ಸಾಂಸ್ಕೃತಿಕ ನಗರಿಯಲ್ಲಿ ಡಿ. 15 ರಿಂದ ರಾಜ್ಯಮಟ್ಟದ ಪ್ರತಿಭಾ ಕಾರಂಜಿ
ಮೈಸೂರು, ಡಿಸೆಂಬರ್ 05: ಮೈಸೂರಿನಲ್ಲಿ 2018ರ ರಾಜ್ಯಮಟ್ಟ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮವನ್ನು ಡಿ. 15 ರಿಂದ 17 ರವರೆಗೆ ಆಯೋಜಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಟಿ. ಯೋಗೀಶ್ ತಿಳಿಸಿದ್ದಾರೆ.
ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಆವರಣದಲ್ಲಿ ಈ ಬಾರಿಯ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮ ನಡೆಯಲಿದ್ದು, ಇದಕ್ಕಾಗಿ ಸುಮಾರು 75 ಲಕ್ಷ ರೂ. ಖರ್ಚು ಮಾಡಲಾಗುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ 2,250 ವಿದ್ಯಾರ್ಥಿಗಳ ಜೊತೆ ಶಿಕ್ಷಕರು ಹಾಗೂ ಇತರರು ಸೇರಿ ಸುಮಾರು 3 ಸಾವಿರ ಜನ ಸೇರುವ ನಿರೀಕ್ಷೆ ಇದೆ.

ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವದಲ್ಲಿ ಭಾಗವಹಿಸುವ ಎಲ್ಲಾ ಜಿಲ್ಲೆಗಳ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ಊಟೋಪಚಾರ, ವಸತಿ, ಸಾರಿಗೆ ಹಾಗೂ ಸುರಕ್ಷತೆ ಸೇರಿದಂತೆ ಎಲ್ಲಾ ವ್ಯವಸ್ಥೆಗಳನ್ನು ಅಚ್ಚುಕಟ್ಟಾಗಿ ಆಯೋಜಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಟಿ.ಯೋಗೀಶ್ ತಿಳಿಸಿದ್ದಾರೆ.
8 ರಿಂದ 12ನೇ ತರಗತಿಯ ವಿದ್ಯಾರ್ಥಿಗಳು ಭಾಗವಹಿಸಲಿದ್ದು , 11 ಪ್ರಕಾರದ ವಿವಿಧ ಸ್ಪರ್ಧೆಗಳು 9 ರಿಂದ 12ನೇ ತರಗತಿಯ ವಿದ್ಯಾರ್ಥಿಗಳಿಗೆ 4 ಪ್ರಕಾರದ ಸ್ಪರ್ಧೆಗಳು ಇರುತ್ತವೆ ಎಂದು ರಾಜ್ಯಮಟ್ಟದ ಪ್ರತಿಭಾ ಕಾರಂಜಿ ನೋಡಲ್ ಅಧಿಕಾರಿ ಉದಯ್ ಕುಮಾರ್ ಡಿ. ಅವರು ಮಾಹಿತಿ ನೀಡಿದ್ದಾರೆ.
ಬಾಲಕರಿಗೆ ಹಾಗೂ ಬಾಲಕಿಯರಿಗೆ ಪ್ರತ್ಯೇಕ ವಾಸ್ತವ್ಯದ ವ್ಯವಸ್ಥೆ ಮಾಡಲಾಗಿದೆ. ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಆಯ್ಕೆಯಾದವರು ಭೂಪಾಲ್ ನಲ್ಲಿ ನಡೆಯಲಿರುವ ಪ್ರತಿಭಾ ಕಾರಂಜಿಯಲ್ಲಿ ಭಾಗವಹಿಸುವರು.












Click it and Unblock the Notifications