ಲೋಕಸಭಾ ಚುನಾವಣೆ: ರಾಜ್ಯ ಬಿಜೆಪಿ ನಾಯಕರಿಗೆ ಅಮಿತ್ ಶಾ ಕೊಟ್ಟ 'ಟಾರ್ಗೆಟ್' ಏನು?
ಮೈಸೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಭಾನುವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದ ನಾಲ್ಕು ಜಿಲ್ಲೆಗಳ ಬಿಜೆಪಿ ಕೋರ್ ಕಮಿಟಿ ಸದಸ್ಯರೊಂದಿಗೆ ಸಭೆ ನಡೆಸಿದ್ದು, ತೀವ್ರ ಕುತೂಹಲ ಮೂಡಿಸಿದೆ.
ರಾಜ್ಯ ಕೋರ್ ಕಮಿಟಿ ಸಭೆಯ ಬಳಿಕ ಮೈಸೂರು ಕ್ಲಸ್ಟರ್ ಮಟ್ಟದ ಸಭೆ ನಡೆಸಿದ ಅಮಿತ್ ಶಾ, ಮೈಸೂರು, ಮಂಡ್ಯ, ಹಾಸನ ಮತ್ತು ಚಾಮರಾಜನಗರ ಜಿಲ್ಲೆಯ ಬಿಜೆಪಿ ನಾಯಕರ ಜೊತೆ ಸಭೆ ನಡೆಸಿದರು.

ರಾಜ್ಯದಲ್ಲಿ 28 ಸ್ಥಾನಗಳನ್ನು ಗೆಲ್ಲುವ ಉದ್ದೇಶದಿಂದ ಅಮಿತ್ ಶಾ ಅವರು ಸಭೆ ನಡೆಸಿ, ರಾಜ್ಯ ನಾಯಕರ ಅಭಿಪ್ರಾಯ ಸಂಗ್ರಹಿಸಿ, ರೂಟ್ ಮ್ಯಾಪ್ ರಚಿಸುವಂತೆ ಸಲಹೆ ಸೂಚನೆಗಳನ್ನು ನೀಡಿದ್ದಾರೆ. ಈಗಾಗಲೇ ಲೋಕಸಭೆಯಲ್ಲಿ ಬಿಜೆಪಿ 26 ಸೀಟುಗಳನ್ನು ಗೆದ್ದಿದೆ ಸುಮಲತಾ ಅವರು ಬಿಜೆಪಿಗೆ ಬೆಂಬಲ ನೀಡಿದ್ದಾರೆ. ಇನ್ನೊಂದು ಸೀಟು ಗೆದ್ದರೆ ಸಂಪೂರ್ಣವಾಗಿ ಗೆಲುವು ಸಾಧಿಸಿದಂತೆ ಆಗುತ್ತದೆ ಎಂದು ಅವರು ಹೇಳಿದ್ದಾರೆ.
ಸ್ಥಳೀಯ ನಾಯಕರಿಗೆ ಸೂಚನೆ
ಭಾನುವಾರ ಸುತ್ತೂರಿಗೆ ಹೊರಡುವ ಮುನ್ನ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರೊಂದಿಗೆ ಮಹತ್ವದ ಮಾತುಕತೆ ನಡೆಸಿದ ಕೇಂದ್ರ ಸಚಿವ ಅಮಿತ್ ಶಾ, ಮೈಸೂರು ಪ್ರಾಂತ್ಯದ ಸ್ಥಿತಿಗತಿಗಳ ಬಗ್ಗೆ ಮಾಹಿತಿ ಪಡೆದುಕೊಂಡರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರಾಬಲ್ಯವಿರುವ ಈ ನಾಲ್ಕು ಕ್ಷೇತ್ರಗಳಲ್ಲಿ ಬಿಜೆಪಿ ಮತ್ತು ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು. ಅದಕ್ಕಾಗಿ ಬೇಕಾದ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಸ್ಥಳೀಯ ಮುಖಂಡರಿಗೆ ಖಡಕ್ ಸೂಚನೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಲೋಕಸಭಾ ಚುನಾವಣೆಯಲ್ಲಿ ಪಕ್ಷ ಗೆಲುವು ಸಾಧಿಸಲು ಹೇಗೆ ರಣತಂತ್ರ ರೂಪಿಸಬೇಕು ಎಂಬುದರ ಬಗ್ಗೆ ಸಲಹೆ ಸೂಚನೆಗಳನ್ನು ನೀಡಿದ್ದಾರೆ ಎಂದು ಹೇಳಿದರು.
ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎ ಕೂಟ ಎಲ್ಲಾ ಕ್ಷೇತ್ರಗಳಲ್ಲಿ ಗೆಲ್ಲುವ ವಾತಾವರಣ ನಿರ್ಮಾಣವಾಗಿದೆ. ಸಭೆಯಲ್ಲಿ ಚುನಾವಣೆ ಗೆಲುವಿನ ಸಂಬಂಧ ಕಾರ್ಯತಂತ್ರ, ಸಲಹೆ, ಸೂಚನೆಗಳನ್ನು ನೀಡಿರುವುದು ರಾಜ್ಯ ನಾಯಕರಲ್ಲಿ ಉತ್ಸಾಹ ತುಂಬಿದೆ ಎಂದು ಹೇಳಿದರು.
ಬಿಜೆಪಿ ನಾಯಕ ಸಿ.ಟಿ.ರವಿ ಮಾತನಾಡಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯ ಬಿಜೆಪಿ ಕೋರ್ ಕಮಿಟಿಯ ಸಭೆ ನಡೆಸಿ ಬಿಜೆಪಿ ನಾಯಕರಿಗೆ ಅಜೆಂಡಾದೊಂದಿಗೆ ಟಾರ್ಗೆಟ್ ನೀಡಿದ್ದಾರೆ ಎಂದು ಹೇಳಿದರು.
ಬಿಜೆಪಿ ಮತ್ತು ಜೆಡಿಎಸ್‌ನ ನಡುವೆ ಸೀಟು ಹಂಚಿಕೆಯ ಬಗ್ಗೆ ಇಲ್ಲಿ ಯಾವುದೇ ಚರ್ಚೆಯಾಗಿಲ್ಲ. ನಮ್ಮ ಸಕರಾತ್ಮಕ ಅಂಶ ಮತ್ತು ವಿರೋಧಿಗಳ ಸಾಮರ್ಥ್ಯ ಮತ್ತು ದೌರ್ಬಲ್ಯಗಳ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದು ಮಾಹಿತಿ ನೀಡಿದರು.












Click it and Unblock the Notifications