ರೇಷ್ಮೆಗೆ ಮುಂದಿನ ದಿನಗಳಲ್ಲಿ ಹೆಚ್ಚಿನ ಬೆಲೆ ಸಿಗಲಿದೆ ಎಂದ ಕೇಂದ್ರ ಸಚಿವ
ಭಾರತದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಇಂದು ಉದ್ಯಮವಾಗಿ ಬೆಳೆದಿದ್ದು, ದೇಶದ ಜಿಡಿಪಿ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದು ಕೇಂದ್ರ ಸರ್ಕಾರದ ಮಾನ್ಯ ಭಾರಿ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್. ಡಿ. ಕುಮಾರಸ್ವಾಮಿ ತಿಳಿಸಿದರು. ಮೈಸೂರಿನಲ್ಲಿ ಕೇಂದ್ರ ರೇಷ್ಮೆ ಮಂಡಳಿಯ ವತಿಯಿಂದ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ಆಯೋಜಿಸಲಾಗಿದ್ದ "ಕೇಂದ್ರ ರೇಷ್ಮೆ ಮಂಡಳಿಯ ಪ್ಲಾಟಿನಮ್ ಜುಬಿಲಿ" ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿಯೂ ರೇಷ್ಮೆ ಬೆಳೆಯನ್ನು ಹೆಚ್ಚಾಗಿ ಬೆಳೆಯಲಾಗುತ್ತಿದೆ. ಈ ಭಾಗದಲ್ಲಿ ಅಭಿವೃದ್ಧಿ ಹೊಂದಲು ಮೈಸೂರು ಅರಸರ ಕೊಡುಗೆ ಹೆಚ್ಚು ಎಂದರು. ಚೀನಾದಲ್ಲಿ ಹೆಚ್ಚಿನ ರೇಷ್ಮೆ ಬೆಳೆಯುತ್ತಿದ್ದು, ಮುಂದಿನ ದಿನಗಳಲ್ಲಿ ಭಾರತವು ರೇಷ್ಮೆ ಬೆಳೆಯಲ್ಲಿ ಪ್ರಥಮ ಸ್ಥಾನ ಪಡೆಯುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರೇಷ್ಮೆ ಗೂಡಿಗೆ ಕಳೆದ ಎರಡು ಮೂರು ವರ್ಷಗಳಿಂದ ಉತ್ತಮವಾದ ಬೆಲೆ ಸಿಗುತ್ತಿದ್ದು, ಬೆಳೆಗಾರರು ಲಾಭ ಮಾಡುತ್ತಿದ್ದಾರೆ. ಕೇಂದ್ರ ಸರ್ಕಾರ 1.52 ಲಕ್ಷ ಕೋಟಿ ರೂಪಾಯಿ ಹಣವನ್ನು ಕೃಷಿ ಕ್ಷೇತ್ರಕ್ಕೆ ಮೀಸಲಿಟ್ಟಿದೆ. ಪ್ರತಿ ಕ್ಯಾಬಿನೆಟ್ ಸಭೆಯಲ್ಲಿ ರೈತರ ಅಭಿವೃದ್ಧಿಗೆ ಸಂಬಂಧಿಸಿದ ಚರ್ಚೆಗಳು ನಡೆಯುತ್ತವೆ ಎಂದರು.
ಜವಳಿ ಖಾತೆ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಮಾತನಾಡಿ ಶ್ಯಾಮ್ ಪ್ರಕಾಶ್ ಮುಖರ್ಜಿ 1949 ರಲ್ಲಿ ಕೇಂದ್ರ ರೇಷ್ಮೆ ಮಂಡಳಿಯನ್ನು ಪ್ರಾರಂಭಿಸಿದರು. ಮೈಸೂರಿನ ರಾಜರಾದ ನಾಲ್ವಡಿ ಕೃಷ್ಣರಾಜ ಒಡೆಯರ್ ಮೈಸೂರಿಗೆ ರೇಷ್ಮೆಯನ್ನು ಪರಿಚಯಿಸಿದರು. ಮೈಸೂರು ರೇಷ್ಮೆ ಸೀರೆಗಳು ಇಂದು ವಿಶ್ವ ಪ್ರಸಿದ್ಧಿಯನ್ನು ಪಡೆದಿವೆ. ದೊಡ್ಡ ದೊಡ್ಡ ಕೈಗಾರಿಕೋದ್ಯಮಿಗಳು ರೇಷ್ಮೆ ಉದ್ಯಮದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ ಎಂದರು.
ದೇಶದ ರೈತರ ಅದಾಯವನ್ನು ಹೆಚ್ಚಿಸುವ ಯೋಜನೆಗಳನ್ನು ಪ್ರಧಾನಿ ಮೋದಿ ಜಾರಿಗೆ ತಂದಿದ್ದಾರೆ. ಕರ್ನಾಟಕದಲ್ಲಿ ತುಮಕೂರು ಹಾಗೂ ರಾಮನಗರ ಜಿಲ್ಲೆಯಲ್ಲಿ ತೆಂಗನ್ನು ಹೆಚ್ಚಾಗಿ ಬೆಳೆಯುತ್ತಾರೆ ಆದರೆ ರೇಷ್ಮೆಯನ್ನು ಕರ್ನಾಟಕದ ಹೆಚ್ಚು ಜಿಲ್ಲೆಗಳಲ್ಲಿ ಬೆಳೆಯುತ್ತಾರೆ. ಚೀನಾದ ರೇಷ್ಮೆಗಿಂತ ಭಾರತದ ರೇಷ್ಮೆಗೆ ಬೆಲೆ ಕಡಿಮೆ ಇದೆ. ಆದರೆ ಮುಂದಿನ ದಿನಗಳಲ್ಲಿ ಚೀನಾದ ರೇಷ್ಮೆ ಕಡಿಮೆ ಆಗುತ್ತದೆ ಅಲ್ಲಿ ಕೆಲಸಗಾರರ ಕೊರತೆ ಉಂಟಾಗುತ್ತಿದೆ. ಇದರಿಂದ ಭಾರತದ ರೇಷ್ಮೆಗೆ ಉತ್ತಮ ಬೆಲೆ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮೈಸೂರು ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮಾತನಾಡಿ ಮೈಸೂರಿಗೂ ರೇಷ್ಮೆಗೂ ಅವಿನಾಭಾವ ಸಂಬಂಧ ಇದೆ. ವಿಜಯನಗರ ಅರಸರ ಕಾಲದಿಂದ ರೇಷ್ಮೆ ಇಲ್ಲಿ ಪ್ರಚಲಿತದಲ್ಲಿ ಇದೆ. ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ರೇಷ್ಮೆ ಬೆಳೆಯ ಅಭಿವೃದ್ಧಿಗೆ ಕೊಡುಗೆ ನೀಡಿದ್ದಾರೆ. ರೇಷ್ಮೆ ಬೆಳೆಗೆ ಪ್ರೋತ್ಸಾಹ ನೀಡಲು ಎಲ್ಲಾ ರೀತಿಯ ಪ್ರಯತ್ನ ಮಾಡಲಾಗುವುದು ಎಂದರು.
ಕೇಂದ್ರ ರೇಷ್ಮೆ ಮಂಡಳಿಯ ವತಿಯಿಂದ 75 ರೂಪಾಯಿಯ ನಾಣ್ಯವನ್ನು ಬಿಡುಗಡೆಗೊಳಿಸಲಾಯಿತು. ಕೇಂದ್ರ ರೇಷ್ಮೆ ಮಂಡಳಿಯ ಕಾಫಿ ಟೇಬಲ್ ಬುಕ್ ಅನ್ನು ಬಿಡುಗಡೆ ಮಾಡಲಾಯಿತು.












Click it and Unblock the Notifications