Varuna: ಮೇ 4ರಂದು ಸಿದ್ದರಾಮಯ್ಯ ಪರ ಶಿವಣ್ಣ, ರಮ್ಯಾ, ದುನಿಯಾ ವಿಜಯ್ ಪ್ರಚಾರ
2023ರ ಕರ್ನಾಟಕ ವಿಧಾನಸಭಾ ಚುನಾವಣೆ ಒಂದು ವಾರ ಮಾತ್ರ ಬಾಕಿ ಇದ್ದು, ಗೆಲುವಿಗಾಗಿ ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳು ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ.
ಬಿಜೆಪಿ ಮತ್ತು ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ರಾಜ್ಯ ನಾಯಕರೊಂದಿಗೆ ರಾಷ್ಟ್ರೀಯ ನಾಯಕರೂ ಕ್ಷೇತ್ರಗಳಲ್ಲಿ ಭರ್ಜರಿ ಸಮಾವೇಶ ಹಾಗೂ ರೋಡ್ ಶೋ ಮಾಡುತ್ತಿದ್ದಾರೆ. ಮೇ 10ರಂದು ನಡೆಯುವ ಮತದಾನಕ್ಕೂ ಮುನ್ನ ಮತದಾರರ ಮನಗೆಲ್ಲಲು ನಾನಾ ಕಸರತ್ತು ನಡೆಸುತ್ತಿದ್ದಾರೆ.

ಈ ಬಾರಿಯ ಚುನಾವಣೆಯಲ್ಲಿ ರಾಜಕೀಯ ನಾಯಕರು ಮಾತ್ರವಲ್ಲದೆ, ಸಿನಿಮಾ ತಾರೆಯರು ಪ್ರಚಾರದ ಅಖಾಡದಲ್ಲಿ ಧೂಳೆಬ್ಬಿಸುತ್ತಿದ್ದಾರೆ. ಬಿಜೆಪಿ ಅಭ್ಯರ್ಥಿಗಳ ಪರ ಕಿಚ್ಚ ಸುದೀಪ್ ಪ್ರಚಾರ ನಡೆಸುತ್ತಿದ್ದರೆ, ಇದೀಗ ಹ್ಯಾಟ್ರಿಕ್ ಹೀರೋ ಶಿವರಾಜಕುಮಾರ್ ಕೂಡ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗುತ್ತಿದ್ದಾರೆ.
ಹೌದು. ರಾಜ್ಯದ ಹೈ-ವೋಲ್ಟೇಜ್ ಕ್ಷೇತ್ರವಾಗಿರುವ ಮೈಸೂರು ಜಿಲ್ಲೆಯ ವರುಣಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಿದ್ದರಾಮಯ್ಯ ಪರವಾಗಿ ಗುರುವಾರ, ಮೇ 4ರಂದು ಸ್ಯಾಂಡಲ್‌ವುಡ್ ನಟರಾದ ಶಿವರಾಜಕುಮಾರ್, ದುನಿಯಾ ವಿಜಯ್ ಮತ್ತು ನಟಿ ರಮ್ಯಾ ಪ್ರಚಾರ ನಡೆಸಲಿದ್ದಾರೆ.
ಗುರುವಾರ ಬೆಳಿಗ್ಗೆಯಿಂದ ಸಂಜೆಯವರೆಗೆ ವರುಣಾ ಕ್ಷೇತ್ರದಲ್ಲಿ ರೋಡ್ ಶೋ ಮೂಲಕ ಸ್ಯಾಂಡಲ್‌ವುಡ್ ತಾರೆಯರು ಕಾಂಗ್ರೆಸ್ ಅಭ್ಯರ್ಥಿ ಸಿದ್ದರಾಮಯ್ಯಗೆ ಶಕ್ತಿ ತುಂಬಲಿದ್ದಾರೆ.

ವಿಧಾನಸಭಾ ಚುನಾವಣೆಗೆ ದಿನಗಣನೆ ಬಾಕಿಯಿದ್ದು, ವರುಣಾದಲ್ಲಿ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಮೂರು ಪಕ್ಷಗಳ ನಾಯಕರು ಭರ್ಜರಿ ಪ್ರಚಾರದಲ್ಲಿ ನಡೆಸಿದ್ದಾರೆ.
ಈ ಬಾರಿ ಹಳೇ ಮೈಸೂರು ಭಾಗದಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲಬೇಕೆಂದು ಪಣ ತೊಟ್ಟಿರುವ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ರಾಷ್ಟ್ರೀಯ ನಾಯಕರಿಂದ ಸಮಾವೇಶ ಮತ್ತು ರೋಡ್ ಶೋ ನಡೆಸುವ ಮೂಲಕ ರಣತಂತ್ರ ರೂಪಿಸಿದ್ದಾರೆ. ಇನ್ನು ಸಿದ್ದರಾಮಯ್ಯ ಅವರು ವರುಣಾ ಕ್ಷೇತ್ರದಲ್ಲಿ ಎರಡು ದಿನ ಮಾತ್ರ ಪ್ರಚಾರ ನಡೆಸುವುದಾಗಿ ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನ ಸ್ಟಾರ್ ಪ್ರಚಾರಕಾಗಿರುವ ಸ್ಯಾಂಡಲ್‌ವುಡ್ ಕ್ವೀನ್ ರಮ್ಯಾ, ಹ್ಯಾಟ್ರಿಕ್ ಹೀರೋ ಶಿವರಾಜಕುಮಾರ್ ಹಾಗೂ ನಟ ದುನಿಯಾ ವಿಜಯ್ ಅವರು ಸಿದ್ದರಾಮಯ್ಯ ಪರ ಪ್ರಚಾರಕ್ಕಿಳಿಯುತ್ತಿದ್ದಾರೆ.
ವರುಣಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ವಿ. ಸೋಮಣ್ಣ ಸ್ಪರ್ಧಿಸುತ್ತಿದ್ದು, ಸಿದ್ದರಾಮಯ್ಯಗೆ ಕಠಿಣ ಪ್ರತಿಸ್ಪರ್ಧಿಯಾಗಿದ್ದಾರೆ. ವಿ. ಸೋಮಣ್ಣ ಚಾಮರಾಜನಗರದಲ್ಲಿಯೂ ಕಣಕ್ಕಿಳಿದಿದ್ದಾರೆ. ಇನ್ನು ವರುಣಾದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಭಾರತಿ ಶಂಕರ್ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.
ಕೋಲಾರದಿಂದ ಸ್ಪರ್ಧಿಸಲು ಬಯಸಿದ್ದ ಸಿದ್ದರಾಮಯ್ಯಗೆ ಕಾಂಗ್ರೆಸ್ ಹೈಕಮಾಂಡ್ ನಿರಾಕರಿಸಿತು. ಅಲ್ಲಿ ಸೋಲುವ ಮುನ್ಸೂಚನೆ ಅರಿತ ನಂತರ ತವರು ವರುಣಾದಲ್ಲಿ ಟಿಕೆಟ್ ನೀಡಿತು. ಅಲ್ಲಿ ಯತೀಂದ್ರ ಅವರು ಹಾಲಿ ಶಾಸಕರಾಗಿದ್ದರು. ತಂದೆಗಾಗಿ ತಮ್ಮ ಸ್ಥಾನವನ್ನು ಬಿಟ್ಟುಕೊಟ್ಟಿದ್ದಾರೆ.
2023ರ ಕರ್ನಾಟಕ ವಿಧಾನಸಭೆ ಚುನಾವಣೆಗೆ ಈಗಾಗಲೇ ನಾಮಪತ್ರ ಸಲ್ಲಿಕೆ, ಪರಿಶೀಲನೆ ಮತ್ತು ನಾಮಪತ್ರ ವಾಪಸ್ ಪ್ರಕ್ರಿಯೆ ಕೊನೆಗೊಂಡಿದೆ. ಮೇ 10ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದರೆ, ಮೇ 13ರಂದು ಫಲಿತಾಂಶ ಪ್ರಕಟವಾಗಲಿದ್ದು, ಬಳಿಕ ಯಾವ ಪಕ್ಷ ರಾಜ್ಯದಲ್ಲಿ ಸರ್ಕಾರ ರಚಿಸಲಿದೆ ಎಂಬ ಕುತೂಹಲ ಮೂಡಿದೆ.












Click it and Unblock the Notifications