ಸಿದ್ದರಾಮಯ್ಯನವರೇ ಪೂರ್ಣಾವಧಿ ಸಿಎಂ ಎಂದ ಸಚಿವ ಎಂ.ಬಿ. ಪಾಟೀಲ್; ಡಿಕೆಶಿ ಕಥೆಯೇನು?
2023ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ 135 ಸ್ಥಾನಗಳೊಂದಿಗೆ ಪೂರ್ಣ ಬಹುಮತ ಪಡೆದ ಕಾಂಗ್ರೆಸ್ ರಾಜ್ಯದಲ್ಲಿ ನೂತನ ಸರ್ಕಾರ ರಚಿಸಿದೆ. ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಮತ್ತು 8 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಸರ್ಕಾರ ರಚನೆಗೂ ಮೊದಲು ಸಿಎಂ ಸ್ಥಾನಕ್ಕಾಗಿ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ತೀವ್ರ ಪೈಪೋಟಿ ನಡೆಸಿದ್ದರು. ಅಂತಿಮವಾಗಿ ಕಾಂಗ್ರೆಸ್ ಹೈಕಮಾಂಡ್ ವಯಸ್ಸು ಮತ್ತು ಅನುಭವದ ಆಧಾರದ ಮೇಲೆ ಮೊದಲು ಸಿದ್ದರಾಮಯ್ಯರನ್ನು ಮುಖ್ಯಮಂತ್ರಿಯನ್ನಾಗಿ ಮಾಡಲಾಯಿತು.

ಇದೇ ವೇಳೆ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಶ್ರಮವೂ ದೊಡ್ಡದಾಗಿತ್ತು. ಈ ಹಿನ್ನೆಲೆಯಲ್ಲಿ ಸಿಎಂ ಸ್ಥಾನವನ್ನು 30:30 ಸೂತ್ರದಡಿ ಹಂಚಿಕೆ ಮಾಡಲಾಗಿದೆ ಎಂದುಕೊಳ್ಳಲಾಗಿತ್ತು. ಆದರೆ, ಇದೀಗ ಸಚಿವ ಎಂ.ಬಿ. ಪಾಟೀಲ್ ಅವರು ಇದಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿದ್ದಾರೆ.
ಮೈಸೂರಿನ ಸುತ್ತೂರು ಮಠದಲ್ಲಿ ಮಾತನಾಡಿದ ನೂತನ ಸಚಿವ ಎಂ.ಬಿ. ಪಾಟೀಲ್, "ಸಿದ್ದರಾಮಯ್ಯನವರೇ ಪೂರ್ಣಾವಧಿ ಮುಖ್ಯಮಂತ್ರಿಯಾಗಿರಲಿದ್ದಾರೆ. ಅಧಿಕಾರ ಹಂಚಿಕೆ ಬಗ್ಗೆ ಯಾವುದೇ ಮಾತುಕತೆ ನಡೆದಿಲ್ಲ," ಎಂದು ಹೇಳಿದ್ದಾರೆ.

"2024ರ ಲೋಕಸಭೆ ಚುನಾವಣೆಯ ಬಳಿಕವೂ ಯಾವುದೇ ಬದಲಾವಣೆ ಇಲ್ಲ. ಮುಖ್ಯಮಂತ್ರಿ ಬದಲಾಯಿಸುವ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಮಟ್ಟದಲ್ಲಿ ಚರ್ಚೆಗಳು ನಡೆದಿಲ್ಲ. ಮುಂದಿನ ಐದು ವರ್ಷಗಳವರೆಗೆ ಸಿದ್ದರಾಮಯ್ಯನವರೇ ಸಿಎಂ ಆಗಿ ಮುಂದುವರೆಯಲಿದ್ದಾರೆ. ಇದನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರೇ ಸ್ಪಷ್ಟಪಡಿಸಿದ್ದಾರೆ," ಎನ್ನುವ ಮೂಲಕ ಎಂ.ಬಿ. ಪಾಟೀಲ್ ಅಚ್ಚರಿಯ ಹೇಳಿಕೆ ನೀಡಿದ್ದಾರೆ.
"ಬಿಜೆಪಿ ಅಧಿಕಾರವಧಿಯಲ್ಲಿ ನಡೆದ ಎಲ್ಲಾ ಹಗರಣಗಳ ಬಗ್ಗೆ ತನಿಖೆ ನಡೆಸುತ್ತೇವೆ. ಪಿಎಸ್‌ಐ ನೇಮಕಾತಿ ಹಗರಣ, ಆರೋಗ್ಯ ಇಲಾಖೆ, ನೀರಾವರಿ ಇಲಾಖೆ ಸೇರಿದಂತೆ ಇತರೆ ಇಲಾಖೆಗಳಲ್ಲಿ ಅಕ್ರಮಗಳ ಕುರಿತು ತನಿಖೆ ನಡೆಸುತ್ತೇವೆ," ಎಂದು ಸಚಿವ ಎಂ.ಬಿ. ಪಾಟೀಲ್ ತಿಳಿಸಿದರು.
ಬಿಜೆಪಿ ಅಧಿಕಾರವಧಿಲ್ಲಿ ನಡೆದ ಎಲ್ಲಾ ಹಗರಣಗಳ ಬಗ್ಗೆ ತನಿಖೆ ನಡೆಸುತ್ತೇವೆ. ಪಿಎಸ್ಐ ಹಗರಣ, ಆರೋಗ್ಯ ಇಲಾಖೆ, ನೀರಾವರಿ ಇಲಾಖೆ ಹಾಗೂ ಇತರೆ ಇಲಾಖೆಗಳಲ್ಲಿ ನಡೆದ ಹಗರಣಗಳ ಬಗ್ಗೆ ತನಿಖೆ ನಡೆಸುತ್ತೇವೆ.
ಎಲ್ಲ ಹಗರಣಗಳ ತನಿಖೆ ನಡೆಸಿ ತಾರ್ಕಿಕ ಅಂತ್ಯ ಕಾಣಿಸುತ್ತೇವೆ. ತಪ್ಪಿತಸ್ಥರಿಗೆ ಶಿಕ್ಷೆ ನೀಡುತ್ತೇವೆ, ನೊಂದ ಅಭ್ಯರ್ಥಿಗಳಿಗೆ ನ್ಯಾಯ ಕೊಡಿಸುತ್ತೇವೆ ಎಂದು ಹೇಳಿದರು.
ಇನ್ನು ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳ ಬಗ್ಗೆ ಮಾತನಾಡಿದ ಎಂ.ಬಿ. ಪಾಟೀಲ್, ಈ ಬಗ್ಗೆ ಮೊದಲ ಸಚಿವ ಸಂಪುಟ ಸಭೆಯಲ್ಲಿ ತಾತ್ವಿಕ ಒಪ್ಪಿಗೆ ನೀಡಲಾಗಿದೆ. ಇದರಲ್ಲಿ ಯಾವುದೇ ಬದಲಾವಣೆ ಇಲ್ಲ. ನೀಡಿದ ಎಲ್ಲ ಭರವಸೆಗಳನ್ನು ಈಡೇರಿಸುತ್ತೇವೆ ಎಂದು ತಿಳಿಸಿದರು.












Click it and Unblock the Notifications