Nikhil Kumaraswamy: ಕಾಂಗ್ರೆಸ್ ಭ್ರಷ್ಟಾಚಾರದ ವಿರುದ್ಧ ಮೈತ್ರಿ ಹೋರಾಟ ನಿರಂತರ; ನಿಖಿಲ್ ಕುಮಾರಸ್ವಾಮಿ
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಸದನದ ಒಳಗೆ ಹಾಗೂ ಹೊರಗೆ ಗಟ್ಟಿಯಾಗಿ ಧ್ವನಿ ಎತ್ತಿದ್ದು, ಮೈತ್ರಿ ಪಕ್ಷಗಳ ಹೋರಾಟ ಮುಂದುವರಿಸಲಾಗುವುದು ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು. ಮೈಸೂರಿನಲ್ಲಿ ಜೆಡಿಎಸ್ ಸದಸ್ಯತ್ವ ನೋಂದಣಿ ಅಭಿಯಾನದಲ್ಲಿ ಭಾಗವಹಿಸಿದ್ದ ಅವರು, ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟ ನಿರಂತರವಾಗಿರುತ್ತದೆ ಎಂದು ಸೂಚನೆ ಕೊಟ್ಟಿದ್ದಾರೆ.
ಜೆಡಿಎಸ್ ನಗರ ಹಾಗೂ ಜಿಲ್ಲಾ ಘಟಕ ವತಿಯಿಂದ ನಗರದಲ್ಲಿ ಬುಧವಾರ ನಡೆದ ಜೆಡಿಎಸ್ ಸದಸ್ಯತ್ವ ನೋಂದಣಿ ಅಭಿಯಾನದಲ್ಲಿ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ಮಾಜಿ ಪ್ರಧಾನಿ ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕೇವಲ ಒಂದು ಸಮುದಾಯದ ಅಭಿವೃದ್ಧಿಗೆ ಯೋಜನೆಗಳನ್ನು ಜಾರಿ ಮಾಡಿಲ್ಲ. ಎಚ್.ಡಿ.ದೇವೇಗೌಡರು ತಮ್ಮ ರಾಜಕೀಯ ಜೀವನದಲ್ಲಿ ಎಂದಿಗೂ ಬಿಜೆಪಿಯೊಂದಿಗೆ ಕೈಜೋಡಿಸಿರಲಿಲ್ಲ. ಆದರೆ, ನರೇಂದ್ರ ಮೋದಿ ಅವರು ದೇಶವನ್ನು ಮುನ್ನಡೆಸಲು ದೇವೇಗೌಡರ ಸಲಹೆಗಳನ್ನು ಪಡೆದಿದ್ದು, ಈ ಆತ್ಮೀಯತೆಯಿಂದ ಜೆಡಿಎಸ್-ಬಿಜೆಪಿಯೊಂದಿಗೆ ಕೈ ಜೋಡಿಸಿದೆ ಎಂದರು.

ಚನ್ನಪಟ್ಟಣದಲ್ಲಿ ಯಾರು ಸ್ಪರ್ಧೆ?
ಮಂಡ್ಯದ ಜನ ಪ್ರಬುದ್ಧರಾಗಿದ್ದು, ಎಲ್ಲವನ್ನೂ ಗಮನಿಸುತ್ತಿದ್ದಾರೆ. ಹಗರಣದಲ್ಲಿ ಮುಳುಗಿರುವ ಕಾಂಗ್ರೆಸ್ ಸರ್ಕಾರ, ತಮ್ಮ ಅಕ್ರಮವನ್ನು ಮುಚ್ಚಿಕೊಳ್ಳಲು ಈ ರೀತಿಯ ಗಲಾಟೆ ಇತ್ಯಾದಿಗಳನ್ನು ನಡೆಸುತ್ತಿದೆ. ಚನ್ನಪಟ್ಟಣ ಉಪ ಚುನಾವಣೆಗೆ ಸಂಬಂಧಿಸಿದಂತೆ ಎನ್‌ಡಿಎ ಅಭ್ಯರ್ಥಿ ಕಣಕ್ಕಿಳಿಯುತ್ತಾರೋ, ನಾನೇ ನಿಲ್ಲುತ್ತೇನೋ ಎಂಬ ಪ್ರಶ್ನೆಗೆ ಸದ್ಯಕ್ಕೆ ಉತ್ತರವಿಲ್ಲ. ಇನ್ನೂ ಚುನಾವಣೆ ದಿನಾಂಕ ಪ್ರಕಟ ಆಗಿಲ್ಲ. ಕಾರ್ಯಕರ್ತರ ಭಾವನೆಗೆ ತಕ್ಕಂತೆ ಕೆಲಸ ಮಾಡುತ್ತೇವೆ ಎಂದರು.
ಮಾಜಿ ಸಚಿವ ಸಾ.ರಾ. ಮಹೇಶ್ ಮಾತನಾಡಿ, ಪಕ್ಷದ ಸಂಘಟನೆಗೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಮಯ ನೀಡಬೇಕು. ಸಕ್ರಿಯವಾಗಿ ಪಕ್ಷದ ಸಂಘಟನೆಯಲ್ಲಿ ತೊಡಗಿರುವವರನ್ನು ಪಕ್ಷ ಗುರುತಿಸುವ ಕಾರ್ಯ ಮಾಡಲಿದೆ ಎಂದರು.
ಪಕ್ಷವನ್ನು ತಳಮಟ್ಟದಿಂದ ಕಟ್ಟುವ ನಿಟ್ಟಿನಲ್ಲಿ ಇದೊಂದು ಮಹತ್ವದ ನಿರ್ಧಾರವಾಗಿದೆ.ಇವತ್ತು ಬೂತ್ ಮಟ್ಟದಲ್ಲಿ ಪಕ್ಷವನ್ನ ಕಟ್ಟಬೇಕು, ಪಕ್ಷದ ಕಟ್ಟ ಕಡೆಯ ಕಾರ್ಯಕರ್ತರನ್ನ ಗುರುತಿಸುವ ಪ್ರಾಮಾಣಿಕ ಕೆಲಸ ಮಾಡುತ್ತೇನೆ ಎಂದು ಭರವಸೆ ನೀಡಿದರು.
ಜೆಡಿಎಸ್ ಪಕ್ಷದ ಸದಸ್ಯತ್ವ ನೊಂದಣಿ ಮತ್ತು ಬೂತ್ ಮಟ್ಟದ ಸಮಿತಿ ರಚನೆ ಆಗಬೇಕು ಎಂದು ಮಾಜಿ ಪ್ರಧಾನಿ ದೇವೇಗೌಡರು ಕರೆ ಕೊಟ್ಟಿದ್ದರು. ಇವತ್ತು ರಾಜ್ಯದಲ್ಲಿ ಪ್ರತಿ ಸಮಾಜವನ್ನು ಒಗ್ಗೂಡಿಸಿ ಎಲ್ಲಾ ಸಮುದಾಯಕ್ಕೂ ದೇವೇಗೌಡರು ಕೊಡುಗೆ ನೀಡಿದ್ದಾರೆ ಎಂದರು.












Click it and Unblock the Notifications