ಚನ್ನಪಟ್ಟಣ ಉಪಚುನಾವಣೆ ಅಭ್ಯರ್ಥಿ ಬಗ್ಗೆ ನಿಖಿಲ್ ಕುಮಾರಸ್ವಾಮಿ ಹೇಳಿದ್ದೇನು?
ಚನ್ನಪಟ್ಟಣ ಉಪಚುನಾವಣೆಗೆ ಅಭ್ಯರ್ಥಿಗಳು ಯಾರು ಎನ್ನುವ ಪ್ರಶ್ನೆ ಇದ್ದೇ ಇದೆ. ಜೆಡಿಎಸ್ ಅಭ್ಯರ್ಥಿ ಸ್ಪರ್ಧೆ ಮಾಡುತ್ತಾರಾ ಅಥವಾ ಎನ್‌ಡಿಎ ಅಭ್ಯರ್ಥಿ ಸ್ಪರ್ಧಿಸುತ್ತಾರಾ ಎನ್ನುವ ಪ್ರಶ್ನೆಗೆ ಸದ್ಯ ಉತ್ತರ ಸಿಕ್ಕಿಲ್ಲ, ಇದನ ನಡುವೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಚನ್ನಪಟ್ಟಣ ಉಪಚುನಾವಣೆ ಅಭ್ಯರ್ಥಿ ಬಗ್ಗೆ ಮಾತನಾಡಿದ್ದಾರೆ.
ಮೈಸೂರಿನಲ್ಲಿ ಆಯೋಜಿಸಲಾಗಿದ್ದ ಜೆಡಿಎಸ್ ಪ್ರಾಥಮಿಕ ಸದಸ್ಯತ್ವ ನೋಂದಣಿ ಹಾಗೂ ಬೂತ್ ಸಮಿತಿ ಅಭಿಯಾನಕ್ಕೆ ಚಾಲನೆ ನೀಡಿದ ಸಂದರ್ಭದಲ್ಲಿ ಮಾತನಾಡಿದ ಅವರು, ಚನ್ನಪಟ್ಟಣ ಉಪ ಚುನಾವಣೆಗೆ ಸಂಬಂಧಿಸಿದಂತೆ ಎನ್‌ಡಿಎ ಅಭ್ಯರ್ಥಿ ಕಣಕ್ಕಿಳಿಯುತ್ತಾರೋ, ನಾನೇ ನಿಲ್ಲುತ್ತೇನೋ ಎಂಬ ಪ್ರಶ್ನೆಗೆ ಸದ್ಯಕ್ಕೆ ಉತ್ತರವಿಲ್ಲ. ಕಾರ್ಯಕರ್ತರ ಭಾವನೆಗೆ ತಕ್ಕಂತೆ ಕೆಲಸ ಮಾಡುತ್ತೇವೆ ಎಂದು ಹೇಳಿದ್ದಾರೆ.

ಪಕ್ಷವನ್ನು ತಳಮಟ್ಟದಿಂದ ಕಟ್ಟಲು ಪ್ರಾಥಮಿಕ ಸದಸ್ಯತ್ವ ನೋಂದಣಿ ಹಾಗೂ ಬೂತ್ ಸಮಿತಿ ಅಭಿಯಾನ ನಡೆಸಲಾಗುತ್ತಿದೆ. ಬೂತ್ ಮಟ್ಟದಲ್ಲಿ ಪಕ್ಷವನ್ನ ಕಟ್ಟಬೇಕು, ಪಕ್ಷದ ಕಟ್ಟ ಕಡೆಯ ಕಾರ್ಯಕರ್ತರನ್ನ ಗುರುತಿಸುವ ಪ್ರಾಮಾಣಿಕ ಕೆಲಸ ಮಾಡುತ್ತೇನೆ ಎಂದು ಹೇಳಿದರು.
ಜೆಡಿಎಸ್ ಪಕ್ಷದ ಸದಸ್ಯತ್ವ ನೊಂದಣಿ ಮತ್ತು ಬೂತ್ ಮಟ್ಟದ ಸಮಿತಿ ರಚನೆ ಆಗಬೇಕು ಎಂದು ಮಾಜಿ ಪ್ರಧಾನಿ ದೇವೇಗೌಡರು ಕರೆ ಕೊಟ್ಟಿದ್ದರು. ಇವತ್ತು ರಾಜ್ಯದಲ್ಲಿ ಪ್ರತಿ ಸಮಾಜವನ್ನು ಒಗ್ಗೂಡಿಸಿ ಎಲ್ಲಾ ಸಮುದಾಯಕ್ಕೂ ದೇವೇಗೌಡರು ಕೊಡುಗೆ ನೀಡಿದ್ದಾರೆ ಎಂದರು.
62 ವರ್ಷದಲ್ಲಿ ಬಿಜೆಪಿ ಜೊತೆಗೆ ಹೋಗಿರಲಿಲ್ಲ, ಆದರೆ ಮೈತ್ರಿಗೆ ದೇವೇಗೌಡರೆ ಒಪ್ಪಿಗೆ ಸೂಚಿಸಿದರು ಪ್ರಾದೇಶಿಕ ಪಕ್ಷ ಉಳಿಸಿ ಬೆಳೆಸಬೇಕು. ಹಾಗೆಯೇ ಹೆಚ್.ಡಿ. ಕುಮಾರಸ್ವಾಮಿಯವರು ರಾಜ್ಯಕ್ಕೆ ಕೊಟ್ಟಿರುವ ಕೊಡುಗೆಯನ್ನು ಮರೆಯಲು ಆಗುವುದಿಲ್ಲ ಎಂದರು.
ಹೆಚ್‌ಡಿ ಕುಮಾರಸ್ವಾಮಿ ಕೇಂದ್ರ ಮಂತ್ರಿಯಾದ ನಂತರ ಜೆಡಿಎಸ್ ಕಾರ್ಯಕರ್ತರಲ್ಲಿ ಹೊಸ ಹುರುಪು, ಉತ್ಸಾಹ, ಹುಮ್ಮಸ್ಸು ಪ್ರಾರಂಭವಾಗಿದೆ. ಮುಂಬರುವ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ನಗರ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲುವುದರ ಮೂಲಕ ಕುಮಾರಸ್ವಾಮಿಯವರನ್ನು ಮುಂದಿನ ದಿನಗಳಲ್ಲಿ 5 ವರ್ಷಗಳ ಪೂರ್ಣಾವಧಿಕೆ ಸಿಎಂ ಮಾಡಲು ಶಕ್ತಿ ಬರಲಿದೆ ಎಂದರು.
ಪ್ರಾದೇಶಿಕ ಪಕ್ಷ ಮುಂಬರುವ ದಿನಗಳಲ್ಲಿ ರಾಜ್ಯದ 31 ಜಿಲ್ಲೆಯಲ್ಲೂ ಪ್ರವಾಸ ಮಾಡಿ ಸದೃಢವಾಗಿ ಕಟ್ಟುವಂತ ಪ್ರಾಮಾಣಿಕ ಕೆಲಸ ಮಾಡ್ತೀನಿ ಎಲ್ಲ ಕಾರ್ಯಕರ್ತರು ನನಗೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು.












Click it and Unblock the Notifications