MUDA scam:ಮುಡಾ ನಿವೇಶನ ಹಂಚಿಕೆ ಹಗರಣ: ಎರೆಡೆರೆಡು ಸಂಸ್ಥೆಗಳಿಂದ ತನಿಖೆ ಚುರುಕು
ಮೈಸೂರು, ಅಕ್ಟೋಬರ್ 25: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿನ ನಿವೇಶನ ಹಂಚಿಕೆ ಹಗರಣ ಸಂಬಂಧ ಜಾರಿ ನಿರ್ದೇಶನಾಲಯ ಮತ್ತು ಲೋಕಾಯುಕ್ತದಿಂದ ತನಿಖೆ ಮತ್ತಷ್ಟು ಬಿರುಸುಗೊಂಡಿದೆ. ಈ ಹಿಂದೆ ಅಪರ ಜಿಲ್ಲಾಧಿಕಾರಿಯಾಗಿದ್ದ ಪಾಲಯ್ಯ ಅವರನ್ನು ಲೋಕಾಯುಕ್ತ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ಇತ್ತ ಇಡಿ ಮುಡಾದ ನಾಲ್ವರು ಅಧಿಕಾರಿಗಳಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ 50:50 ಅನುಪಾತದಲ್ಲಿ ನಿವೇಶನ ಹಂಚಿಕೆಯಲ್ಲಿನ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಂಕಷ್ಟದ ಮೇಲೆ ಸಂಕಷ್ಟ ಎದುರಾಗಿದ್ದು, ಎರೆಡೆರೆಡು ಸಂಸ್ಥೆಗಳಿಂದ ತನಿಖೆ ಚುರುಕುಗೊಂಡಿದೆ.

ಈಗಾಗಲೇ ಇಡಿ ಅಧಿಕಾರಿಗಳು ಮುಡಾದಲ್ಲಿ ಕಾರ್ಯಾಚರಣೆ ನಡೆಸಿ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದಿದ್ದರು. ಈಗ ಹೆಚ್ಚಿನ ವಿಚಾರಣೆಗೆ ನಾಲ್ಕು ಮಂದಿ ಮುಡಾ ಅಧಿಕಾರಿಗಳಿಗೆ ವಿಚಾರಣೆಗೆ ಬರುವಂತೆ ನೋಟಿಸ್ ನೀಡಿದ್ದಾರೆ. ಗುರುವಾರ ಇಡಿ ಅಧಿಕಾರಿಗಳು ಮುಡಾ ಅಧಿಕಾರಿ ಶೃತಿ, ತಹಶೀಲ್ದಾರ್ ರಾಜಶೇಖರ್, ಪ್ರಥಮ ದರ್ಜೆ ಸಹಾಯಕರಾದ ರವಿ ಮತ್ತು ಪ್ರಶಾಂತ್ ಅವರುಗಳಿಗೆ ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ನೀಡಿದ್ದಾರೆ.
ಇತ್ತ ಲೋಕಾಯುಕ್ತ ಅಧಿಕಾರಿಗಳು ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿದ್ದು, ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ. ಪಾರ್ವತಿಯವರ ಕಡತಕ್ಕೆ ಸಂಬಂಧಿಸಿದಂತೆ ಹಿಂದೆ ಇದ್ದ ಎಲ್ಲಾ ಅಧಿಕಾರಿಗಳ ವಿಚಾರಣೆ ನಡೆಸುತ್ತಿದ್ದಾರೆ. ಇದರ ಮುಂದುವರಿದ ಭಾಗವಾಗಿ ನಿವೃತ್ತ ಐಎಎಸ್ ಅಧಿಕಾರಿ ಎಸ್. ಪಾಲಯ್ಯ ಅವರು ಲೋಕಾಯುಕ್ತ ಕಚೇರಿಯಲ್ಲಿ ವಿಚಾರಣೆಗೆ ಹಾಜರಾದರು.
ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ನಿವೇಶನ ಹಂಚಿಕೆ ಸಂಬಂಧ ವಿಚಾರಣೆ ನಡೆಸುತ್ತಿರುವ ಲೋಕಾಯುಕ್ತ ಎಸ್ಪಿ ಟಿ.ಜೆ. ಉದೇಶ್ ಮತ್ತು ತಂಡ, ಮೈಸೂರಿನಲ್ಲಿ ಅಪರ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದ ಪಾಲಯ್ಯ ಅವರಿಗೂ ಈ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿತ್ತು.
ಮೊದಲ ಬಾರಿ ನೀಡಿದ ಬಳಿಕ ಬಾರದ ಹಿನ್ನಲೆಯಲ್ಲಿ ಮತ್ತೆ ನೋಟಿಸ್ ನೀಡಲಾಗಿತ್ತು. ಈ ಹಿನ್ನಲೆಯಲ್ಲಿ ಗುರುವಾರ ಬೆಳಗ್ಗೆ 11.15 ರ ಸಮಯಕ್ಕೆ ಲೋಕಾಯುಕ್ತ ಕಚೇರಿಗೆ ಆಗಮಿಸಿದ ಪಾಲಯ್ಯ ಅವರನ್ನು ಲೋಕಾಯುಕ್ತ ಅಧಿಕಾರಿಗಳು ಪ್ರಕರಣ ಸಂಬಂಧ ಒಂದೂವರೆ ಗಂಟೆಗಳ ಕಾಲ ವಿಚಾರಣೆ ನಡೆಸಿ ಅಗತ್ಯ ಮಾಹಿತಿ ಪಡೆದು ಕೊಂಡರು.
ಪಾಲಯ್ಯ 2004-05ರಲ್ಲಿ ಮೈಸೂರಿನ ಹೆಚ್ಚುವರಿ ಜಿಲ್ಲಾಧಿಕಾರಿ ಹಾಗೂ ಕೆಲ ಕಾಲ ಮುಡಾದ ಆಯುಕ್ತರಾಗಿಯೂ ಸೇವೆ ಸಲ್ಲಿಸಿದ್ದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಬಂಧಿ ಮಲ್ಲಿಕಾರ್ಜುನ ಸ್ವಾಮಿ ಅವರು ದೇವರಾಜು ಅವರಿಂದ ಕೆಸರೆ ಗ್ರಾಮದ ಸರ್ವೆ ಸಂಖ್ಯೆ 464ರಲ್ಲಿನ ಜಮೀನು ಖರೀದಿಸಿದ ವೇಳೆ ಜಮೀನು ಖಾತೆ ಸೇರಿದಂತೆ ಕೆಲವು ಕಡತಗಳಿಗೆ ಪಾಲಯ್ಯ ಅಪರ ಜಿಲ್ಲಾಧಿಕಾರಿ ಕರ್ತವ್ಯ ನಿರ್ವಹಿಸಿದ್ದ ವೇಳೆ ಸಹಿ ಮಾಡಿದ್ದರು ಎನ್ನಲಾಗಿದೆ.
ಈ ಸಂಬಂಧ ಮಾತನಾಡಿರುವ ಪಾಲಯ್ಯ, 'ಲೋಕಾಯುಕ್ತ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಕೊಟ್ಟಿದ್ದರು. ಹಾಗಾಗಿ ವಿಚಾರಣೆಗೆ ಬಂದಿದೆ. ಕಡತದಲ್ಲಿ ಸಹಿ ವಿಚಾರವಾಗಿ ಮಾಹಿತಿ ಕೇಳಿದ್ದು, ಅದಕ್ಕೆ ಸಂಬಂಧಿಸಿದ ಮಾಹಿತಿ ಕೊಟ್ಟಿರುವೆ. ಜೊತೆಗೆ ತನಿಖಾಧಿಕಾರಿಗಳು ಕೇಳಿದ ಎಲ್ಲಾ ಮಾಹಿತಿ ನೀಡಿದ್ದೇನೆ. ಮೊದಲ ಬಾರಿ ನೋಟಿಸ್ ನೀಡಿದ ಬೇರೊಂದು ಕೆಲಸದ ಕಾರಣ ಬಂದಿರಲಿಲ್ಲ. ಇಂದು ವಿಚಾರಣೆಗೆ ಹಾಜರಾಗುವಂತೆ ಎರಡನೇ ನೋಟಿಸ್ ನೀಡಿದ್ದರು. ವಿಚಾರಣೆಗೆ ಹಾಜರಾಗಿದ್ದೇನೆ ಅಷ್ಟೇ' ಎಂದು ತಿಳಿಸಿದ್ದಾರೆ.
ಇದರ ಜೊತೆಗೆ ಲೋಕಾಯುಕ್ತ ಅಧಿಕಾರಿಗಳು ನಗರಾಭಿವೃದ್ಧಿ ಇಲಾಖೆ ಮಾಜಿ ಸಚಿವ ಬಿ.ಎನ್. ಬಚ್ಚೇಗೌಡ ಹಾಗೂ ಹಿರಿಯ ಐಎಎಸ್ ಅಧಿಕಾರಿ ಸುಬ್ರಹ್ಮಣ್ಯ ರಾವ್ ಅವರನ್ನು ಕೂಡ ಬೆಂಗಳೂರಿನಲ್ಲಿ ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ. ಅಂದು ಬಚ್ಚೇಗೌಡ ನಗರಾಭಿವೃದ್ಧಿ ಸಚಿವರಾಗಿದ್ದರೆ, ಸುಬ್ರಹ್ಮಣ್ಯರಾವ್ ಕೆಸರೆ ಸರ್ವೆ ನ.464 ರ ವಿವಾದದ ವೇಳೆ ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಕಾರ್ಯದರ್ಶಿಯಾಗಿದ್ದರು. ಹೀಗಾಗಿ ಬೆಂಗಳೂರಿನ ಬಚ್ಚೇಗೌಡ ನಿವಾಸ, ಸುಬ್ರಹ್ಮಣ್ಯ ರಾವ್ ನಿವಾಸಕ್ಕೆ ತೆರಳಿ ವಿಚಾರಣೆ ನಡೆಸಿದ್ದಾರೆ. ಇಬ್ಬರಿಗೂ ವಯಸ್ಸು ಆಗಿರುವ ಕಾರಣ ಬೆಂಗಳೂರಿಗೆ ತೆರಳಿ ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ.












Click it and Unblock the Notifications