ಹಳೇ ಮೈಸೂರು ಭಾಗದಲ್ಲಿ ಬಿಜೆಪಿಗೆ 15ಸ್ಥಾನ: ಬಿ.ವೈ ವಿಜಯೇಂದ್ರ ಭವಿಷ್ಯ
ಬೆಂಗಳೂರು, ಏಪ್ರಿಲ್ 21: ಉಚಿತ ಘೋಷಣೆಗಳ ಮೂಲಕ ಚುನಾವಣೆ ಗೆಲ್ಲಲು ಹೊರಟಿರುವ ಕಾಂಗ್ರೆಸ್ ಬಡವರು ಬಡವರಾಗೇ ಇರಲಿ ಎಂದು ಬಯಸಿದೆ. ಬಡವರ ಅಭಿವೃದ್ಧಿ ಮಾಡಿದ ಬಿಜೆಪಿ ಹಳೆ ಮೈಸೂರು ಭಾಗದಲ್ಲಿ ಈ ಬಾರಿ ಅಧಿಕಾರಕ್ಕೆ ಬರಲಿದೆ ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಭವಿಷ್ಯ ನುಡಿದರು.
ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಕಾವು ಜೋರಾಗುತ್ತಿದ್ದಂತೆಯೇ ಮೈಸೂರು ಜಿಲ್ಲೆಯ ವಿಧಾನಸಭೆ ಕ್ಷೇತ್ರಗಳಲ್ಲಿ ಬಿರುಸಿನ ಪ್ರಚಾರ ನಡೆಯುತ್ತಿದೆ. ಈ ವೇಳೆ ನಡೆದ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡ ಬಿ.ವೈ.ವಿಜಯೇಂದ್ರ ಅವರು ವಿಪಕ್ಷ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

ಕಾಂಗ್ರೆಸ್ ನಾಯಕರು ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಹೆಸರು ಹೇಳಿಕೊಂಡು ಓಡಾಡುತ್ತಾರೆ. ಚುನಾವಣೆಯಲ್ಲಿ ಅಂಬೇಡ್ಕರ್ ಅವರನ್ನೇ ಸೋಲಿಸಿದ ಈ ಕಾಂಗ್ರೆಸ್‌ನವರು ಅವರ ಸಾವಿನ ಬಳಿಕ ಅಂತ್ಯ ಸಂಸ್ಕಾರಕ್ಕೂ ಜಾಗ ಕೊಡಲಿಲ್ಲ ಎಂದರು.
ಚುನಾವಣೆ: ವಿಜಯೇಂದ್ರ ವಿಶ್ವಾಸ
ಹಳೇ ಮೈಸೂರು ಭಾಗದ ವಿಧಾನಸಭಾ ಕ್ಷೇತ್ರಗಳನ್ನು ಭಾರತೀಯ ಜನತಾ ಪಕ್ಷ (ಬಿಜೆಪಿ) ಈ ಬಾರಿ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಈ ಸಂಬಂಧ ಇಲ್ಲಿ ತ್ರಿಕೋನ ಸ್ಪರ್ಧೆ ಏರ್ಪಡುವ ನಿರೀಕ್ಷೆ. ಹೀಗಿದ್ದರೂ ಸಹ ಇಲ್ಲಿನ ಸುಮಾರು 15 ಕ್ಷೇತ್ರಗಳು ಬಿಜೆಪಿ ಪಾಲಾಗಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಭಾರತದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ದೂರದೃಷ್ಟಿ ಇಟ್ಟುಕೊಂಡು ಆಳ್ವಿಕೆ ಮಾಡುತ್ತಿದ್ದಾರೆ. ಮುಂಬರಲಿರುವ 2024ರ ಲೋಕಸಭೆ ಚುನಾವಣೆಯಲ್ಲೂ ಬಿಜೆಪಿಗೆ ಬಹುಮತ ಸಿಗಲಿದ್ದು, ಮುಂದೆ ಮತ್ತೊಮ್ಮೆ ನರೇಂದ್ರ ಮೋದಿಯವರು ಪ್ರಧಾನಿ ಹುದ್ದೆ ಅಲಂಕರಿಸಲಿದ್ದಾರೆ.

ಕಾಂಗ್ರೆಸ್‌ನವರು ಬಿಜೆಪಿಯನ್ನು ಅಲ್ಪಸಂಖ್ಯಾತ ವಿರೋಧಿ ಎಂದು ಹೇಳುತ್ತಾರೆ. ಹಾಗಾದದರೆ ಕಾಂಗ್ರೆಸ್‌ನವರು ತಾವು ಅಲ್ಪಸಂಖ್ಯಾತ ಸಮುದಾಯಗಳ ಅಭಿವೃದ್ಧಿಗೆ ನೀಡಿದ ಕೊಡುಗೆ ಏನು? ಎಂದು ಅವರು ಪ್ರಶ್ನಿಸಿದರು. ಕಾಂಗ್ರೆಸ್ ಅಲ್ಪಸಂಖ್ಯಾತರನ್ನು ಕೇವಲ ಓಟ್ ಬ್ಯಾಂಕ್ ಆಗಿ ಮಾಡಿಕೊಂಡಿತ್ತು, ಅಭಿವೃದ್ಧಿಗೆ ಅಲ್ಲ. ಯಡಿಯೂರಪ್ಪ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಮನೆಯಲ್ಲಿ ಕೂರುತ್ತಾಋಎ ಎಂದು ಕೊಂಡಿದ್ದರು. ಆದರೆ ವಿರಮಿಸದ ಯಡಿಯೂರಪ್ಪ ಅವರು ಬಿಜೆಪಿಯನ್ನು ಅಧಿಕಾರಕ್ಕೆ ತರಲು ರಾಜ್ಯದ ಉದ್ಧಗಲಕ್ಕೂ ಪ್ರವಾಸ ಮಾಡುತ್ತಿದ್ದಾರೆ ಎಂದು ಅವರು ವಿವರಿಸಿದರು.
ಈ ವಯಸ್ಸಿನಲ್ಲಿ ಯಡಿಯೂರಪ್ಪ ಅವರ ಪಕ್ಷ ಸಂಘಟನೆ, ಚಟುವಟಿಕೆ, ಉತ್ಸಾಹ ಪಕ್ಷದ ಕಾರ್ಯಕರ್ತರಲ್ಲೂ ಹುರುಪು ತಂದಿದೆ. ರಾಜ್ಯಾದ್ಯಂತ ಲಕ್ಷಾಂತರ ಕಾರ್ಯಕರ್ತರು ಅವರ ಜತೆಗೆ ಇದ್ದಾರೆ. ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೇ ಕಾರ್ಯಕರ್ತರು ಪಕ್ಷದ ಏಳಿಗೆಗಾಗಿ ಹಿರಿಯ ಜೀವ ಶ್ರಮಿಸುತ್ತಿದೆ. ಲಕ್ಷಾಂತರ ಕಾರ್ಯಕರ್ತರ ಪರಿಶ್ರಮದಿಂದ ಬಿಜೆಪಿ ಇಂದು ಅಧಿಕಾರಕ್ಕೆ ಬಂದಿದೆ ಎಂದು ತಿಳಿಸಿದರು.












Click it and Unblock the Notifications