ಮೈಸೂರು: ಸ್ವಾಭಿಮಾನಿ ಜನಾಂದೋಲನ ಸಮಾವೇಶದ ಪ್ರಚಾರ ರಥಕ್ಕೆ ಚಾಲನೆ
ಮೈಸೂರು, ನವೆಂಬರ್ 30: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬೆಂಬಲಿಸಿ ಹಾಸನದಲ್ಲಿ ಡಿಸೆಂಬರ್ 5ರಂದು ಹಮ್ಮಿಕೊಂಡಿರುವ ಸ್ವಾಭಿಮಾನಿ ಜನಾಂದೋಲನ ಸಮಾವೇಶದ ಪ್ರಚಾರ ರಥಕ್ಕೆ ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಚಾಲನೆ ನೀಡಿದರು.
ಮಾನಸ ಗಂಗೋತ್ರಿಯ ಕುವೆಂಪು ಪುತ್ಥಳಿ ಎದುರು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಮತ್ತು ಪ್ರಗತಿಪರ ಸಂಘಟನೆಗಳ ಸಹಯೋಗದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಪ್ರಚಾರ ವಾಹನಕ್ಕೆ ಚಾಲನೆ ನೀಡಿ, ಮೈಸೂರು ಭಾಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷದ ಕಾರ್ಯಕರ್ತರು, ಸಿದ್ದರಾಮಯ್ಯ ಅವರ ಅಭಿಮಾನಿಗಳು ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.

ಮೈಸೂರು ಜಿಲ್ಲೆಯ ಎಲ್ಲ ತಾಲೂಕು ಕೇಂದ್ರಗಳು, ನಗರದ ಪ್ರದೇಶದ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರಚಾರ ವಾಹನ ಸಂಚಾರ ಮಾಡಲಿದೆ. ಡಿಸೆಂಬರ್ 4ರಂದು ಮುಕ್ತಾಯಗೊಂಡು 5ರಂದು ಸಮಾವೇಶದಲ್ಲಿ ಪಾಲ್ಗೊಳ್ಳಲಿದೆ. ಬಿ.ಆರ್.ಅಂಬೇಡ್ಕರ್, ದೇವರಾಜ ಅರಸು, ಸಿದ್ದರಾಮಯ್ಯ, ಶಾಸಕರು, ಜನಪ್ರತಿನಿಧಿಗಳ ಭಾವಚಿತ್ರಗಳು, ಸಮಾವೇಶದ ಉದ್ದೇಶದ ಬಗ್ಗೆ ವಾಹನದಲ್ಲಿ ಮಾಹಿತಿ ಇದೆ.
ಇನ್ನು ಹಾಸನದ ಸಮಾವೇಶ ಬಗ್ಗೆ ಎಐಸಿಸಿಗೆ ಪತ್ರ ಬರೆದ ವಿಚಾರ ಕುರಿತು ಪ್ರತಿಕ್ರಿಯಿಸಿದ ಯತೀಂದ್ರ ಸಿದ್ದರಾಮಯ್ಯ, ಸಮಾವೇಶಕ್ಕೆ ಹೈಕಮಾಂಡ್ ಒಪ್ಪಿಗೆ ಇದೆ. ಪತ್ರದ ಬಗ್ಗೆ ನನಗೆ ಗೊತ್ತಿಲ್ಲ. ಆ ಪತ್ರ ಫೇಕ್ ಇರಬಹುದು. ಈಗಾಗಲೇ ಮೈಸೂರಿನಲ್ಲಿ ಮುಡಾ ವಿಚಾರಕ್ಕೆ ಮುಡಾ ಸಮಾವೇಶ ಮಾಡಲಾಗಿದೆ. ಹೀಗಾಗಿ ಹಾಸನದಲ್ಲಿ ಭಾರಿ ಸಮಾವೇಶ ಮಾಡುತ್ತಿದ್ದೇವೆ ಅಷ್ಟೇ ಎಂದರು.

ಸಿದ್ದರಾಮಯ್ಯ ಅವರನ್ನು ಟಾರ್ಗೆಟ್ ಮಾಡಿದ್ದಕ್ಕೆ ಸಮಾವೇಶ ಮಾಡಲಾಗುತ್ತಿದೆ. ಮೈಸೂರಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸುತ್ತಾರೆ. ಸಮಾವೇಶ ಮೂಲಕ ವಿಪಕ್ಷಗಳ ಆರೋಪಕ್ಕೆ ಉತ್ತರ ಕೊಡಲಿದ್ದಾರೆ. ಉಪಚುನಾವಣೆ ಫಲಿತಾಂಶದಿಂದ ಉತ್ತರ ಸಿಕ್ಕಿದೆ. ಇದು ಕಾಂಗ್ರೆಸ್ ಪಕ್ಷದಿಂದಲೇ ಮಾಡುತ್ತಿರುವ ಸಮಾವೇಶ. ಸಮಾವೇಶಕ್ಕೆ ಪಕ್ಷಕ್ಕೆ ಸಂಪೂರ್ಣ ಒಪ್ಪಿಗೆ ಇದೆ ಎಂದರು.
ಈ ವೇಳೆ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ವೇದಿಕೆ ರಾಜ್ಯಾಧ್ಯಕ್ಷ ಕೆ.ಎಸ್.ಶಿವರಾಮ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ. ವಿಜಯ್ ಕುಮಾರ್, ವಿಧಾನ ಪರಿಷತ್ ಸದಸ್ಯ ಡಾ.ಡಿ.ತಿಮ್ಮಯ್ಯ, ಸಾಹಿತಿಗಳಾದ ಪ್ರೊ.ಕಾಳೇಗೌಡ ನಾಗವಾರ, ಪ್ರೊ.ಕೆ.ಎಸ್. ಭಗವಾನ್, ಸಮಾಜ ಸೇವಕ ಕೆ.ರಘುರಾಮ್ ವಾಜಪೇಯಿ, ಉಪ್ಪಾರ ಸಮಾಜದ ಜಿಲ್ಲಾಧ್ಯಕ್ಷ ಎಸ್.ಯೋಗೀಶ ಉಪ್ಪಾರ, ಮಡಿವಾಳ ಸಮಾಜದ ಜಿಲ್ಲಾಧ್ಯಕ್ಷ ಎಸ್.ರವಿನಂದನ, ಕುರುಬ ಸಮಾಜದ ಜಿಲ್ಲಾಧ್ಯಕ್ಷ ಶಿವಪ್ಪ ಕೋಟೆ, ಸಂವಿಧಾನ ಸಂರಕ್ಷಣಾ ಸಮಿತಿ ರಾಜ್ಯಾಧ್ಯಕ್ಷ ಎನ್.ಭಾಸ್ಕರ್ ಇನ್ನಿತರರು ಭಾಗವಹಿಸಿದ್ದರು.












Click it and Unblock the Notifications