ಸಿಎಂ ಆದ ಬಳಿಕ ತವರು ಕ್ಷೇತ್ರಕ್ಕೆ ಮೊದಲ ಬಾರಿಗೆ ಆಗಮಿಸಲಿರುವ ಸಿದ್ದರಾಮಯ್ಯ, ಕಾರ್ಯಕ್ರಮಗಳ ವಿವರ ಇಲ್ಲಿದೆ
ಮೈಸೂರು, ಜೂನ್, 08: ಸಿದ್ದರಾಮಯ್ಯ ಅವರು ಎರಡನೇ ಬಾರಿ ಸಿಎಂ ಆದ ಬಳಿಕ ತವರು ಜಿಲ್ಲೆ ಮೈಸೂರಿಗೆ ಪ್ರಥಮ ಬಾರಿಗೆ ಜೂನ್ 10ರಂದು ಆಗಮಿಸಲಿದ್ದು, ಅವರನ್ನು ಅದ್ಧೂರಿಯಾಗಿ ಸ್ವಾಗತಿಸಲು ಜಿಲ್ಲಾ ಕಾಂಗ್ರೆಸ್ ಸಕಲ ಸಿದ್ಧತೆಗಳನ್ನು ಕೈಗೊಂಡಿದೆ.
ಸಿದ್ದರಾಮಯ್ಯ ಅವರು ಶನಿವಾರು ಬೆಳಗ್ಗೆ 10:30ಕ್ಕೆ ಸುತ್ತೂರು ಹೆಲಿಪ್ಯಾಡ್‌ಗೆ ಆಗಮಿಸಲಿದ್ದಾರೆ. ಬೆಳಗ್ಗೆ 11 ಗಂಟೆಗೆ ವರುಣ ವಿಧಾನಸಭಾ ಕ್ಷೇತ್ರದ ಬಿಳಿಗೆರೆ ಬೋರೆಯಲ್ಲಿ ಆಯೋಜಿಸಿರುವ ಮತದಾರರಿಗೆ ಕೃತಜ್ಞತೆ ಸಲ್ಲಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ಶ್ರೀ ಕ್ಷೇತ್ರ ಸುತ್ತೂರು ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆಯಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಸುತ್ತೂರು ಹೆಲಿಪ್ಯಾಡ್‌ನಿಂದ ವಾಪಸ್ ಬೆಂಗಳೂರಿಗೆ ತೆರಳಲಿದ್ದಾರೆ ಎನ್ನುವ ಮಾಹಿತಿ ತಿಳಿದುಬಂದಿದೆ.

ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಾ. ಬಿ.ಜೆ.ವಿಜಯ್ ಕುಮಾರ್ ಮಾತನಾಡಿ, ಜೂನ್ 10ರಂದು ಆಗಮಿಸುತ್ತಿರುವ ಸಿದ್ದರಾಮಯ್ಯ ಅವರನ್ನು ಅದ್ಧೂರಿಯಾಗಿ ಸ್ವಾಗತಿಸಲು ನಿರ್ಧರಿಸಲಾಗಿದ್ದು, ಈ ವೇಳೆ ಐವತ್ತು ಸಾವಿರ ಮಂದಿ ಸೇರಲಿದ್ದಾರೆ. ಹಾಗೆಯೆ ಸಿದ್ದರಾಮಯ್ಯ ಅವರನ್ನು ಅರ್ಧ ಕಿಲೋ ಮೀಟರ್ ತೆರೆದ ವಾಹನದಲ್ಲಿ ಮೆರವಣಿಗೆ ಮಾಡಲಾಗುತ್ತದೆ ಎಂದರು
ಹಾಗೆಯೆ ಬ್ಲಾಕ್ ಅಧ್ಯಕ್ಷರು, ಪಕ್ಷದ ಹಿರಿಯ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಜನರನ್ನು ಕರೆದುಕೊಂಡು ಬರಬೇಕು. ಅಲ್ಲದೆ ಕಲಾತಂಡಗಳ ವ್ಯವಸ್ಥೆಯನ್ನೂ ಮಾಡಬೇಕು. ತವರಿನಲ್ಲಿ ಸಿದ್ದರಾಮಯ್ಯ ಅವರಿಗೆ ಅದ್ಧೂರಿ ಸ್ವಾಗತ ದೊರೆಯಬೇಕು ಎಂದು ಸೂಚನೆ ನೀಡಿದರು.
ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕೆ.ಮರೀಗೌಡ ಮಾತನಾಡಿ, ಸಿದ್ದರಾಮಯ್ಯ ಅವರು ಮತ್ತೆ ಮುಖ್ಯಮಂತ್ರಿ ಆಗುವ ಮೂಲಕ ಹೊಸಯುಗ ಪ್ರಾರಂಭ ಆಗಿದೆ. ನಾವೆಲ್ಲರೂ ಸಹಕಾರ ಕೊಟ್ಟರೆ ಉತ್ತಮವಾಗಿ ಆಡಳಿತ ನೀಡಲು ಸಾಧ್ಯವಾಗುತ್ತದೆ. 2024ರ ಪಾರ್ಲಿಮೆಂಟ್ ದೃಷ್ಟಿಯಲ್ಲಿಟ್ಟುಕೊಂಡು ಕಾರ್ಯೋನ್ಮುಖರಾಗಬೇಕಿದೆ ಎಂದು ತಿಳಿಸಿದರು.
ಮಾಜಿ ಶಾಸಕ ಬನ್ನೂರು ಕೃಷ್ಣಪ್ಪ ಮಾತನಾಡಿ, ಸಿದ್ದರಾಮಯ್ಯ ಅವರು 2ನೇ ಬಾರಿ ಮುಖ್ಯಮಂತ್ರಿ ಆಗಿರುವುದು ಹೆಮ್ಮೆಯ ವಿಚಾರವಾಗಿದೆ. ಅವರನ್ನು ಆತ್ಮೀಯವಾಗಿ ಸ್ವಾಗತಿಸುವುದು ಆದ್ಯ ಕರ್ತವ್ಯ. ಅಲ್ಲದೇ, ಪಕ್ಷವನ್ನು ಅಧಿಕಾರಕ್ಕೆ ತರಲು ಕಷ್ಟಪಟ್ಟವರಿಗೆ ಅವಕಾಶ ಸಿಗಬೇಕು ಎಂದು ಆಶಿಸಿದರು.
ಈ ವೇಖೆ ನಗರಾಧ್ಯಕ್ಷ ಆರ್.ಮೂರ್ತಿ, ಕೆಪಿಸಿಸಿ ಕಾರ್ಯದರ್ಶಿ ಚಂದ್ರವೌಳಿ, ಪ್ರೊ.ರಾಮಪ್ಪ , ಮಹಿಳಾ ಆಯೋಗ ಮಾಜಿ ಅಧ್ಯಕ್ಷೆ ಮಂಜುಳಾ ಮಾನಸ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಕೂರ್ಗಳ್ಳಿ ಮಹದೇವ್, ಮಾಜಿ ಮೇಯರ್ ಚಿಕ್ಕಣ್ಣ, ಮುಖಂಡರಾದ ಶಿವನಾಗಪ್ಪ, ಪ್ರೊ.ಶಿವಪ್ರಸಾದ್, ಸೇವಾದಳ ಮುಖಂಡ ಗಿರೀಶ್, ಕಾಂಗ್ರೆಸ್ ಮುಖಂಡ ಸುಂದರ, ಹರ್ಷ, ಈಶ್ವರ ಚಕ್ಕಡಿ, ಡಿ.ನಾಗಭೂಷಣ್, ಜವರೇಗೌಡ, ಎನ್.ಆರ್.ಕ್ಷೇತ್ರದ ಬ್ಲಾಕ್ ಅಧ್ಯಕ್ಷ ಮಂಜುನಾಥ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಯೂ ಟರ್ನ್ ಹೊಡೆದ ಪುಟ್ಟರಂಗಶೆಟ್ಟಿ
ಮತ್ತೊಂದೆಡೆ ಕಾಂಗ್ರೆಸ್ ಸರ್ಕಾರದ ಸಂಪುಟ ರಚನೆ ವೇಳೆ ಚಾಮರಾಜನಗರ ಶಾಸಕ ಪುಟ್ಟರಂಗಶೆಟ್ಟಿಗೆ ಉಪಸಭಾಪತಿ ಸ್ಥಾನ ನೀಡಲಾಗಿತ್ತು. ಈ ವೇಳೆ ಅವರು ನನಗೆ ಇದನ್ನು ನಿಭಾಯಿಸಲು ಕಷ್ಟ ಆಗುತ್ತದೆ. ಅದ್ದರಿಂದ ಈ ಸ್ಥಾನವನ್ನು ಒಪ್ಪಿಕೊಳ್ಳುವುದಿಲ್ಲ ಎಂದು ಪುಟ್ಟರಂಗಶೆಟ್ಟಿ ತಿಳಿಸಿದ್ದರು. ಆದರೆ ಇದೀಗ ಅವರು ಯೂ ಟರ್ನ್ ಹೊಡೆದಿದ್ದಾರೆ.
ಚಾಮರಾಜನಗರದಲ್ಲಿ ಮಾತನಾಡಿದ ಪುಟ್ಟರಂಗಶೆಟ್ಟಿ ಅವರು. ನಾನು ಉಪಸಭಾಪತಿ ಸ್ಥಾನವನ್ನು ಒಪ್ಪಿಕೊಂಡಿದ್ದೇನೆ. ಒಂದು ವರ್ಷದ ನಂತರ ಕಾಂಗ್ರೆಸ್ ವರಿಷ್ಠರು ಸಚಿವ ಸ್ಥಾನ ಕೊಡುವ ಬಗ್ಗೆ ಮಾತು ಕೊಟ್ಟಿದ್ದಾರೆ. ಹಾಗಾಗಿ ಈ ಸ್ಥಾನವನ್ನು ಒಪ್ಪಿಕೊಂಡಿದ್ದೇನೆ. ನಾನು ಕಾಂಗ್ರೆಸ್ ಪಕ್ಷದ ಕಟ್ಟಾಳಾಗಿದ್ದು, ವರಿಷ್ಠರು ಹೇಳಿದ್ದನ್ನು ಒಪ್ಪೊಕೊಳ್ಳಲೇಬೇಕು ಎಂದರು.
ಉಪಸಭಾಪತಿ ಹುದ್ದೆ ತಿರಸ್ಕರಿಸಿದ್ದ ಶಾಸಕ
ಇತ್ತೀಚೆಗಷ್ಟೇ ಸಿಎಂ ಸಿದ್ದರಾಮಯ್ಯ ಸಂಪುದಲ್ಲಿ ಸಚಿವರಾಗಿ 24 ಜನ ಪ್ರಮಾಣ ವಚನ ಸ್ವೀಕರಿಸಿದ್ದು, ಮತ್ತೊಂದೆದೆ ಸಚಿವ ಸ್ಥಾನ ಸಿಗದಿದ್ದಕ್ಕೆ ಕಾಂಗ್ರೆಸ್‌ನಲ್ಲಿ ಹಲವರು ಮುನಿಸಿಕೊಂಡಿದ್ದರು. ಆಗ ಅಸಮಾಧಾನಗೊಂಡಿದ್ದ ಸಿ.ಪುಟ್ಟರಂಗಶೆಟ್ಟಿಗೆ ಉಪಸಭಾಧ್ಯಕ್ಷ ಹುದ್ದೆಯನ್ನು ನೀಡಲಾಗಿತ್ತು. ಆದರೆ ಅವರು ನನಗೆ ಈ ಹುದ್ದೆ ಬೇಡ ಎಂದು ತಿಸ್ಕರಿಸಿದ್ದರು.
ಡೆಪ್ಯುಟಿ ಸ್ಪೀಕರ್ ಸ್ಥಾನ ನನಗೆ ಬೇಡ, ಶಾಸಕನಾಗಿಯೇ ಮುಂದುವರಿಯುತ್ತೇನೆ ಎನ್ನುವ ಮೂಲಕ ಶಾಸಕ ಸಿ.ಪುಟ್ಟರಂಗಶೆಟ್ಟಿ ಡೆಪ್ಯುಟಿ ಸ್ಪೀಕರ್ ಹುದ್ದೆಯನ್ನು ತಿರಸ್ಕರಿಸಿದ್ದರು.
ಚಾಮರಾಜನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ್ದ ಶಾಸಕ ಪುಟ್ಟರಂಗಶೆಟ್ಟಿ, ಈ ಮೊದಲು ನನಗೆ ಸಚಿವ ಸ್ಥಾನ ನೀಡುವ ಭರವಸೆ ನೀಡಿದ್ದರು. ಆದರೆ ಕೊನೆ ಗಳಿಗೆಯಲ್ಲಿ ಕೈ ತಪ್ಪಿದೆ. ಇದಕ್ಕೆ ಕಾರಣ ಏನೆಂದು ಗೊತ್ತಿಲ್ಲ. ಸಚಿವ ಸ್ಥಾನ ನೀಡದ ಹಿನ್ನೆಲೆ ಕಾಂಗ್ರೆಸ್ ಹೈಕಮಾಂಡ್ ಡೆಪ್ಯುಟಿ ಸ್ಪೀಕರ್ ಸ್ಥಾನ ನೀಡಿದೆ. ಆ ಹುದ್ದೆ ನನಗೆ ಬೇಡ. ಡೆಪ್ಯುಟಿ ಸ್ಪೀಕರ್ ಸ್ಥಾನ ಕಾರ್ಯಭಾರದ ಒತ್ತಡದಿಂದ ಕ್ಷೇತ್ರದ ಕೆಲಸ ಮಾಡಲು ಕಷ್ಟವಾಗುತ್ತದೆ ಎಂದಿದ್ದರು.
ಡೆಪ್ಯುಟಿ ಸ್ಪೀಕರ್ ಆದರೆ ಕ್ಷೇತ್ರದ ಜನರ ಸಮಸ್ಯೆಗಳನ್ನು ಆಲಿಸಲು ಆಗುವುದಿಲ್ಲ. ಆದ್ದರಿಂದ ಡೆಪ್ಯುಟಿ ಸ್ಪೀಕರ್ ಸ್ಥಾನ ಬೇಡ ಎಂಬುದು ಕ್ಷೇತ್ರದ ಮತದಾರರು ಹಾಗೂ ಬೆಂಬಲಿಗರ ಒತ್ತಾಯ ಆಗಿದೆ. ನಾನು ಉಪ್ಪಾರ ಸಮಾಜದ ಏಕೈಕ ಶಾಸಕ. ಯಾವಾಗಲೂ ಜನರ ಜೊತೆ ಬೆರೆತು ಕೆಲಸ ಮಾಡುವವನು ಆಗಿದ್ದೇನೆ. ಡೆಪ್ಯುಟಿ ಸ್ಪೀಕರ್ ಸ್ಥಾನ ಒಪ್ಪಿಕೊಳ್ಳುವಂತೆ ಸಿದ್ದರಾಮಯ್ಯ ಹಾಗೂ ಜಮೀರ್ ಅಹಮ್ಮದ್ ನನಗೆ ಒತ್ತಾಯಿಸಿದ್ದರು. ಆದರೆ ನಾನು ನಯವಾಗಿಯೇ ಆ ಹುದ್ದೆಯನ್ನು ತಿರಸ್ಕರಿಸಿದ್ದೆ ಎಂದು ತಿಳಿಸಿದ್ದರು.












Click it and Unblock the Notifications