ಮೈಸೂರು: ಗೌರಿ ಲಂಕೇಶ್ ಹತ್ಯೆ ಖಂಡಿಸಿ ಪ್ರತಿಭಟನೆ
ಮೈಸೂರು, ಸೆಪ್ಟೆಂಬರ್ 6: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಖಂಡಿಸಿ ಮೈಸೂರು ಜಿಲ್ಲಾಧಿಕಾರಿ ಕಚೇರಿ ಎದುರು ಇಂದು ಮೈಸೂರು ಪತ್ರಕರ್ತರು ಸೇರಿದಂತೆ ವಿವಿಧ ಸಂಘಟನೆಗಳು ಕಪ್ಪು ಪಟ್ಟಿ ಕಟ್ಟಿಕೊಂಡು ಪ್ರತಿಭಟಿಸಿದರು.
ಚಿಂತಕ ಎಂ.ಎಂ.ಕಲ್ಬುರ್ಗಿ ಹತ್ಯೆ ಜನಮಾನಸದಿಂದ ಮಾಸುವ ಮುನ್ನವೇ ಗೌರಿ ಲಂಕೇಶ್ ಹತ್ಯೆಯಾಗಿರುವುದು ಸಾಂಸ್ಕೃತಿಕ, ಸಾಹಿತ್ಯ ಹಾಗೂ ಪತ್ರಿಕಾ ಕ್ಷೇತ್ರವನ್ನು ಬೆಚ್ಚಿ ಬೀಳಿಸಿದೆ. ಹತ್ಯೆಯ ತನಿಖೆ ಉನ್ನತ ಮಟ್ಟದಲ್ಲಿ ನಡೆಸಿ ಆರೋಪಿಗಳನ್ನು ಹೆಡೆಮುರಿ ಕಟ್ಟಬೇಕು ಎಂದು ಪ್ರತಿಭಟನಾ ನಿರತರು ಒತ್ತಾಯಿಸಿದರು.

ಮೈಸೂರು ಕಾಂಗ್ರೆಸ್ ಸಮಿತಿ ವತಿಯಿಂದ ಶ್ರದ್ಧಾಂಜಲಿ: ಗೌರಿ ಲಂಕೇಶ್ ಹತ್ಯೆ ಹಿನ್ನೆಲೆಯಲ್ಲೆ ಮೈಸೂರು ನಗರ ಮತ್ತು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಬುಧವಾರ ನಗರದ ಜೆ.ಎಲ್.ಬಿ. ರಸ್ತೆಯಲ್ಲಿರುವ ರೋಟರಿ ಸಭಾಂಗಣದಲ್ಲಿ ಆಯೋಜಿಸಿದ್ದ ಅಭಿನಂದನಾ ಸಮಾರಂಭವನ್ನು ರದ್ದುಗೊಳಿಸಿ ಗೌರಿ ಲಂಕೇಶ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ರಾಜ್ಯ ಕಾಂಗ್ರೆಸ್ ಸೇವಾದಳದ ನೂತನ ಮುಖ್ಯ ಸಂಘಟನಾಧಿಕಾರಿ ಪ್ಯಾರಿಜಾನ್ ಅವರಿಗೆ ಅಭಿನಂದನಾ ಸಮಾರಂಭ ಆಯೋಜಿಸಲಾಗಿತ್ತು.

ಆದರೆ ಮಂಗಳವಾರ ರಾತ್ರಿ ಗೌರಿ ಲಂಕೇಶ್ ಅವರ ಹತ್ಯೆಯಾದ ಹಿನ್ನೆಲೆಯಲ್ಲಿ ಅಭಿನಂದನಾ ಸಮಾರಂಭದ ಬದಲಿಗೆ ಶ್ರದ್ಧಾಂಜಲಿ ಸಭೆ ನಡೆಸಲಾಯಿತು. ಗೌರಿ ಲಂಕೇಶ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮೌನಚರಣೆ ಮಾಡಿ ಅವರ ಆತ್ಮಕ್ಕೆ ಶಾಂತಿ ಕೋರಲಾಯಿತು.












Click it and Unblock the Notifications