ಬಿಜೆಪಿಯಿಂದ ಕಾಂಗ್ರೆಸ್ ಶಾಸಕರಿಗೆ ₹50 ಕೋಟಿ ಆಮಿಷ: ಸಿಎಂ ಸಿದ್ದರಾಮಯ್ಯ
ಮೈಸೂರು: ಬಿಜೆಪಿ ಎಂದಿಗೂ ಜನರ ಆಶೀರ್ವಾದ ಪಡೆದು ಅಧಿಕಾರಕ್ಕೆ ಬಂದೇ ಇಲ್ಲ. ಆಪರೇಷನ್ ಕಮಲ ಮಾಡಿಯೇ ಬಂದಿದ್ದಾರೆ, ಈಗಲೂ ರಾಜ್ಯದಲ್ಲಿ ಆಪರೇಷನ್ ಕಮಲ ಮಾಡಲು ಪ್ರಯತ್ನ ಮಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬಿಜೆಪಿ ರಾಜ್ಯದಲ್ಲಿ 113ಕ್ಕಿಂತ ಹೆಚ್ಚಿನ ಸ್ಥಾನಗಳಲ್ಲು ಗೆದ್ದು ಅಧಿಕಾರಕ್ಕೆ ಬಂದಿಲ್ಲ. 2018 ರಲ್ಲಿ 100 ಗೆದ್ದಿದ್ದರು. ಕರ್ನಾಟಕದಲ್ಲಿಯೂ ಆಪರೇಷನ್ ಕಮಲ ಪ್ರಯತ್ನ ಮಾಡುತ್ತಾರೆ. ಆದರೆ ನಮ್ಮ ಶಾಸಕರು ಅವರ ಆಸೆ ಆಮಿಷಗಳಿಗೆ ಬಲಿಯಾಗುವುದಿಲ್ಲ. ಅವರು ಈಗ 50 ಕೋಟಿ ಆಮಿಷವೊಡ್ಡುತ್ತಿದ್ದಾರೆ ಎಂದು ತಿಳಿಸಿದರು.

ಕಾಂಗ್ರೆಸ್ ಆಡಳಿತವಿರುವ ಹಿಮಾಚಲ ಪ್ರದೇಶವನ್ನು ಬಿಜೆಪಿ ಗುರಿಯಾಗಿಸಿಕೊಂಡಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು ಈ ಉತ್ತರ ನೀಡಿದರು. ಈ ಮೂಲಕ ರಾಜ್ಯದಲ್ಲಿ ಇನ್ನೂ ಆಪರೇಷನ್ ಕಮಲಕ್ಕೆ ಪ್ರಯತ್ನಗಳು ನಡೆಯುತ್ತಿವೆ ಎಂದು ಹೇಳಿದ್ದಾರೆ.
ನೀತಿ ಆಯೋಗದ ವರದಿ ಪರಿಶೀಲನೆ ಅಗತ್ಯ
ನೀತಿ ಆಯೋಗದವರು ನೀಡಿರುವ ವರದಿ ಪ್ರಕಾರ ಕಳೆದ 10 ವರ್ಷಗಳಲ್ಲಿ ಬಡತನ ಶೇ. 5ರಷ್ಟು ಮಾತ್ರ ಇದೆ ಎಂದು ಹೇಳಲಾಗಿದೆ ಎಂಬ ಪ್ರಶ್ನೆಗೆ ಉತ್ತರಿಸಿ ಅದನ್ನು ಪರಿಶೀಲಿಸಬೇಕಿದೆ. ಅದು ಸಮೀಕ್ಷೆಯ ವರದಿಯಲ್ಲ. ಅವರು ಹೇಳಿರುವುದು ಸತ್ಯವೋ ಅಸತ್ಯವೋ ಎಂದು ತಿಳಿಯಬೇಕಿದೆ. ಬಡತನ 5% ಕಡಿಮೆಯಾಗಿದ್ದರೆ ಅದು ಖುಷಿ ಪಡುವ ವಿಚಾರ. ಪರಿಸ್ಥಿತಿ ನೋಡಿದರೆ ಆ ರೀತಿ ಕಾಣುವುದಿಲ್ಲ. ಬಡತನ ರೇಖೆಗಿಂತ ಕೆಳಗಿರುವ 82 ಕೋಟಿ ಕುಟುಂಬಗಳಿಗೆ ಅಕ್ಕಿ ಕೊಡಲಾಗುತ್ತಿದೆ ಎಂದರು.
ಸ್ಫೋಟದ ಬಗ್ಗೆ ಸಿಎಂ ಹೇಳಿದ್ದೇನು?
ಬೆಂಗಳೂರಿನ ಕುಂದಲಹಳ್ಳಿಯ ರಾಮೇಶ್ವರಂ ಕೆೆಯಲ್ಲಿ ಸ್ಫೋಟ ಘಟನೆ ಕುರಿತು ತನಿಖೆ ನಡೆಯುತ್ತಿದೆ ಎಂದ ಅವರು, ಪ್ರಾಥಮಿಕ ತನಿಖೆಯ ಪ್ರಕಾರ ಅದು ಸಣ್ಣ ಪ್ರಮಾಣದ ಸುಧಾರಿತ ಸ್ಪೋಟಕವಾಗಿತ್ತು ಎಂದು ತಿಳಿದುಬಂದಿದೆ, ಪೂರ್ಣ ವರದಿಗಾಗಿ ಕಾಯುತ್ತಿದ್ದೇನೆ ಎಂದು ತಿಳಿಸಿದರು.
ಕ್ಯಾಶಿಯರ್ ಬಳಿ ಟೋಕನ್ ಪಡೆದು ಅಲ್ಲಿ ತಿಂಡಿ ತಿಂದಿರುವ ವ್ಯಕ್ತಿ, ಬ್ಯಾಗ್ ಇಟ್ಟು ಬಂದಿದ್ದಾನೆ ಎಂಬ ಮಾಹಿತಿ ದೊರೆತಿದೆ. ಘಟನೆಯಲ್ಲಿ ಸುಮಾರು ಎಂಟು ಜನರಿಗೆ ಗಾಯಗಳಾಗಿವೆ. ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಿಸಿ ಟಿವಿ ಕ್ಯಾಮರಾ ಪರೀಕ್ಷಿಸಲಾಗುತ್ತಿದೆ. ಈ ಬಗ್ಗೆ ತನಿಖೆ ನಡೆಯುತ್ತಿದ್ದು ಗೃಹ ಸಚಿವರು ಸ್ಥಳಕ್ಕೆ ಭೇಟಿ ನೀಡಿದ್ದಾರೆ ಎಂದರು.
ರಾಜ್ಯದಲ್ಲಿ ಈ ರೀತಿಯ ಘಟನೆ ನಡೆಯಬಾರದಿತ್ತು. ಮಂಗಳೂರಿನಲ್ಲಿ ಆಗಿದ್ದು ಬಿಟ್ಟರೆ ಪುನ: ಇಂಥ ಘಟನೆ ಸಂಭವಿಸಿದೆ. ಯಾರು ಇದನ್ನು ಮಾಡಿದ್ದಾರೆ ಎಂದು ಪತ್ತೆ ಹಚ್ಚಿ ಅವರ ಮೇಲೆ ಕಠಿಣ ಕ್ರಮ ಕೈಗೊಳ್ಲಲಾಗುವುದು ಎಂದರು.
ವಿರೋಧ ಪಕ್ಷಗಳು ಈ ವಿಷಯಗಳ ಬಗ್ಗೆ ರಾಜಕಾರಣ ಮಾಡಬಾರದು. ಎಲ್ಲರೂ ಸಹಕರಿಸಬೇಕು ಎಂದರು. ಪೋಲಿಸರೊಂದಿಗೆ ಮಾತನಾಡಿದ್ದು, ಸದ್ಯದಲ್ಲಿಯೇ ಪೂರ್ಣ ಚಿತ್ರಣ ಸಿಗಲಿದೆ. ವಿಚಾರಣೆ ತ್ವರಿತಗತಿಯಲ್ಲಿ ನಡೆದಿದೆ ಎಂದರು ಹೇಳಿದರು.












Click it and Unblock the Notifications