ಮೈಸೂರು ಜಿಲ್ಲೆಗೆ ಟ್ಯಾಂಕರ್ ನೀರೇ ಆಸರೆ
ಮೈಸೂರು, ಮೇ 10: ಜಿಲ್ಲೆಯಲ್ಲಿ ತಲೆದೋರಿರುವ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ತಾಲೂಕು ಮಟ್ಟದಲ್ಲಿ ನಿಯಂತ್ರಣ ಕೊಠಡಿಗಳನ್ನು ತೆರೆಯಲಾಗುವುದು. ರಾಜ್ಯದ ಸುಮಾರು 1,800 ಬರಪೀಡಿತ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿದ್ದು, ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮೈಸೂರಿನಲ್ಲಿ ವಾಸ್ತವ್ಯ ಹೂಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ತಮ್ಮ ರಾಮಕೃಷ್ಣನಗರ ನಿವಾಸದಲ್ಲಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಭೆ ನಡೆಸಿದರು. ಪ್ರಮುಖವಾಗಿ ಸಭೆಯಲ್ಲಿ ಕುಡಿಯುವ ನೀರಿನ ಸಮಸ್ಯೆ, ಬರ ಪರಿಹಾರ ಕುರಿತು ಚರ್ಚೆ ನಡೆಯಿತು. ರಾಜ್ಯದಲ್ಲಿ ಕುಡಿಯುವ ನೀರಿನ ತೀವ್ರ ಅಭಾವ ಎದುರಿಸುತ್ತಿರುವ 1,800 ಹಳ್ಳಿಗಳನ್ನು ಗುರುತಿಸಲಾಗಿದ್ದು, ಇದಕ್ಕಾಗಿ 5.2ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ. ನೀರಿನ ಕೊರತೆ ಇರುವ ಗ್ರಾಮಗಳಿಗೆ ಟ್ಯಾಂಕರ್ ಗಳ ಮೂಲಕ ಕುಡಿಯುವ ನೀರು ಸರಬರಾಜು ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.

ಇಲವಾಲ, ಜಯಪುರ ಹೋಬಳಿ ಸೇರಿದಂತೆ ಹಲವು ಭಾಗದ ಜನರು ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿದ್ದು, ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಅಂತರ್ಜಲ ಮಟ್ಟ ಕುಸಿದಿರುವುದರಿಂದ ಕುಡಿಯುವ ನೀರಿನ ಸಮಸ್ಯೆ ಉದ್ಬವವಾಗಲು ಕಾರಣ. ಹೀಗಾಗಿ ನೀರಿನ ಸಮಸ್ಯೆ ಇರುವ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ಕುಡಿಯುವ ನೀರು ಸರಬರಾಜು ಮಾಡಬೇಕು ಎಂದು ಸೂಚಿಸಿದರು.
ನಗರಕ್ಕೆ ಕಬಿನಿ ಕುಡಿಯುವ ನೀರಿನ ಯೋಜನೆ ಪ್ರಗತಿಯಲ್ಲಿದ್ದು, ಶೀಘ್ರದಲ್ಲೇ ಪೂರ್ಣಗೊಳ್ಳಲಿದೆ. ಈ ಯೋಜನೆಯಿಂದ ಮೈಸೂರಿನ ಉತ್ತರ ಭಾಗದ ಪ್ರದೇಶ ಹಾಗೂ ಕೆಲವು ಗ್ರಾಮಗಳ ನೀರಿನ ಸಮಸ್ಯೆ ನೀಗಲಿದೆ. ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಕುಡಿಯುವ ನೀರಿನ ಬಗ್ಗೆ ಸಾಕಷ್ಟು ಚರ್ಚೆ ನಡೆಸಲಾಗಿದೆ.
ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವ ಉದ್ದೇಶದಿಂದ ತಾಲೂಕು ಹಾಗೂ ಜಿಲ್ಲಾ ಕೇಂದ್ರಗಳಲ್ಲಿ ಕಂಟ್ರೋಲ್ ರೂಂ. ತೆರೆಯಲಾಗಿದ್ದು, ಸಾರ್ವಜನಿಕರು ಕುಡಿಯುವ ನೀರಿನ ಸಮಸ್ಯೆ ಉಂಟಾದಲ್ಲಿ ಮಾಹಿತಿ ನೀಡಬಹುದು. ಈ ಬಗ್ಗೆ ಜಿಲ್ಲಾಡಳಿತ ಎಲ್ಲಾ ರೀತಿಯ ಕ್ರಮ ವಹಿಸಲಿದೆ ಎಂದರು.












Click it and Unblock the Notifications