Breaking: ಮಾಜಿ ಸಿಎಂ ಸಿದ್ದರಾಮಯ್ಯ ಸಹೋದರ ರಾಮೇಗೌಡ ವಿಧಿವಶ
ಮೈಸೂರು, ಆಗಸ್ಟ್ 26: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರ ಕಿರಿಯ ಸಹೋದರ ರಾಮೇಗೌಡ ವಿಧಿವಶರಾಗಿದ್ದಾರೆ. ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಕಿಡ್ನಿವೈಫಲ್ಯದ ಸಮಸ್ಯೆಯಿಂದ ದಾಖಲಾಗಿದ್ದ ರಾಮೇಗೌಡ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.
ಸಿದ್ದರಾಮಯ್ಯನವರ ಕೊನೆಯ ತಮ್ಮನಾಗಿರುವ ರಾಮೇಗೌಡರಿಗೆ 64 ವರ್ಷ ವಯಸ್ಸಾಗಿತ್ತು. ಕಳೆದ ಕೆಲವು ದಿನಗಳಿಂದಲೂ ಕಿಡ್ನಿವೈಫಲ್ಯದ ಸಮಸ್ಯೆಯಿಂದ ಬಳಲುತ್ತಿದ್ದ ರಾಮೇಗೌಡರು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಗುರುವಾರವಷ್ಟೇ ಮೈಸೂರಿಗೆ ತೆರಳಿದ್ದ ಸಿದ್ದರಾಮಯ್ಯ ಆಸ್ಪತ್ರೆಗೆ ತೆರಳಿ ತಮ್ಮ ಸಹೋದರನ ಆರೋಗ್ಯ ವಿಚಾರಿಸಿದ್ದರು.

ಶುಕ್ರವಾರ ರಾಮೇಗೌಡರ ಆರೋಗ್ಯದಲ್ಲಿ ಏರುಪೇರು ಕಂಡು ಬಂದಿತ್ತು. ಸಂಜೆ ಆರೋಗ್ಯ ಸಮಸ್ಯೆ ಉಲ್ಬಣಿಸುತ್ತಿದ್ದಂತೆ ಹೆಚ್ಚಿನ ನಿಗಾ ವಹಿಸಲಾಗಿತ್ತು. ಆದರೆ ಅಂತಿಮವಾಗಿ ಚಿಕಿತ್ಸೆ ಫಲಕಾರಿಯಾಗದೇ ರಾತ್ರಿ 9 ಗಂಟೆ ಸುಮಾರಿಗೆ ರಾಮೇಗೌಡರು ವಿಧಿವಶರಾಗಿದ್ದಾರೆ ಎಂದು ತಿಳಿದು ಬಂದಿದೆ.
ನಾಳೆ ಅಂತಿಮ ದರ್ಶನಕ್ಕೆ ವ್ಯವಸ್ಥೆ:
ಮೈಸೂರು ಜಿಲ್ಲೆಯ ಸ್ವಗ್ರಾಮ ಸಿದ್ದರಾಮನಹುಂಡಿಯಲ್ಲಿ ಶನಿವಾರ ರಾಮೇಗೌಡರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುತ್ತದೆ. ತದನಂತರ ಸ್ವಗ್ರಾಮದಲ್ಲಿಯೇ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ತಿಳಿದು ಬಂದಿದೆ.











Click it and Unblock the Notifications