ಸಿಎಂ ಸಿದ್ದರಾಮಯ್ಯ ಅರ್ಜಿ ವಜಾ; ತವರು ಜಿಲ್ಲೆಯಲ್ಲಿ ಪರ-ವಿರೋಧ ಪ್ರತಿಭಟನೆ
ಮುಡಾ ಸೈಟು ಹಂಚಿಕೆ ಪ್ರಕರಣದಲ್ಲಿ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಂಕಷ್ಟ ಎದುರಾಗಿದೆ. ತಮ್ಮ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಮನವಿಯನ್ನು ಹೈಕೋರ್ಟ್‌ಗೆ ವಜಾಗೊಳಿಸಿದೆ. ಹೈಕೋರ್ಟ್ ಅರ್ಜಿ ವಜಾಗೊಳಿಸುತ್ತಿದ್ದಂತೆ ರಾಜ್ಯ ರಾಜಕೀಯದಲ್ಲಿ ಸಂಚಲನ ಉಂಟಾಗಿದ್ದು, ವಿಪಕ್ಷಗಳು ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಆಗ್ರಹಿಸಿವೆ. ತವರು ಜಿಲ್ಲೆ ಮೈಸೂರಿನಲ್ಲಿ ಕೂಡ ಪರ - ವಿರೋಧ ಪ್ರತಿಭಟನೆ ನಡೆಸಲಾಗಿದೆ.
ಮೈಸೂರಿನಲ್ಲಿ ಮಂಗಳವಾರ ಬಿಜೆಪಿ ಮುಖಂಡರು ಪ್ರತಿಭಟನೆ ನಡೆಸಿ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರೆ, ಮತ್ತೊಂದೆಡೆ ಸಿದ್ದರಾಮಯ್ಯ ಅಭಿಮಾನಿ ಬಳಗದ ಸದಸ್ಯರು ನಗರದ ಜುಲ್ಲಾ ಪಂಚಾಯಿತಿ ಎದುರು ಬಿಜೆಪಿ ವಿರುದ್ಧ ಪ್ರತಿಭಟನೆ ನಡೆಸುವ ಮೂಲಕ ಸಿದ್ದರಾಮಯ್ಯನವರಿಗೆ ಬೆಂಬಲ ಸೂಚಿಸಿದರು.

ಸಿದ್ದರಾಮಯ್ಯ ಅಭಿಮಾನಿ ಬಳಗದ ಮುಖ್ಯಸ್ಥ ಲೊಕೇಶ್ ಮಾತನಾಡಿ, ಸಿದ್ದರಾಮಯ್ಯ ಅವರ ರಾಜೀನಾಮೆ ಕೇಳುವ ನೈತಿಕತೆ ವಿಜಯೇಂದ್ರ ಅಥವಾ ಯಾವುದೇ ಬಿಜೆಪಿ ನಾಯಕರಿಗಿಲ್ಲ. ಸಿಎಂ ಸಿದ್ದರಾಮಯ್ಯ ಯಾವುದೇ ಹಗರಣ ಮಾಡಿಲ್ಲ. ಕಾನೂನು ಹೋರಾಟದಲ್ಲಿ ಸಿದ್ದರಾಮಯ್ಯ ಅವರಿಗೆ ಗೆಲುವು ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೇಳಿ ಬಿಜೆಪಿ ನಾಯಕರು ಏನಾದರೂ ಪ್ರತಿಭಟನೆ ಮಾಡಿದರೆ ನಾವು ಸಹ ಪ್ರತಿಯಾಗಿ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಬಿಜೆಪಿ ಪ್ರತಿಭಟನೆ
ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ, ಬಿಜೆಪಿ ಹಾಗೂ ಗ್ರಾಮಾಂತರ ವಿಭಾಗದಿಂದ ಪಕ್ಷದ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ವಿಧಾನ ಪರಿಷತ್‌ನ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮಾತನಾಡಿ, ಕಾಂಗ್ರೆಸ್ ಭ್ರಷ್ಟಾಚಾರ ಬೆಳಕಿದೆ ಬಂದಿದೆ. ಸಿಎಂ ಕಾನೂನು ಚೌಕಟ್ಟಿನಲ್ಲಿ ರಾಜೀನಾಮೆ ಕೊಡುವ ಪರಿಸ್ಥಿತಿ ಬಂದಿದೆ ಎಂದರು.
ಮಾಜಿ ಸಚಿವ ಎನ್.ಮಹೇಶ್ ಮಾತನಾಡಿ, ಕಾಂಗ್ರೆಸ್ ಭ್ರಷ್ಟಾಚಾರಗಳ ವಿರುದ್ದ ಅಹೋರಾತ್ರಿ ಧರಣಿ ಮಾಡಿದ್ದೇವೆ. ಹೋರಾಟದ ಫಲವಾಗಿ ನ್ಯಾಯಾಲಯದಿಂದ ಸರಿಯಾದ ತೀರ್ಪು ಬಂದಿದ್ದೆ, ನೈತಿಕತೆ ಇದ್ದರೆ ಸಿದ್ದರಾಮಯ್ಯನವರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ಹೈಕೋರ್ಟ್ ತಮ್ಮ ಅರ್ಜಿ ವಜಾಗೊಳಿಸಿದ ಬಳಿಕ ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿ ನಡೆಸಿದ ಸಿಎಂ ಸಿದ್ದರಾಮಯ್ಯ, ನಾನು ಯಾವುದೇ ತಪ್ಪು ಮಾಡಿಲ್ಲ, ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ. ಕಾನೂನು ತಜ್ಞರ ಸಲಹೆ ಪಡೆದು ಮುಂದಿನ ಕಾನೂನು ಹೋರಾಟ ರೂಪಿಸುವುದಾಗಿ ತಿಳಿಸಿದರು.












Click it and Unblock the Notifications