Mysuru: ಈ ಬಾರಿ ವಾಡಿಕೆಗಿಂತ ಅಧಿಕ ಮಳೆ; ಸಚಿವ ಕೃಷ್ಣ ಬೈರೇಗೌಡ
ಮೈಸೂರು: ಪ್ರತಿಯೊಂದು ಜೀವ ಅಮೂಲ್ಯವಾಗಿದ್ದು ಅತಿವೃಷ್ಟಿಯಿಂದ ಯಾವುದೇ ಪ್ರಾಣ ಹಾಗೂ ಆಸ್ತಿ ಆಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಹಾನಿಯನ್ನು ತಡೆಗಟ್ಟಲು ಅಧಿಕಾರಿಗಳು ಸಜ್ಜಾಗಬೇಕು ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ತಿಳಿಸಿದರು.
ಪ್ರಾದೇಶಿಕ ಆಯುಕ್ತರ ಕಚೇರಿಯ ಚಾಮುಂಡೇಶ್ವರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಮೈಸೂರು ವಿಭಾಗದ ಕಂದಾಯ ಇಲಾಖೆಯ ಪ್ರಗತಿಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಉತ್ತಮವಾಗಿ ಮಳೆಯಾಗುತ್ತಿದೆ. ಮಳೆಯಿಂದ ಪ್ರಾಣ ಹಾಗೂ ಆಸ್ತಿ ಹಾನಿ ಆಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಇನ್ನೂ ಹೆಚ್ಚು ಮಳೆ ಆದರೂ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳನ್ನು ಗುರುತಿಸಿಕೊಂಡಿರಬೇಕು ಎಂದರು.

ಈ ಬಾರಿ ವಾಡಿಕೆಗಿಂತ ಹೆಚ್ಚಿನ ಮಳೆ ಆಗುತ್ತದೆ. ಈಗಾಗಲೇ ಮಳೆಯಿಂದ 20 ಸಾವು ಸಂಬಂಧಿಸಿದೆ. ವಿಪತ್ತು ನಿರ್ವಹಣೆಯನ್ನು ಸಮರ್ಪಕವಾಗಿ ನಿರ್ವಹಿಸಿ ಸಾವು-ನೋವು ಆಗದಂತೆ ನೋಡಿಕೊಳ್ಳಬೇಕು. ಕಳೆದ ಬಾರಿ ಬರ ನಿರ್ವಹಣೆಯನ್ನು ಸಮರ್ಪಕವಾಗಿ ನಿರ್ವಹಿಸಿದ್ದೀರಿ. ಹಾಗೆಯೇ ಈಗ ಹೆಚ್ಚು ಮಳೆಯಿಂದ ಆಗುವ ಅನಾಹುತಗಳನ್ನು ತಡೆಗಟ್ಟಲು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಿ. ಇನ್ನೂ ಮುಂದೆ ವಿಪತ್ತಿನಿಂದ ಒಂದೇ ಒಂದು ಸಾವು ಆಗದಂತೆ ನೋಡಿಕೊಳ್ಳಲು ಕ್ರಮಗಳನ್ನು ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅತಿವೃಷ್ಟಿ ತಡೆಯಲು ಗ್ರಾಮ ಪಂಚಾಯತಿಗಳ ಹಂತದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳನ್ನು ಒಳಗೊಂಡ ಟಾಸ್ಕ್ ಫೋರ್ಸ್ ತಂಡಗಳನ್ನು ರಚಿಸಬೇಕು. ಈ ತಂಡದಲ್ಲಿ ಅಗ್ನಿಶಾಮಕ ಅಧಿಕಾರಿಗಳು, ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು, ಪೊಲೀಸ್ ಇಲಾಖೆಯ ಅಧಿಕಾರಿಗಳು ಕಂದಾಯ ಇಲಾಖೆಯ ಅಧಿಕಾರಿಗಳು ಇರಬೇಕು. ಈ ತಂಡಗಳು ಅತಿವೃಷ್ಟಿಯಿಂದ ತೊಂದರೆ ಆಗುವ ಸ್ಥಳಗಳನ್ನು ಗುರುತಿಸಿ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.
ಕಂದಾಯ ಇಲಾಖೆಯು ಮಾತೃ ಇಲಾಖೆಯಾಗಿದ್ದು, ಕಂದಾಯ ಇಲಾಖೆಯಲ್ಲಿ ಹೆಚ್ಚು ಹೆಚ್ಚು ಅರ್ಜಿಗಳು ವಿಲೇವಾರಿ ಆಗಿದ್ದರೂ ಇನ್ನು ಬಾಕಿ ಉಳಿದಿದೆ. ಜನರು ಹೆಚ್ಚು ಕಂದಾಯ ಇಲಾಖೆಯ ಮೇಲೆ ಅವಲಂಬಿತರಾಗಿರುತ್ತಾರೆ. ಸಕಾಲದಲ್ಲಿ ಕೆಲಸ ಮಾಡಿ ಅವರ ಸಮಸ್ಯೆಗಳನ್ನು ಬಗೆಹರಿಸುವುದು ನಮ್ಮ ಇಲಾಖೆಯ ಪ್ರಮುಖ ಜವಾಬ್ದಾರಿ ಆಗಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಕರ್ತವ್ಯ ನಿರ್ವಹಿಸಬೇಕು ಎಂದು ಮಾಹಿತಿ ನೀಡಿದರು.












Click it and Unblock the Notifications