ನೀತಿ ಸಂಹಿತೆ ಜಾರಿಯಾಗುತ್ತಲೇ ಸರ್ಕಾರಿ ಕಾರು ತೊರೆದ ಸಿದ್ದರಾಮಯ್ಯ
ಮೈಸೂರು, ಮಾರ್ಚ್ 29: ಕರ್ನಾಟಕ ವಿಧಾನಸಭಾ ಚುನಾವಣೆ 2023ರ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇಂದಿನಿಂದ (ಮಾರ್ಚ್ 29) ರಿಂದ ನೀತಿ ಸಂಹಿತೆ ಜಾರಿಯಾಗಲಿದೆ ಎಂದು ಕೇಂದ್ರ ಚುನಾವಣಾ ಆಯೋಗವು ತಿಳಿಸಿದೆ. ರಾಜ್ಯದಲ್ಲಿ ನೀತಿ ಸಂಹಿತೆ ಜಾರಿಯ ಪರಿಣಾಮ ತಮ್ಮ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿದ್ದ ಜನಪ್ರತಿನಿಧಿಗಳಿಗೆ ತಟ್ಟಿದೆ.
ವಿಪಕ್ಷ ನಾಯಕ, ವರುಣಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಿದ್ದರಾಮಯ್ಯ ಸದ್ಯ ವರುಣಾ ಪ್ರವಾಸದಲ್ಲಿದ್ದು, ತಮ್ಮ ಕ್ಷೇತ್ರದಲ್ಲಿ ಭರ್ಜರಿ ಚುನಾವಣೆ ಪ್ರಚಾರ ನಡೆಸುತ್ತಿದ್ದರು. ಈ ವೇಳೆ ಸದ್ಯ ರಾಜ್ಯದಲ್ಲಿ ನೀತಿ ಸಂಹಿತೆ ಜಾರಿಯಾದ ಹಿನ್ನೆಲೆಯಲ್ಲಿ ಸರ್ಕಾರಿ ಕಾರು ತೊರೆದು ತಮ್ಮ ಖಾಸಗಿ ಕಾರಿನಲ್ಲಿ ಪ್ರಯಾಣ ಬೆಳೆಸಿದ್ದಾರೆ. ಕೇಂದ್ರ ಚುನಾವಣಾ ಆಯೋಗದ ನಿಯಮದಂತೆ ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿದ್ದ ಸಿದ್ದರಾಮಯ್ಯ ಸರ್ಕಾರಿ ವಾಹನ ಬಿಟ್ಟು ಖಾಸಗಿ ವಾಹನದಲ್ಲಿ ತೆರಳಿ ಪ್ರಚಾರ ಮುಂದುವರಿಸಿದ್ದಾರೆ.

ಇಂದಿನಿಂದಲೇ ಕರ್ನಾಟಕದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಾಗಿದ್ದು ಸಿಎಂ ಸೇರಿದಂತೆ ಸಚಿವರು ಸರ್ಕಾರಿ ಸೌಲಭ್ಯವನ್ನು ಬಳಸುವಂತಿಲ್ಲ. ಹಾಗೂ ಸರ್ಕಾರ ಯಾವುದೇ ಹೊಸ ಯೋಜನೆ ಘೋಷಣೆ ಮಾಡುವಂತಿಲ್ಲ. ಆದರೆ ಸಿಎಂ ಸೇರಿ ಸಚಿವರು, ಶಾಸಕರಿಗೆ ಎಂದಿನಂತೆ ಭದ್ರತೆ ಇರುತ್ತದೆ. ಎಸ್ಕಾರ್ಟ್ ಸೇರಿದಂತೆ ಎಲ್ಲಾ ರೀತಿಯ ಭದ್ರತೆ ಮುಂದುವರೆಯಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ವರುಣಾದಲ್ಲಿ ಸಿದ್ದರಾಮಯ್ಯ ಭರ್ಜರಿ ಪ್ರಚಾರ
ರಾಜ್ಯದಲ್ಲಿ 2023ರ ವಿಧಾನಸಭಾ ಚುನಾವಣೆಯು ರಂಗೇರಿದ್ದು, ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ಹಾಗೂ ಆಮ್ ಆದ್ಮಿ ಪಕ್ಷ ಸೇರಿದಂತೆ ಇತರ ಪಕ್ಷಗಳು ಭರ್ಜರಿ ಪ್ರಚಾರ ಆರಂಭಿಸಿದೆ. ಕಾಂಗ್ರೆಸ್ ಇತ್ತೀಚಿಗೆ ಮಾರ್ಚ್ 25ರಂದು 124 ಕ್ಷೇತ್ರದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ವಿಪಕ್ಷ ನಾಯಕ ಸಿದ್ದರಾಮಯ್ಯ ವರುಣಾ ಕ್ಷೇತ್ರದಿಂದ ಸ್ಪರ್ಧಿಸುವುದು ಖಚಿತವಾಗಿತ್ತು.
ಕ್ಷೇತ್ರ ಹುಡುಕಾಟದ ಗೊಂದಲದಲ್ಲಿದ್ದ ಸಿದ್ದರಾಮಯ್ಯ ಕೊನೆಗೂ ವರುಣಾ ಕ್ಷೇತ್ರದಿಂದ ಸ್ಪರ್ಧಿಸುವುದು ಖಚಿತವಾದ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ಭರ್ಜರಿ ಪ್ರಚಾರ ಆರಂಭಿಸಿದ್ದರು. ಸದ್ಯ ವರುಣಾ ಕ್ಷೇತ್ರ ಕಾಂಗ್ರೆಸ್‌ನ ಭದ್ರಕೋಟೆಯಾಗಿದ್ದು, ಹಾಲಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಕ್ಷೇತ್ರದಲ್ಲಿ ತಮ್ಮ ಹಿಡಿತ ಸಾಧಿಸಿದ್ದಾರೆ. ಹೀಗಾಗಿ ಸಿದ್ದರಾಮಯ್ಯ ಗೆಲುವಿನ ಲೆಕ್ಕಾಚಾರದ ಮೇಲೆ ವರುಣಾ ಕ್ಷೇತ್ರದಿಂದ ಸ್ಪರ್ಧಿಸಲು ಮುಂದಾಗಿದ್ದು, ಮತದಾರರನ್ನು ಸೆಳೆಯಲು ಕ್ಷೇತ್ರದಲ್ಲಿ ಪ್ರಚಾರ ಬಿರುಸುಗೊಳಿಸಿದ್ದಾರೆ.

ಮೇ 10ರಂದು ಕರ್ನಾಟಕ ವಿಧಾನಸಭಾ ಚುನಾವಣೆ
ಇನ್ನು ರಾಜ್ಯದಲ್ಲಿ ಚುನಾವಣಾ ದಿನಾಂಕ ಘೋಷಣೆಯಾಗಿದ್ದು, ಮೇ 10ರಂದು ವಿಧಾನಸಭಾ ಚುನಾವಣೆ ನಡೆಯಲ್ಲಿದ್ದು, ಮೇ 13ರಂದು ಮತ ಎಣಿಕೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗವು ತಿಳಿಸಿದೆ. ಹೀಗಾಗಿ ಕರ್ನಾಟಕ ಚುನಾವಣೆಯ ಕಣ ಇನ್ನಷ್ಟು ರಂಗೇರಿದೆ.
ರಾಜ್ಯದಲ್ಲಿ ಒಂದೇ ಹಂತದ ಚುನಾವಣೆ ನಡೆಯಲಿದ್ದು, ಏಪ್ರಿಲ್ 13ರಂದು ಅಧಿಸೂಚನೆ, ಏಪ್ರಿಲ್ 20ಕ್ಕೆ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಏಪ್ರಿಲ್ 21ಕ್ಕೆ ನಾಮ ಪತ್ರ ಪರಿಶೀಲನೆ ನಡೆಯಲಿದ್ದು, ಏಪ್ರಿಲ್ 24 ನಾಮಪತ್ರ ವಾಪಾಸ್ ಪಡೆಯಲು ಕೊನೆಯ ದಿನವಾಗಿರುತ್ತದೆ.

ರಾಜ್ಯದಲ್ಲಿ ಒಟ್ಟು 5 ಕೋಟಿ 21 ಲಕ್ಷ ಮತದಾರರಿದ್ದು, ಅದರಲ್ಲಿ ಮಹಿಳೆಯರು 2 ಕೋಟಿ 59 ಲಕ್ಷ ಮತದಾರರಿದ್ದಾರೆ. 2 ಕೋಟಿ 62 ಲಕ್ಷ ಪುರುಷ ಮತದಾರರಿದ್ದಾರೆ. ಇನ್ನು ಮತದಾನಕ್ಕಾಗಿ ರಾಜ್ಯಾದ್ಯಂತ ನಗರ ಪ್ರದೇಶದಲ್ಲಿ 2,44,063 ಮತಗಟ್ಟೆಗಳು ನಿರ್ಮಾಣ ಮಾಡಲಾಗುತ್ತಿದ್ದು, ಅಲ್ಲದೇ ಗ್ರಾಮೀಣ ಪ್ರದೇಶದ 34,219 ಮತಗಟ್ಟೆಗಳನ್ನು ನಿರ್ಮಾಣ ಮಾಡಲಾಗುತ್ತದೆ ಎಂದು ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ.












Click it and Unblock the Notifications