ವರುಣಾಕ್ಕೆ ಹೊಸ ಅಭ್ಯರ್ಥಿ ಘೋಷಣೆ ಮಾಡಲಿದೆ ಜೆಡಿಎಸ್, ಇಲ್ಲಿದೆ ವಿವರ
ಮೈಸೂರು, ಏಪ್ರಿಲ್ 11: ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನು ಒಂದು ತಿಂಗಳಷ್ಟೇ ಬಾಕಿ ಇದೆ. ವರುಣ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕಣಕ್ಕಿಳಿಯುವುದಾಗಿ ಘೋಷಣೆಯಾದಂತೆ ಈಗ ಅವರ ವಿರುದ್ಧ ಪ್ರಬಲ ಅಭ್ಯರ್ಥಿಗಳನ್ನು ನಿಲ್ಲಿಸಲು ಜೆಡಿಎಸ್ ಹಾಗೂ ಬಿಜೆಪಿ ಪ್ರಬಲ ಅಭ್ಯರ್ಥಿಗಳ ಹುಡಕಾಟ ಮುಂದುವರೆಸಿವೆ.
ಈ ನಿಟ್ಟಿನಲ್ಲಿ ವರುಣಾ ಕ್ಷೇತ್ರದಲ್ಲಿ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ಜೆಡಿಎಸ್ ಹೊಸ ಅಭ್ಯರ್ಥಿಯನ್ನು ಘೋಷಿಸಲಿದೆ ಎಂದು ಜೆಡಿಎಸ್‌ನ ಶಾಸಕಾಂಗ ನಾಯಕ ಎಚ್‌ಡಿ ಕುಮಾರಸ್ವಾಮಿ ಸೋಮವಾರ ಹೇಳಿದ್ದಾರೆ.

ವರುಣಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಅಭಿಷೇಕ್ ಅವರು ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸ್ಪರ್ಧಿಸಲು ಉತ್ಸುಕರಾಗಿಲ್ಲ ಎಂದು ಹೇಳಲಾಗುತ್ತಿದೆ. ಅವರು ಸ್ಪರ್ಧೆಯಿಂದ ಹಿಂದೆ ಸರಿದರೆ ನಾವು ಹೊಸ ಅಭ್ಯರ್ಥಿಯನ್ನು ಆಯ್ಕೆ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಮುಳಬಾಗಿಲು ತಾಲ್ಲೂಕಿನ ಶಿಣಿಗೇನಹಳ್ಳಿಯಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಜೆಡಿಎಸ್ ಪಕ್ಷದ ಎರಡನೇ ಪಟ್ಟಿ ಸಿದ್ಧವಾಗಿದ್ದು, ಇನ್ನೆರಡು ದಿನಗಳಲ್ಲಿ ಬಿಡುಗಡೆ ಮಾಡಲಾಗುವುದು. ಜೆಡಿಎಸ್ ಹಾಸನ ಟಿಕೆಟ್ ವಿಚಾರದಲ್ಲಿ ಉಂಟಾಗಿರುವ ಗೊಂದಲವನ್ನು ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳಲಿದೆ. ಜೆಡಿಎಸ್‌ನ ಪಕ್ಷದ ಪಂಚರತ್ನ ಯಾತ್ರೆಯ ಯಶಸ್ಸು ವಿರೋಧಿಗಳನ್ನು ರೊಚ್ಚಿಗೆಬ್ಬಿಸಿದೆ ಎಂದು ಅವರು ಹೇಳಿದ್ದಾರೆ.
ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ದಿವಂಗತ ಧ್ರುವನಾರಾಯಣ್ ಅವರ ಪುತ್ರ ದರ್ಶನ್ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ನಂಜನಗೂಡಿನಿಂದ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕೇ ಅಥವಾ ಬೇಡವೇ ಎಂಬ ಬಗ್ಗೆ ಪಕ್ಷವು ಚರ್ಚೆ ನಡೆಸಲಿದೆ. ತಂದೆ ತೀರಿಕೊಂಡ ಕೆಲವೇ ದಿನಗಳಲ್ಲಿ ದರ್ಶನ್ ತಾಯಿಯನ್ನು ಕಳೆದುಕೊಂಡಿದ್ದಾರೆ. ನಂದಿನಿ ಬ್ರಾಂಡ್ ಅನ್ನು ನಾಶಪಡಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಅವರು ತಮ್ಮ ಆರೋಪವನ್ನು ಪುನರುಚ್ಚರಿಸಿದರು. ನಂದಿನಿಯ ಮೇಲೆ ಅಮುಲ್ ಬೀರುವ ಋಣಾತ್ಮಕ ಪರಿಣಾಮ ಬಿಜೆಪಿಯವರಿಗೆ ತಿಳಿದಿಲ್ಲ. ಎಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳದಿದ್ದರೆ ನಂದಿನಿ ಬ್ರಾಂಡ್ ನಾಶವಾಗಲಿದೆ ಎಂದು ಕುಮಾರಸ್ವಾಮಿ ಹೇಳಿದರು.

ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಅವರ ಸ್ಪರ್ಧೆ ಹಿನ್ನೆಲೆ ಬಿಜೆಪಿಯೂ ಕೂಡ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಅಭ್ಯರ್ಥಿಗಳನ್ನು ಹುಡುಕಾಡುತ್ತಿದೆ. ಈ ಹಿಂದೆ ಬಿಎಸ್ ಯಡಿಯೂರಪ್ಪ ಅವರ ಮಗ ಬಿವೈ ವಿಜಯೇಂದ್ರ ಅವರನ್ನು ಕಣಕ್ಕಿಳಿಸಲು ಮುಂದಾಗಿತ್ತು, ಆದರೆ ವರುಣಾದಲ್ಲಿ ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಗೆಲ್ಲುವ ಅವಕಾಶಗಳು ಕಡಿಮೆ ಎಂದು ಕಂಡು ಬಂದ ಹಿನ್ನೆಲೆಯಲ್ಲಿ ಈ ನಿರ್ಧಾರವನ್ನು ಹಿಂತೆಗೆದುಕೊಳ್ಳಲಾಯಿತು.
ಹಾಗೆಯೇ ಸಿದ್ದರಾಮಯ್ಯ ವಿರುದ್ಧ ಮತ್ತೊಂದು ಸುತ್ತಿನ ಚರ್ಚೆಯಂತೆ ಮಾಜಿ ಸಚಿವ ವಿ ಸೋಮಣ್ಣ ಅವರನ್ನು ಕಣಕ್ಕಿಳಿಸಲಾಗುವುದು ಎಂದು ತಿಳಿಸಲಾಗಿತ್ತು. ಲಿಂಗಾಯತ ಸಮುದಾಯದ ಮತಗಳು ಹೆಚ್ಚಾಗಿರುವ ವರುಣಾದಲ್ಲಿ ಅದೇ ಸಮುದಾಯಕ್ಕೆ ಸೇರಿದ ಸೋಮಣ್ಣ ಅವರನ್ನು ಕಣಕ್ಕಿಳಿಸುವುದರಿಂದ ಸಿದ್ದರಾಮಯ್ಯ ಅವರನ್ನು ಸೋಲಿಸಲಬಹುದು ಎಂದು ಅಂದಾಜಿಸಲಾಗಿತ್ತು. ಇದಕ್ಕೆ ಮಾಜಿ ಸಿಎಂ ಯಡಿಯೂರಪ್ಪ ಅವರ ಶಿಫಾರಸ್ಸು ಕೂಡ ಆಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಕೂಡ ಓಕೆ ಎಂದಿದ್ದರು. ಕೊನೆಗೆ ಈ ಮಾತುಕತೆ ಸದ್ಯ ತಣ್ಣಗಾಗಿದೆ.
ಆದರೆ ವಿ ಸೋಮಣ್ಣ ಅವರು ತಮ್ಮ ಗೆಲುವಿನ ಕ್ಷೇತ್ರ ಬೆಂಗಳೂರಿನ ಗೋವಿಂದರಾಜನಗರ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂದು ಹೇಳಾಲಾಗುತ್ತಿದೆ. ಅಲ್ಲದೆ ಅವರ ಮಗ ಅರುಣ್ ಸೋಮಣ್ಣ ಅವರಿಗೆ ಟಿಕೆಟ್ ಕೊಡಿಸಲು ಮುಂದಾಗಿರುವ ಅವರು ಇತ್ತೀಚೆಗೆ ತುಮಕೂರಿನ ಸಿದ್ದಗಂಗಾ ಮಠಕ್ಕೂ ಭೇಟಿ ನೀಡಿದ್ದರು. ಸೋಮಣ್ಣ ಅವರು ತಮ್ಮ ಮಗ ಅರುಣ್‌ಗೆ ತುಮಕೂರು ಜಿಲ್ಲೆಯ ಗುಬ್ಬಿ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಸಲು ಮುಂದಾಗಿದ್ದಾರೆ ಎಂಬ ಮಾತುಗಳು ಕೇಳಿ ಬಂದಿವೆ.
ಈ ಹಿನ್ನೆಲೆ ಸದ್ಯಕ್ಕೆ ವರುಣಾದಲ್ಲಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಬಲ ಅಭ್ಯರ್ಥಿ ಯಾರು ಎಂಬ ಬಗ್ಗೆ ಕುತೂಹಲ ಇದ್ದೇ ಇದೆ. ಈ ನಿಟ್ಟಿನಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಭಾರಿ ತಲೆಕೆಡಿಸಿಕೊಂಡಿವೆ. ಇದಲ್ಲದೆ ಸಿದ್ದರಾಮಯ್ಯ ಅವರು ವರುಣಾ ಮಾತ್ರವಲ್ಲದೆ ಕೋಲಾರದಿಂದಲೂ ಸ್ಪರ್ಧಿಸುತ್ತಾರೆ ಎಂದು ಹೇಳಾಲಾಗುತ್ತಿದೆ. ವರುಣಾದಲ್ಲಿ ಯಾವುದಾದರೂ ಪಕ್ಷದಿಂದ ಪ್ರಬಲ ಅಭ್ಯರ್ಥಿ ಕಣಕ್ಕಿಳಿದರೆ ಕೋಲಾರದಲ್ಲಿ ಗೆಲ್ಲಬಹುದು ಎಂಬುದು ಅವರ ಲೆಕ್ಕಾಚಾರವಿದ್ದಂತ್ತಿದೆ.












Click it and Unblock the Notifications