Darshan Arrest: ರೇಣುಕಾಸ್ವಾಮಿ ಕೊಲೆ ಪ್ರಕರಣ ತನಿಖೆಗೆ ಆರೋಗ್ಯ ಇಲಾಖೆ ಸಹಕಾರ; ದಿನೇಶ್ ಗುಂಡೂರಾವ್
ರೇಣುಕಾಸ್ವಾಮಿ ಹತ್ಯೆ ಪ್ರಕರಣದ ವೈದ್ಯಕೀಯ ವರದಿ ತಿರುಚಲು ಒತ್ತಡ ಹೇರಿರುವುದು ನನಗೆ ತಿಳಿದಿಲ್ಲ. ಆರೋಗ್ಯ ಇಲಾಖೆಯಾಗಲಿ ಅಥವಾ ವೈದ್ಯಕೀಯ ಶಿಕ್ಷಣ ಇಲಾಖೆಯಾಗಲಿ ಎಲ್ಲರೂ ಪೊಲೀಸರ ತನಿಖೆಗೆ ಸಂಪೂರ್ಣ ಸಹಕಾರ ನೀಡುತ್ತಿದ್ದಾರೆ. ಸರಕಾರ ಹಸ್ತಕ್ಷೇಪ ಮಾಡಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮಾಜದಲ್ಲಿ ಇಂತಹ ಘಟನೆಗಳು ನಡೆಯಬಾರದು. ಪ್ರಕರಣದಲ್ಲಿ ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ. ಕೋಪದಲ್ಲಿ ಇಂತಹ ಘಟನೆಗಳು ನಡೆಯುತ್ತವೆ. ಸಹನೆ, ಸಹಿಷ್ಣುತೆ ಮೀರಿದ ಈ ರೀತಿಯ ವರ್ತನೆ ಸಮಾಜಕ್ಕೆ ಒಳ್ಳೆಯದಲ್ಲ ಎಂದರು.

ಪೆಟ್ರೋಲ್ ಬೆಲೆ ಏರಿಕೆಗೆ ಸಮರ್ಥನೆ
ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೂ, ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಗೂ ಸಂಬಂಧವಿಲ್ಲ. ಬೇರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕ ರಾಜ್ಯದಲ್ಲಿ ಬೆಲೆ ಕಡಿಮೆ ಇದೆ. ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಕೋಟ್ಯಂತರ ರೂಪಾಯಿ ಖರ್ಚಾಗುತ್ತದೆ. ಮಹಿಳಾ ಸಬಲೀಕರಣಕ್ಕೆ ಸಂಬಂಧಿಸಿದ ಈ ಗ್ಯಾರಂಟಿಗಳಿಂದ ಜನರಿಗೆ ಅನುಕೂಲವಾಗುತ್ತಿದೆ. ಈ ಖರ್ಚಿಗೆ ಬೇಕಾದ ಹಣವನ್ನು ಹೊಂದಿಸುವುದು ಸರಕಾರದ ಜವಾಬ್ದಾರಿಯಾಗಿದೆ ಎಂದು ಸಮರ್ಥಿಸಿಕೊಂಡರು.
ಹೆಣ್ಣು ಭ್ರೂಣ ಹತ್ಯೆ ವಿಚಾರದಲ್ಲಿ ನಮ್ಮ ಇಲಾಖೆ ಹಾಗೂ ಪೊಲೀಸ್ ಇಲಾಖೆಯು ತಪ್ಪಿತಸ್ಥರನ್ನು ಪತ್ತೆ ಮಾಡುತ್ತದೆ. ನ್ಯಾಯಾಲಯ ಅವರಿಗೆ ಶಿಕ್ಷೆ ನೀಡುತ್ತದೆ. ಇದರಲ್ಲಿ ಯಾವುದೇ ರಾಜಿ ಇಲ್ಲ ಎಂದರು.
ಜಿಲ್ಲೆಯಲ್ಲಿ ಸರಕಾರಿ ಆಸ್ಪತ್ರೆಯಲ್ಲಿ ಹೆರಿಗೆಯಾಗುವ ಪ್ರಮಾಣ ಹೆಚ್ಚಾಗಿದೆ. ತಾಯಿ, ಮಕ್ಕಳ ಸುರಕ್ಷತೆ ಕಾರಣಕ್ಕೆ ಆಸ್ಪತ್ರೆಯಲ್ಲಿ ಹೆರಿಗೆ ಮಾಡಿಸುವ ಪ್ರಮಾಣ ಹೆಚ್ಚಾಗಬೇಕಿದೆ. ಈ ನಿಟ್ಟಿನಲ್ಲಿ ಕೆಲ ತಿಂಗಳ ಹಿಂದೆ ಜಿಲ್ಲೆಯ ಸರಕಾರಿ ಆಸ್ಪತ್ರೆಗಳಲ್ಲಿ ತಿಂಗಳಿಗೆ 800 ರಿಂದ 900 ಹೆರಿಗೆಯಾಗುತ್ತಿತ್ತು. ಇದೀಗ ಈ ಸಂಖ್ಯೆ 1800 ರಿಂದ 2000ಕ್ಕೆ ಏರಿಕೆಯಾಗಿದೆ. ಇದು ಉತ್ತಮ ಬೆಳವಣಿಗೆ ಎಂದರು.












Click it and Unblock the Notifications