ಕೇರಳದಲ್ಲಿ ಹೊಸ ಒಮಿಕ್ರಾನ್: ಗಡಿಭಾಗಗಳಲ್ಲಿ ಕೋವಿಡ್ ಕಟ್ಟೆಚ್ಚರ
ಮೈಸೂರು, ಡಿಸೆಂಬರ್ 18: ನೆರೆ ರಾಜ್ಯ ಕೇರಳದಲ್ಲಿ ಕೋವಿಡ್ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಮೈಸೂರು ಹಾಗೂ ಗಡಿಭಾಗಗಳಲ್ಲಿ ಕಟ್ಟೆಚ್ಚರವಹಿಸಲಾಗಿದೆ.
ವಿಶ್ವದ ಹಲವು ದೇಶಗಳಲ್ಲಿ ಕೋವಿಡ್ ವೈರಾಣು ಮತ್ತೆ ಆತಂಕ ಉಂಟು ಮಾಡಿದೆ. ಕೋವಿಡ್ 19 ವೈರಾಣುವಿನ ಹೊಸ ರೂಪಾಂತರಿ ಜೆಎನ್-1 (ಒಮಿಕ್ರಾನ್ ಉಪತಳಿ) ಕೇರಳದ ವೃದ್ಧೆಯೊಬ್ಬರಲ್ಲಿ ಪತ್ತೆಯಾಗಿದೆ ಈ ಹಿನ್ನೆಲೆಯಲ್ಲಿ ಕೇರಳ ರಾಜ್ಯಕ್ಕೆ ಹೊಂದಿಕೊಂಡಿರುವ ಎಚ್.ಡಿ.ಕೋಟೆ ತಾಲೂಕಿನ ಗಡಿಭಾಗಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಪಿ.ಸಿ. ಕುಮಾರಸ್ವಾಮಿ ತಿಳಿಸಿದ್ದಾರೆ.

ಮೈಸೂರಿನಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯ ಎಲ್ಲಾ ಸಾರ್ವಜನಿಕ ಆಸ್ಪತ್ರೆಗಳಲ್ಲಿಯೂ ಮಾಕ್ ಡ್ರಿಲ್ ಆಕ್ಟಿವಿಟಿ ಮಾಡಿಸಲಾಗಿದೆ. ಆಕ್ಸಿಜನ್ ಸಿಲಿಂಡರ್ ಲಭ್ಯತೆ, ಪೈಪ್‌ಲೈನ್, ಔಷಧಗಳ ದಾಸ್ತಾನು ಕುರಿತು ಪರಿಶೀಲನೆ ನಡೆಸಲಾಗಿದೆ. ಇದಲ್ಲದೇ ಜ್ವರ, ಕೆಮ್ಮುಘಿ, ಕ, ಸೀನುವುದು, ಉಸಿರಾಟದ ತೊಂದರೆ ಕಂಡುಬಂದಲ್ಲಿ ಅಂತಹವರು ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆಯುವಂತೆ ಸಲಹೆ ನೀಡಿದರು.
ಸಮುದಾಯ ಹಂತದಲ್ಲಿಯೂ ಅರಿವು ಮೂಡಿಸಲಾಗುತ್ತಿದೆ. ಅದಕ್ಕಾಗಿ ಆ ಹಂತದ ಎಲ್ಲಾ ಅಧಿಕಾರಿಗಳಿಗೂ ತರಬೇತಿ ನೀಡಲಾಗಿದೆ. ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಸರ್ವೇಕ್ಷಣಾಧಿಕಾರಿ ನೇತೃತ್ವದಲ್ಲಿ ರ್ಯಾಪಿಡ್ ರೆಸ್ಪಾನ್ಸ್ ತಂಡವನ್ನು ರಚಿಸಲಾಗಿದೆ. ತಾಲೂಕು ಮಟ್ಟದಲ್ಲಿ ತಾಲೂಕು ವೈದ್ಯಾಧಿಕಾರಿ ನೇತೃತ್ವದಲ್ಲಿ ತಂಡ ರಚನೆಯಾಗಿದೆ.
ಈಗಾಗಲೇ ಹಲವು ಬಾರಿ ಸಭೆಗಳನ್ನು ನಡೆಸಿ ಅಗತ್ಯ ಸಲಹೆ ನೀಡಲಾಗಿದೆ. ಈ ವಾರದಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಮತ್ತೊಂದು ಸಭೆ ನಡೆಸಿ ಹೊಸ ಮಾರ್ಗಸೂಚಿಗಳನ್ನು ಅನುಷ್ಠಾನಗೊಳಿಸುವ ಬಗ್ಗೆ ಮಾರ್ಗದರ್ಶನ ಪಡೆಯಲಾಗುವುದು ಎಂದು ಮಾಹಿತಿ ನೀಡಿದರು.












Click it and Unblock the Notifications