯ್ಯ ವಿರುದ್ಧ ಸ್ನೇಹಮಯಿ ಕೃಷ್ಣ ದೂರು ದಾಖಲಿಸಿದ ಬೆನ್ನಲ್ಲೆ ಜಾರಿನಿರ್ದೇಶನಾಲಯ ಅಧಿಕಾರಿಗಳು ಮೈಸೂರು ಮುಡಾ ಕಚೇರಿ ಮೇಲೆ ದಾಳಿ ಮಾಡಿದ್ದಾರೆ. ಇಡಿ ಕಚೇರಿಯಲ್ಲಿ ದಾಖಲಾದ ಎಫ್‌ಐಆರ್‌ನಲ್ಲಿ ಸಿಎಂ ಸಿದ್ದರಾಮಯ್ಯ ಮೊದಲ ಆರೋಪಿಯಾಗಿದ್ದಾರೆ. ಇವರೊಂದಿಗೆ ಪತ್ನಿ ಪಾರ್ವತಿ, ಭಾಮೈದ ಮಲ್ಲಿಕಾರ್ಜುನ ಸ್ವಾಮಿ ಹಾಗೂ ಜಮೀನು ಮಾರಾಟ ಮಾಡಿದ್ದ ದೇವರಾಜು ಅವರ ಹೆಸರು ಕೂಡ ಇದೆ. ಇವರನ್ನು ಎಫ್‌ಐಆರ್‌ನಲ್ಲಿ ಪ್ರಮುಖ ಆರೋಪಿಗಳೆಂದು ಉಲ್ಲೇಖಿಸಲಾಗಿದೆ.
ಬೆಂಗಳೂರಿನ ಕೆಂಗೇರಿಯಲ್ಲಿರುವ ಪ್ರಕರಣದ ನಾಲ್ಕನೇ ಆರೋಪಿ ದೇವರಾಜು ಮನೆ ಮೇಲೂ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ದೇವರಾಜು ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಮೈದ ಮಲ್ಲಿಕಾರ್ಜುನಸ್ವಾಮಿಗೆ ಮಾರಾಟ ಮಾಡಿದ್ದಾರೆ ಎನ್ನುವ ಆರೋಪವಿದೆ. ಈ ಹಗರಣದಲ್ಲಿ ದೇವರಾಜು ಅವರ ಪಾತ್ರವಿದೆ ಎಂದು ತಿಳಿದುಬಂದಿದೆ. ಹೀಗಾಗಿ ಅವರ ಮನೆಯ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
ಇನ್ನೂ ಇಡಿ ದಾಳಿ ಬಗ್ಗೆ ದೂರುದಾರ ಸ್ನೇಹಮಯಿ ಕೃಷ್ಣ ಸಂಸತ ವ್ಯಕ್ತಪಡಿಸಿದ್ದಾರೆ. ಇದು ನನ್ನ ಹೋರಾಟಕ್ಕೆ ಸಿಕ್ಕ ಜಯವಾಗಿದೆ. ಇಡಿ ಅಧಿಕಾರಿಗಳು ಪ್ರಕರಣವನ್ನು ಕೈಗೆತ್ತಿಕೊಳ್ಳುವುದಿಲ್ಲ ಎಂದು ಕೆಲವರು ಭಾವಿಸಿದ್ದರು. ಆದರೆ ಈ ಪ್ರಕರಣದ ತನಿಖೆಯ ಭಾಗವಾಗಿ ಇಂದು ಇಡಿ ದಾಳಿ ನಡೆದಿದೆ. ಇದು ನಾನು ಮಾಡಿದ ಹೋರಾಟಕ್ಕೆ ಸಿಕ್ಕ ಜಯವಾಗಿದೆ ಎಂದು ಕೃಷ್ಣ ಸಂತೋಷ ವ್ಯಕ್ತಪಡಿಸಿದ್ದಾರೆ.












Click it and Unblock the Notifications