Gruha Lakshmi Scheme: 1 ಕೋಟಿ 10 ಲಕ್ಷ ಮಂದಿ ನೋಂದಣಿ: DCM ಡಿ.ಕೆ.ಶಿವಕುಮಾರ್
ಮೈಸೂರು, ಆಗಸ್ಟ್, 24: ಗೃಹಲಕ್ಷ್ಮಿ ಯೋಜನೆ ಇಡೀ ದೇಶದಲ್ಲೇ ದೊಡ್ಡ ಕಾರ್ಯಕ್ರಮವಾಗಿದ್ದು, ಈಗಾಗಲೇ 1.10 ಕೋಟಿ ಮಹಿಳೆಯರು ನೋಂದಣಿ ಮಾಡಿಸಿಕೊಂಡಿದ್ದಾರೆ ಎಂದು ಮಾನ್ಯ ಉಪ ಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು ಮೈಸೂರಿನಲ್ಲಿ ತಿಳಿಸಿದರು.
ಮೈಸೂರು ಮಹಾರಾಜ ಕಾಲೇಜು ಮೈದಾನದಲ್ಲಿ ಕಾರ್ಯಕ್ರಮ ನಡೆಯುವ ಸ್ಥಳ ಪರಿಶೀಲನೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಆಗಸ್ಟ್ 30ರಂದು ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಾಗುವುದು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಪ್ರಮುಖರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿಸಿದರು.

ಅಲ್ಲದೆ ಮೈಸೂರು, ಮಂಡ್ಯ, ಚಾಮರಾಜನಗರ, ಕೊಡಗು, ಹಾಸನ ಜಿಲ್ಲೆಗಳ ಲಾನುಭವಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಇದಕ್ಕಾಗಿ 2 ಸಾವಿರ ಬಸ್‌ಗಳ ವ್ಯವಸ್ಥೆ ಮಾಡಲಾಗುತ್ತದೆ. ಕೆಲ ಲಾನುಭವಿಗಳು ತಮ್ಮ ಅನಿಸಿಕೆಗಳನ್ನು ಹಂಚಿಕೊಳ್ಳಲು ವ್ಯವಸ್ಥೆ ಮಾಡಲಾಗುತ್ತಿದೆ. ರಾಜ್ಯಾದ್ಯಂತ ಏಕಕಾಲಕ್ಕೆ ಕಾರ್ಯಕ್ರಮಕ್ಕೆ ಚಾಲನೆ ಸಿಗಲಿದೆ. ಆನ್‌ಲೈನ್ ಮೂಲಕ ಸಂವಾದಕ್ಕೂ ವ್ಯವಸ್ಥೆ ಮಾಡುತ್ತೇವೆ ಎಂದರು.
ಕಾರ್ಯಕ್ರಮದ ಸ್ಥಳದಲ್ಲಿ ಕುಡಿಯುವ ನೀರು ಹೊರತುಪಡಿಸಿ ಬೇರೆ ಯಾವುದೇ ವ್ಯವಸ್ಥೆ ಇರುವುದಿಲ್ಲ. 140 ಅಡಿ ಸ್ಕ್ರೀನ್ ಅಳವಡಿಸಲಾಗುತ್ತದೆ. ಇದು ಸರ್ಕಾರಿ ಕಾರ್ಯಕ್ರಮ ಆಗಿದ್ದು, ಪಕ್ಷಾತೀತ ಆಗಿರಲಿದೆ. ಎಲ್ಲಾ ಪಕ್ಷಗಳ ಶಾಸಕರು ಕಾರ್ಯಕ್ರಮದಲ್ಲಿ ಭಾಗಿಯಾಗಿಬಹುದು. ಕಾರ್ಯಕ್ರಮ ಸ್ಥಳದಲ್ಲಿ ಒಂದು ಲಕ್ಷ ಚೇರ್ ಅಳವಡಿಸಲಾಗುತ್ತದೆ ಎಂದು ತಿಳಿಸಿದರು.
ಗೃಹಲಕ್ಷ್ಮಿ ಯೋಜನೆಗೆ ಮೈಸೂರಿನಲ್ಲಿ ಚಾಲನೆ ನೀಡಲಿರುವ ಹಿನ್ನೆಲೆಯಲ್ಲಿ ಸಮಾರಂಭ ನಡೆಯುವ ಸ್ಥಳ ಪರಿಶೀಲನೆ ನಡೆಸಿದ ಉಪ ಮುಖ್ಯಮಂತ್ರಿಗಳು ಅಧಿಕಾರಿಗಳು ಯಾವುದೇ ಲೋಪವಾಗದಂತೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಸೂಚಿಸಿದರು.
ಈ ವೇಳೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಕೃಷಿ ಸಚಿವ ಚಲುವರಾಯಸ್ವಾಮಿ, ಶಾಸಕರಾದ ತನ್ವೀರ್ ಸೇಠ್, ನರೇಂದ್ರಸ್ವಾಮಿ, ಅನಿಲ್ ಚಿಕ್ಕಮಾದು, ಹರೀಶ್ ಗೌಡ, ಡಿ. ರವಿಶಂಕರ್, ದರ್ಶನ್ ಧ್ರುವನಾರಾಯಣ್, ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ನಗರ ಪೊಲೀಸ್ ಆಯುಕ್ತರು ಸೇರಿದಂತೆ ಹಲವು ಅಧಿಕಾರಿಗಳ ಉಪಸ್ಧಿತರಿದ್ದರು.
ನಾವು ಆಪರೇಷನ್ ಹಸ್ತ ಮಾಡಿಲ್ಲ
ನಾವು ಆಪರೇಷನ್ ಹಸ್ತ ಮಾಡುತ್ತಿಲ್ಲ. ಅವರಾಗಿ ಅವರೇ ಪಕ್ಷಕ್ಕೆ ಬರುತ್ತೀವಿ ಅಂತಿದ್ದಾರೆ. ಬರುವವರಿಗೆ ಸ್ವಾಗತ ಕೋರುತ್ತಿದ್ದೇವೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮೈಸೂರಿನಲ್ಲಿ ತಿಳಿಸಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು, ನಾವಾಗಿ ನಾವೇ ಯಾರನ್ನೂ ಪಕ್ಷಕ್ಕೆ ಕರೆತರುವ ಪ್ರಯತ್ನ ಮಾಡುತ್ತಿಲ್ಲ. ಅವರ ಭವಿಷ್ಯದ ದೃಷ್ಟಿಯಿಂದ ನಮ್ಮ ಪಕ್ಷದ ವರ್ಚಸ್ಸು ನೋಡಿ ಅವರೇ ನಿರ್ಧಾರ ಮಾಡುತ್ತಿದ್ದಾರೆ. ಎಷ್ಟು ಜನ ಬರ್ತಾರೆ ಎಂಬುದನ್ನು ಈಗಲೇ ನಾನು ಹೇಳಲು ಸಾಧ್ಯವಿಲ್ಲ.
ಎಲ್ಲದಕ್ಕೂ ಕಾಲ, ಸಮಯ ಎಂಬುದು ಇರುತ್ತದೆ. ಆ ಘಳಿಗೆ ಬಂದಾಗ ಎಲ್ಲವೂ ನಡೆಯುತ್ತದೆ ಎಂದರು.
ಜೆಡಿಎಸ್ ಶಾಸಕರನ್ನು ಕಾಂಗ್ರೆಸ್ ಸೆಳೆಯುವ ಪ್ರಯತ್ನ ಆಗಿದೆ ಎಂಬ ವಿಚಾರದ ಬಗ್ಗೆ ಮಾತನಾಡಿದ ಅವರು, ಇಂತಹ ಮಾತುಗಳನ್ನು ನಾನು ಹೇಳುತ್ತಾ ಹೋದರೆ ಅದು ಬಹಳ ದೊಡ್ಡದಾಗುತ್ತದೆ. ಈಗ ಅದರ ಬಗ್ಗೆ ಚರ್ಚೆ ಬೇಡ ಎಂದು ತಿಳಿಸಿದರು.
ಇನ್ನು ಗೃಹಲಕ್ಷ್ಮಿ ಯೋಜನೆ ಬೆಳಗಾವಿಯಿಂದ ಮೈಸೂರಿಗೆ ಶಿಫ್ಟ್ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈ ವಿಚಾರದಲ್ಲಿ ಯಾವ ರಾಜಕೀಯವೂ ಇಲ್ಲ. ಬೆಳಗಾವಿಯಲ್ಲಿ ಮುಂದೆ ಇನ್ನೊಂದು ಕಾರ್ಯಕ್ರಮ ಮಾಡಲು ಪ್ಲಾನ್ ಮಾಡಿದ್ದೇವೆ. ಅಲ್ಲಿ ಎಲ್ಲರದ್ದೂ ಒಮ್ಮತದ ತೀರ್ಮಾನಗಳಿವೆ ಎಂದರು.
ಬೆಳಗಾವಿಯಲ್ಲಿ ನಾವು ಎರಡು ಲೋಕಸಭಾ ಕ್ಷೇತ್ರ ಗೆಲ್ಲುತ್ತೇವೆ. ಮೈಸೂರಿನಲ್ಲಿ ಅನ್ನ ಭಾಗ್ಯ ಮಾಡುವ ಪ್ಲಾನ್ ಇತ್ತು. ಅಕ್ಕಿ ವಿಚಾರದಲ್ಲಿ ಇನ್ನೊಂದಿಷ್ಟು ಅಡೆತಡೆ ಇದೆ. ಹೀಗಾಗಿ ಗೃಹಲಕ್ಷ್ಮಿಯನ್ನು ಇಲ್ಲಿಂದ ಆರಂಭಿಸುತ್ತಿದ್ದೇವೆ. ಹಾಗೆಯೇ ಬೆಂಗಳೂರಿನಲ್ಲೂ ಕಾರ್ಯಕ್ರಮ ಮಾಡುವ ಯೋಚನೆ ಮಾಡಿದ್ದೇವೆ. ಇನ್ನು ಟ್ರಾಫಿಕ್ ಸಮಸ್ಯೆ ಉಂಟಾಗುತ್ತದೆ ಎಂದು ಮೈಸೂರಿಗೆ ಶಿಫ್ಟ್ ಮಾಡಿದ್ದೇವೆ ಎಂದರು.
ಆಗಸ್ಟ್ 30ರಂದು ಒಂದು ಬಟನ್ ಅದುಮಿದ ಕೂಡಲೇ ಎಲ್ಲಾ ಫಲಾನುಭವಿಗಳಿಗೂ ಹಣ ಸಂದಾಯವಾಗುತ್ತದೆ. ಅದರ ಮೇಸಜ್ ಅವರ ಫೋನ್‌ಗಳಿಗೆ ಬರುತ್ತದೆ. ಎಲ್ಲಾ ಹಣದ ವ್ಯವಸ್ಥೆಯನ್ನು ಬ್ಯಾಂಕ್‌ಗಳಿಗೆ ಮಾಡಿದ್ದೇವೆ. ನಮಗೆ ಹಣದ ಕೊರತೆ ಇಲ್ಲ. ಸರ್ವರ್ ಸಮಸ್ಯೆ ಆದರೆ ಒಂದಿಷ್ಟು ಜನರಿಗೆ ಹಣ ಬರುವುದು ತಡವಾಗಬಹುದು ಅಷ್ಟೇ ಎಂದರು.












Click it and Unblock the Notifications