ಪರಿಸರ ಅಸಮತೋಲನದಿಂದಾಗಿ ಇಡೀ ಜೀವ ಸಂಕುಲದ ಮೇಲೆ ಕೆಟ್ಟ ಪರಿಣಾಮ ಸಚಿವ ಕೆ.ವೆಂಕಟೇಶ್
ಪಿರಿಯಾಪಟ್ಟಣ, ಜೂನ್. 05: ಪರಿಸರದ ಅಸಮತೋಲನದಿಂದಾಗಿ ಇಡೀ ಜೀವ ಸಂಕುಲದ ಮೇಲೆ ಕೆಟ್ಟ ಪರಿಣಾಮ ಉಂಟಾಗುತ್ತಿದೆ. ಆದ್ದರಿಂದ ಪರಿಸರ ಸಂರಕ್ಷಣೆ ಮಾಡುವಲ್ಲಿ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಪಶುಪಾಲನಾ ಹಾಗೂ ರೇಷ್ಮೆ ಖಾತೆ ಸಚಿವ ಕೆ.ವೆಂಕಟೇಶ್ ತಿಳಿಸಿದ್ದಾರೆ. ಪಿರಿಯಾಪಟ್ಟಣದ ತಾಲೂಕು ಪಂಚಾಯಿತಿ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ್ದಾರೆ.
"ಪರಿಸರ ಸಂರಕ್ಷಣೆ ಮಾಡಿದಾಗ ಮಾತ್ರ ಜೀವ ಸಂಕುಲಗಳು ಉಳಿಯಲು ಸಾಧ್ಯ. ಆ ನಿಟ್ಟಿನಲ್ಲಿ ಉತ್ತಮ ವಾತಾವರಣ ನಿರ್ಮಾಣ ಮಾಡಲು ಹೆಚ್ಚು ಹೆಚ್ಚು ಗಿಡಗಳನ್ನು ನೆಟ್ಟು ಹವಾಮಾನದಲ್ಲಿ ಸಮತೋಲನ ತರಲು ಪ್ರಯತ್ನಿಸಬೇಕು. ಪರಿಸರ ಸಂರಕ್ಷಣೆ ಮಾಡುವ ನಿಟ್ಟಿನಲ್ಲಿ ಸರ್ಕಾರ ಸಾಕಷ್ಟು ಕಾರ್ಯಕ್ರಮಗಳನ್ನು ರೂಪಿಸಿದೆ. ಮಾಲಿನ್ಯ ನಿಯಂತ್ರಣ ಮಂಡಳಿ ಸೇರಿದಂತೆ ಹಲವು ನಿಗಮಗಳನ್ನು ಸ್ಥಾಪಿಸಿ ಪರಿಸರ ಸಂರಕ್ಷಣೆ ಮಾಡುವಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ" ಎಂದು ಹೇಳಿದ್ದಾರೆ.

"ಪ್ರಕೃತಿಯಲ್ಲಿನ ಎಲ್ಲಾ ಜೀವ ಸಂಕುಲಗಳಿಗೆ ಗಾಳಿ, ಕುಡಿಯುವ ನೀರು ದೊರೆಯಬೇಕು. ಶಬ್ದ, ವಾಯು ಹಾಗೂ ಜಲ ಮಾಲಿನ್ಯದಿಂದ ದೂರವಿರಲು ಪ್ರತಿಯೊಬ್ಬರೂ ಎಚ್ಚರಿಕೆ ವಹಿಸಬೇಕು. ವಾತಾವರಣದಲ್ಲಿನ ವೈಪರಿತ್ಯದ ಬಗ್ಗೆ ಮುಂದಿನ ಪೀಳಿಗೆಗೆ ಜಾಗೃತಿ ಮೂಡಿಸಬೇಕಿದೆ ಅದಕ್ಕಾಗಿ ಪ್ರತಿಯೊಬ್ಬರಲ್ಲೂ ಪರಿಸರ ಪ್ರಜ್ಞೆ ಮೂಡುವಂತಾಬೇಕು" ಎಂದು ಕಾರ್ಯಕ್ರಮದಲ್ಲಿ ಮಾತನಾಡಿದ್ದಾರೆ.
"ವನ್ಯಜೀವಿಗಳಿಗೆ ಅರಣ್ಯದಲ್ಲಿ ಆಹಾರ ಸಿಗದೆ ಇತ್ತೀಚಿನ ದಿನಗಳಲ್ಲಿ ಕಾಡು ಪ್ರಾಣಿಗಳು ಕಾಡಿನಿಂದ ನಾಡಿಗೆ ಬರುವಂತಾಗಿದೆ. ಇದು ತಪ್ಪಬೇಕು. ಅರಣ್ಯದಲ್ಲಿ ವನ್ಯ ಪ್ರಾಣಿಗಳಿಗೆ ಬೇಕಿರುವ ಆಹಾರ ಗಿಡ ಮರಗಳನ್ನು ಬೆಳೆಸುವಂತಾಗಬೇಕು" ಎಂದು ಹೇಳಿದ್ದಾರೆ. ಗಿಡ ನೆಡುವ ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಕುಂಞ ಅಹಮದ್, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಗಂಗಣ್ಣ, ವಲಯ ಅರಣ್ಯಾಧಿಕಾರಿ ರತನ್ ಕುಮಾರ್, ಸಾಮಾಜಿಕ ಅರಣ್ಯಾಧಿಕಾರಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.











Click it and Unblock the Notifications