Mysuru Dasara 2024: ಮೈಸೂರು ದಸರಾ ಯುವ ಸಂಭ್ರಮ ಪೋಸ್ಟರ್, ವೆಬ್‌ಸೈಟ್ ಬಿಡುಗಡೆ
ಮೈಸೂರು, ಸೆಪ್ಟೆಂಬರ್ 21: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2024 ಸಿದ್ಧತಾ ಕಾರ್ಯಗಳು ಭರದಿಂದ ಸಾಗಿದೆ. ಇಂದು(ಸೆಪ್ಟೆಂಬರ್ 21) ಯುವ ಸಂಭ್ರಮದ ಪೋಸ್ಟರ್ ಬಿಡುಗಡೆ ಮಾಡಲಾಗಿದ್ದು, ದಸರಾ ವೆಬ್‌ಸೈಟ್‌ಗೆ ಚಾಲನೆ ನೀಡಲಾಗಿದೆ. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಡಾ.ಹೆಚ್.ಸಿ. ಮಹಾದೇವಪ್ಪ ಪೋಸ್ಟರ್ ಹಾಗೂ ದಸರಾ ವೆಬ್ ಸೈಟ್ ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರಾದ ಅಯೂಬ್ ಖಾನ್, ಜಿಲ್ಲಾಧಿಕಾರಿಗಳಾದ ಜಿ. ಲಕ್ಷ್ಮಿಕಾಂತ ರೆಡ್ಡಿ, ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಂ.ಗಾಯತ್ರಿ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಟಿ.ಕೆ.ಹರೀಶ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಮಾವುತರು, ಕಾವಾಡಿಗಳಿಗೆ ಅರಮನೆ ಆವರಣದಲ್ಲಿ ಉಪಹಾರ ವ್ಯವಸ್ಥೆ
ಇನ್ನೊಂದೆಡೆ ಮೈಸೂರು ದಸರಾ ಅಂಗವಾಗಿ ಮಾವುತರು, ಕಾವಾಡಿಗಳಿಗೆ ಜಿಲ್ಲಾಡಳಿತದ ವತಿಯಿಂದ ಅರಮನೆ ಆವರಣದಲ್ಲಿ ಉಪಹಾರ ವ್ಯವಸ್ಥೆ ಮಾಡಲಾಗಿತ್ತು. ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ಮಾವುತರಿಗೆ ಉಪಹಾರ ಬಡಿಸಿದರು.
ಬಳಿಕ ಆನೆಗಳ ಪಾಲನೆ, ಪೋಷಣೆ ಮಾಡುತ್ತಿರುವ ಕಾವಾಡಿಗರು ಹಾಗೂ ಮಾವುತರ ಕಾರ್ಯವನ್ನು ಪ್ರಶಂಸಿಸಿ ಯೋಗಕ್ಷೇಮ ವಿಚಾರಿಸಿದರು. ಮಾವುತರು ಹಾಗೂ ಕಾವಾಡಿಗರ ಮಕ್ಕಳಿಗೆ ತಾತ್ಕಾಲಿಕವಾಗಿ ತೆರೆದಿರುವ ಶಾಲೆಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾವುತ ಮತ್ತು ಕಾವಾಡಿಗರ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ವೀಕ್ಷಿಸಿದರು. ಇದೇ ವೇಳೆ ಅರಮನೆ ಆವರಣದಲ್ಲಿ ತೆರೆಯಲಾಗಿರುವ ತಾತ್ಕಾಲಿಕ ಆರೋಗ್ಯ ತಪಾಸಣೆ ಕೇಂದ್ರವನ್ನು ಸಚಿವರು ವೀಕ್ಷಿಸಿದರು.
ನರಸಿಂಹ ರಾಜ ಕ್ಷೇತ್ರದ ಶಾಸಕರಾದ ತನ್ವೀರ್ ಸೇಠ್, ಜಿಲ್ಲಾಧಿಕಾರಿಗಳಾದ ಜಿ. ಲಕ್ಷ್ಮಿಕಾಂತ ರೆಡ್ಡಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಂ.ಗಾಯತ್ರಿ, ಮೈಸೂರು ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.












Click it and Unblock the Notifications