DK Shivkumar: ಡಿ.ಕೆ. ಶಿವಕುಮಾರ್ ವರುಣಾ ಪ್ರವಾಸ ರದ್ದು; ಸಿದ್ದರಾಮಯ್ಯಗೆ ಕೈಕೊಟ್ಟರಾ ಡಿಕೆಶಿ?
ಮೈಸೂರು, ಮೇ 3: 2023ರ ಕರ್ನಾಟಕ ವಿಧಾನಸಭಾ ಚುನಾವಣೆ ಮೇ 10 ನಡೆಯಲಿದ್ದು, ಮತದಾನ ದಿನಾಂಕ ಸಮೀಪಿಸುತ್ತಿದ್ದಂತೆ ರಾಜಕೀಯ ನಾಯಕರು ಫುಲ್ ಆ್ಯಕ್ಟೀವ್ ಆಗಿದ್ದಾರೆ. ಪ್ರಚಾರದ ಮೂಲಕ ಪ್ರತಿ ಮತದಾರನ ತಲುಪಲು ಯತ್ನಿಸುತ್ತಿದ್ದಾರೆ.
ತಮ್ಮ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಲು ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ನಾಯಕರು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ರಾಜ್ಯ ನಾಯಕರೊಂದಿಗೆ ರಾಷ್ಟ್ರೀಯ ನಾಯಕರೂ ಕರುನಾಡ ಚುನಾವಣಾ ಕುರುಕ್ಷೇತ್ರದ ಅಖಾಡಕ್ಕೆ ಧುಮುಕಿದ್ದಾರೆ.

ಇನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಕನಕಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದು, ಇದರ ಜೊತೆಗೆ ಬೇರೆ ಕ್ಷೇತ್ರಗಳಲ್ಲಿಯೂ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸುತ್ತಿದ್ದಾರೆ. ಇದೇ ವೇಳೆ ಇಂದು (ಮೇ 3) ವರುಣಾ ಕ್ಷೇತ್ರದ ಪ್ರವಾಸವನ್ನು ರದ್ದು ಮಾಡಿದ್ದಾರೆ.
ಬುಧವಾರ ಮಧ್ಯಾಹ್ನ 2 ಗಂಟೆಗೆ ವರುಣಾದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವರುಣಾ ಕ್ಷೇತ್ರದಲ್ಲಿ ಪ್ರಚಾರ ನಡೆಸಬೇಕಿತ್ತು. ಆದರೆ, ವರುಣಾ ಹೊರತುಪಡಿಸಿ ಮೈಸೂರು ಜಿಲ್ಲೆಯ ಉಳಿದ ಕಡೆ ಪ್ರಚಾರ ನಡೆಸಲಿದ್ದಾರೆ. ಸಿದ್ದರಾಮಯ್ಯಗೆ ಡಿ.ಕೆ. ಶಿವಕುಮಾರ್ ಕೈಕೊಟ್ಟರಾ ಎಂಬ ಅನುಮಾನ ಮೂಡಿದೆ.
ಬುಧವಾರ ಮಧ್ಯಾಹ್ನ 12 ಗಂಟೆಗೆ ನಂಜನಗೂಡಿಗೆ ಆಗಮಿಸಲಿರುವ ಡಿ.ಕೆ. ಶಿವಕುಮಾರ್ ಅವರು ಕ್ಷೇತ್ರದಲ್ಲಿ ದಿ. ಧ್ರುವನಾರಾಯಣ ಪುತ್ರ ಹಾಗೂ ಕಾಂಗ್ರೆಸ್ ಅಭ್ಯರ್ಥಿ ದರ್ಶನ್ ಧ್ರುನಾರಾಯಣ ಪರ ಮತಯಾಚಿಸಲಿದ್ದಾರೆ. ಸಂಜೆ 5:30ಕ್ಕೆ ಮೈಸೂರು ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ.

ಸಿದ್ದರಾಮಯ್ಯಗೆ ಕೈಕೊಟ್ಟರಾ ಡಿಕೆಶಿ
ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಬಹುಮತ ಪಡೆದು ಅಧಿಕಾರಕ್ಕೇರುವ ಕನಸು ಕಾಣುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ನಡುವಿನ ಮುಸುಕಿನ ಗುದ್ದಾಟ ಕಾಂಗ್ರೆಸ್ ಪಕ್ಷಕ್ಕೆ ತಲೆನೋವಾಗಿ ಪರಿಣಮಿಸಿದೆ.
ಕಾಂಗ್ರೆಸ್‌ನ ಈ ಇಬ್ಬರು ನಾಯಕರು ಮುಖ್ಯಮಂತ್ರಿ ಹುದ್ದೆಯ ಪ್ರಬಲ ಆಕಾಂಕ್ಷಿಗಳಾಗಿದ್ದಾರೆ. ಅವಕಾಶ ಸಿಕ್ಕಾಗಲೆಲ್ಲ ತಾನೂ ಮುಖಮಂತ್ರಿ ಹುದ್ದೆಯ ಆಕಾಂಕ್ಷಿ ಎಂದು ಹೇಳಿದ್ದಾರೆ. ಆದರೆ, ಅಧಿಕಾರಕ್ಕೆ ಯಾರು ಸಿಎಂ ಹುದ್ದೆ ಅಲಂಕರಿಸಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ.
ಇದೇ ಕೊನೆಯ ಚುನಾವಣೆ ಎಂದು ಸ್ಪರ್ಧಿಸಿರುವ ಸಿದ್ದರಾಮಯ್ಯಗೆ ಈ ಬಾರಿಯ ಗೆಲುವು ಅಷ್ಟೇನೂ ಸುಲಭವಿಲ್ಲ. ಏಕೆಂದರೆ, ವರುಣಾ ಕ್ಷೇತ್ರದಲ್ಲಿ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ ವಿ. ಸೋಮಣ್ಣ ಪ್ರಬಲ ಪೈಪೋಟಿ ಒಡ್ಡಿದ್ದಾರೆ. ಇದು ಸಿದ್ದರಾಮಯ್ಯನನ್ನು ಕಟ್ಟಿಹಾಕಿದಂತಾಗಿದೆ.

ವರುಣಾ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸಿದ ನಂತರ ಮಾತನಾಡಿದ್ದ ಸಿದ್ದರಾಮಯ್ಯ, ಒಂದು ಬಾರಿ ಮಾತ್ರ ವರುಣಾದಲ್ಲಿ ಪ್ರಚಾರ ಮಾಡುತ್ತೇನೆ ಎಂದಿದ್ದರು. ಆದರೆ, ವಿ. ಸೋಮಣ್ಣ ಸ್ಪರ್ಧೆಯ ನಂತರ ನಾಲ್ಕೈದು ಬಾರಿ ವರುಣಾದಲ್ಲಿ ಸಿದ್ದರಾಮಯ್ಯ ಪ್ರಚಾರ ಮಾಡಿದ್ದಾರೆ.
ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯನವರ ಸೋಲು ಡಿ.ಕೆ. ಶಿವಕುಮಾರ್ ಅವರ ಮುಖ್ಯಮಂತ್ರಿ ಹುದ್ದೆಯ ಆಸೆಗೆ ಇನ್ನಷ್ಟು ಶಕ್ತಿ ತುಂಬಲಿದೆ. ಒಂದು ವೇಳೆ ಸಿದ್ದರಾಮಯ್ಯ ಗೆದ್ದರೆ, ಈ ಬಾರಿಯೂ ಡಿ.ಕೆ. ಶಿವಕುಮಾರ್ ಸಿಎಂ ಆಗುವ ತನ್ನ ಆಸೆಯನ್ನು ಕೈಬಿಡಬೇಕಾಗುತ್ತದೆ.
ಲಿಂಗಾಯತ ಮತ್ತು ಒಕ್ಕಲಿಗರ ಪ್ರಾಬಲ್ಯವಿರುವ ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಸೋಲಿಗೆ ಕೆಲವು ನಾಯಕರೇ ಪರೋಕ್ಷವಾಗಿ ಬಿಜೆಪಿ ಬೆಂಬಲ ನೀಡುತ್ತಿದ್ದಾರೆ ಎಂಬ ಮಾತೂ ಕೇಳಿ ಬರುತ್ತಿದೆ. ಹೀಗಾಗಿಯೇ ವರುಣಾದಲ್ಲಿ ಪ್ರಚಾರ ಮಾಡಲು ಡಿ.ಕೆ. ಶಿವಕುಮಾರ್ ಹಿಂದೇಟು ಹಾಕುತ್ತಿದ್ದಾರೆಯೇ ಎಂಬ ಪ್ರಶ್ನೆ ಉದ್ಭವಿಸಿದೆ.
2023ರ ಕರ್ನಾಟಕ ವಿಧಾನಸಭೆ ಚುನಾವಣೆಗೆ ಈಗಾಗಲೇ ನಾಮಪತ್ರ ಸಲ್ಲಿಕೆ, ಪರಿಶೀಲನೆ ಮತ್ತು ನಾಮಪತ್ರ ವಾಪಸ್ ಪ್ರಕ್ರಿಯೆ ಕೊನೆಗೊಂಡಿದೆ. ಮೇ 10ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದರೆ, ಮೇ 13ರಂದು ಫಲಿತಾಂಶ ಪ್ರಕಟವಾಗಲಿದ್ದು, ಬಳಿಕ ಯಾವ ಪಕ್ಷ ರಾಜ್ಯದಲ್ಲಿ ಸರ್ಕಾರ ರಚಿಸಲಿದೆ ಎಂಬ ಕುತೂಹಲ ಮೂಡಿದೆ.












Click it and Unblock the Notifications